
ವಿಜಯಪುರ, ಜು. 31: ಕಾವೇರಿ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರೈತರ ಹಿತಾಸಕ್ತಿಯನ್ನು ಮೊದಲ ಆದ್ಯತೆಯಾಗಿ ಪರಿಗಣಿಸಿ ದೃಢ ನಿಲುವು ತಾಳಬೇಕು ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಎಕ್ಸ್ ನಲ್ಲಿ ಆಗ್ರಹಿಸಿದ್ದಾರೆ.
“ರೋಮ್ ಹೊತ್ತಿ ಉರಿಯುವಾಗ ದೊರೆ ನೀರೋ ಪಿಟೀಲು ಬಾರಿಸುತ್ತಿದ್ದ” ಎಂಬ ಮಾತನ್ನು ಉಲ್ಲೇಖಿಸಿದ ಯತ್ನಾಳ್, ಕಾವೇರಿ ನೀರಿನ ಸಮಸ್ಯೆ ತೀವ್ರವಾಗಿರುವ ಸಂದರ್ಭದಲ್ಲಿಯೂ ಮುಖ್ಯಮಂತ್ರಿ ದೆಹಲಿ ಪ್ರವಾಸ ಹಾಗೂ ಹೈಕಮಾಂಡ್ ಭೇಟಿಗಳಲ್ಲೇ ನಿರತರಾಗಿರುವುದು ರಾಜ್ಯದ ರೈತರಲ್ಲಿ ಆತಂಕ ಮೂಡಿಸಿದೆ ಎಂದು ಟೀಕಿಸಿದ್ದಾರೆ.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಅWಒಂ) ತಮಿಳುನಾಡಿಗೆ ಪ್ರತಿದಿನ 3,500 ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡುವಂತೆ ನಿರ್ದೇಶನ ನೀಡಿರುವುದು, ರಾಜ್ಯದಲ್ಲಿ ಮಳೆಯ ಕೊರತೆ ಮತ್ತು ಜಲಾಶಯಗಳಲ್ಲಿ ನೀರಿನ ಅಭಾವ ಇರುವ ಈ ಸಂದರ್ಭದಲ್ಲಿ ಕಾರ್ಯಸಾಧ್ಯವಲ್ಲ. ಉತ್ತಮ ಮಳೆಯಾಗಿ ಜಲಾಶಯಗಳು ತುಂಬುವವರೆಗೆ ತಮಿಳುನಾಡಿಗೆ ನೀರು ಹರಿಸಬಾರದು ಎಂದು ಅವರು ಒತ್ತಾಯಿಸಿದ್ದಾರೆ.
ದಿವಂಗತ ಮಾಜಿ ಮುಖ್ಯಮಂತ್ರಿಗಳಾದ ಎಸ್. ಬಂಗಾರಪ್ಪ ಹಾಗೂ ಎಸ್. ಎಂ. ಕೃಷ್ಣ ಅವರು ರಾಜ್ಯದ ಹಿತಾಸಕ್ತಿಗೆ ಆದ್ಯತೆ ನೀಡಿ ಕಾವೇರಿ ವಿಚಾರದಲ್ಲಿ ರಾಜಕೀಯ ಇಚ್ಛಾಶಕ್ತಿ ಪ್ರದರ್ಶಿಸಿದ್ದರು. ಅದೇ ಮಾದರಿಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೂ ರೈತರ ಪರವಾಗಿ ದೃಢ ನಿರ್ಧಾರ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.
ಸರ್ವೋಚ್ಚ ನ್ಯಾಯಾಲಯದಲ್ಲಿ ಕರ್ನಾಟಕದ ಪರವಾಗಿ ಸಮರ್ಥವಾಗಿ ವಾದ ಮಂಡಿಸಬಲ್ಲ ಅನುಭವಿ ಕಾನೂನು ತಜ್ಞರನ್ನು ನೇಮಿಸಿ, ರಾಜ್ಯದ ನೀರಿನ ಹಕ್ಕುಗಳನ್ನು ಬಲವಾಗಿ ಪ್ರತಿಪಾದಿಸಬೇಕು. ನೆಲ, ಜಲ ಮತ್ತು ಭಾಷೆಯ ವಿಷಯದಲ್ಲಿ ಕರ್ನಾಟಕ ಯಾವುದೇ ಕಾರಣಕ್ಕೂ ರಾಜಿ ಮಾಡಿಕೊಳ್ಳಬಾರದು. ರಾಜ್ಯದ ಸ್ವಾಭಿಮಾನ ಹಾಗೂ ರೈತರ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆಗ್ರಹಿಸಿದ್ದಾರೆ.






























