Home ಜಿಲ್ಲೆ ಪತ್ರಕರ್ತರ ಮೇಲಿನ ಪ್ರಕರಣಗಳು ಆತಂಕಕಾರಿ ಬೆಳವಣಿಗೆ; ನಾಗರಾಜ ನ್ಯಾಮತಿ ಪ್ರಕರಣ ಮರುಪರಿಶೀಲನೆಗೆ ಆಗ್ರಹ

ಪತ್ರಕರ್ತರ ಮೇಲಿನ ಪ್ರಕರಣಗಳು ಆತಂಕಕಾರಿ ಬೆಳವಣಿಗೆ; ನಾಗರಾಜ ನ್ಯಾಮತಿ ಪ್ರಕರಣ ಮರುಪರಿಶೀಲನೆಗೆ ಆಗ್ರಹ

ಯಾದಗಿರಿ: ಜೂ.10:ಪತ್ರಕರ್ತ ನಾಗರಾಜ ನ್ಯಾಮತಿ ಅವರ ವಿರುದ್ಧ ಸುರಪುರ ಪೆÇಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣವನ್ನು ನ್ಯಾಯಯುತವಾಗಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ಆಗ್ರಹಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಪತ್ರಕರ್ತರು ಸಮಾಜದ ಆಗುಹೋಗುಗಳನ್ನು ಜನರ ಮುಂದಿಡುವ ಜವಾಬ್ದಾರಿಯುತ ಕಾರ್ಯ ನಿರ್ವಹಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಪತ್ರಕರ್ತರ ವಿರುದ್ಧ ದಾಖಲಾಗುವ ಪ್ರಕರಣಗಳು ಮಾಧ್ಯಮ ಕ್ಷೇತ್ರದಲ್ಲಿ ಆತಂಕ ಮೂಡಿಸುತ್ತಿವೆ ಎಂದು ತಿಳಿಸಿದ್ದಾರೆ.

ಯಾವುದೇ ಪ್ರಕರಣ ದಾಖಲಿಸುವ ಮೊದಲು ವಾಸ್ತವಾಂಶಗಳನ್ನು ಪರಿಶೀಲಿಸುವುದು ಅಗತ್ಯ. ನಾಗರಾಜ ನ್ಯಾಮತಿ ಅವರ ವಿರುದ್ಧ ದಾಖಲಾಗಿರುವ ಪ್ರಕರಣದ ಕುರಿತು ಪೆÇಲೀಸರು ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಆರೋಪಗಳಿಗೆ ಸಂಬಂಧಿಸಿದಂತೆ ಸೂಕ್ತ ಸಾಕ್ಷ್ಯಾಧಾರಗಳಿದ್ದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿ, ಆದರೆ ಆಧಾರರಹಿತವಾಗಿದ್ದರೆ ಪ್ರಕರಣದಿಂದ ಮುಕ್ತಗೊಳಿಸಬೇಕು ಎಂದು ಹೇಳಿದ್ದಾರೆ.

ಮಾಧ್ಯಮಗಳು ಪ್ರಜಾಪ್ರಭುತ್ವದ ಪ್ರಮುಖ ಭಾಗವಾಗಿದ್ದು, ಪತ್ರಕರ್ತರು ಸಮಾಜದ ಸಮಸ್ಯೆಗಳನ್ನು ಎತ್ತಿ ತೋರಿಸುವ ಕೆಲಸ ಮಾಡುತ್ತಿದ್ದಾರೆ. ಅವರ ಕರ್ತವ್ಯ ನಿರ್ವಹಣೆಗೆ ಅಡ್ಡಿಯಾಗುವ ಯಾವುದೇ ಬೆಳವಣಿಗೆಗಳು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಪತ್ರಕರ್ತರು ನಿರ್ಭೀತಿಯಿಂದ ಕೆಲಸ ಮಾಡುವ ವಾತಾವರಣ ನಿರ್ಮಾಣವಾಗಬೇಕು. ಮಾಧ್ಯಮ ಸ್ವಾತಂತ್ರ್ಯವನ್ನು ಕಾಪಾಡುವುದು ಸರ್ಕಾರ ಹಾಗೂ ಪೆÇಲೀಸ್ ಇಲಾಖೆಯ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದ್ದಾರೆ.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಯಾವುದೇ ಒತ್ತಡವಿಲ್ಲದೆ ಸತ್ಯಾಂಶದ ಆಧಾರದ ಮೇಲೆ ತನಿಖೆ ನಡೆಸಿ ನ್ಯಾಯ ಒದಗಿಸಬೇಕು ಎಂದು ಮಲ್ಲಪ್ಪ ಸಂಕೀನ್ ಒತ್ತಾಯಿಸಿದ್ದಾರೆ.