
ಗದಗ,ಸೆ.೪: ಜಿಲ್ಲಾದ್ಯಂತ ಗೌರಿ ಹಾಗೂ ಗಣೇಶ ಚತುರ್ದಶಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ, ಶಿಸ್ತುಬದ್ಧವಾಗಿ ಮತ್ತು ಭಕ್ತಿಪೂರ್ವಕವಾಗಿ ಆಚರಿಸುವಂತೆ ಜಿಲ್ಲಾಧಿಕಾರಿ ಸಿ. ಎನ್.ಶ್ರೀಧರ್ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗೌರಿ-ಗಣೇಶ ಹಬ್ಬ ಆಚರಿಸುವ ಕುರಿತು ಪೂರ್ವಭಾವಿ ಸಿದ್ಧತೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರಾಜ್ಯ ಸರ್ಕಾರವು ರಾಜ್ಯ ವ್ಯಾಪ್ತಿಯಲ್ಲಿನ ಸಮುದ್ರ, ನದಿ, ತೊರೆ, ಹಳ್ಳ, ಕೆರೆ, ಬಾವಿ ಸೇರಿದಂತೆ ಜಲಮೂಲಗಳು ಮಾಲಿನ್ಯಗೊಳ್ಳದಂತೆ ಸಂರಕ್ಷಿಸುವ ಉದ್ದೇಶದಿಂದ ಭಾರಲೋಹ ಮಿಶ್ರಿತ ರಾಸಾಯನಿಕ ಬಣ್ಣಗಳಿಂದ ಅಲಂಕೃತಗೊAಡ ಪ್ಲಾಸ್ಟರ್ ಆಫ್ ಪ್ಯಾರಿಸ್‌ನ ಗಣೇಶ ಮೂರ್ತಿಗಳು ಹಾಗೂ ಇತರೆ ವಿಗ್ರಹಗಳ ಉತ್ಪಾದನೆ, ಮಾರಾಟ ಮತ್ತು ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ ಎಂದು ತಿಳಿಸಿದರು.
ಮಣ್ಣಿನಿಂದ ತಯಾರಿಸಿದ ಹಾಗೂ ನೈಸರ್ಗಿಕ ಬಣ್ಣ ಲೇಪಿತ ಗಣೇಶ ಮೂರ್ತಿಗಳನ್ನು ಮಾತ್ರ ಬಳಸಿ ಹಬ್ಬ ಆಚರಿಸಬೇಕು. ಮೂರ್ತಿಗಳ ವಿಸರ್ಜನೆಯನ್ನು ಸ್ಥಳೀಯ ಸಂಸ್ಥೆಗಳು ನಿಗದಿಪಡಿಸಿರುವ ಸಂಚಾರಿ ವಿಸರ್ಜನಾ ತೊಟ್ಟಿಗಳು ಅಥವಾ ಕಲ್ಯಾಣಿಗಳಲ್ಲಿಯೇ ಮಾಡಬೇಕು. ಈ ಮೂಲಕ ಜಲಮೂಲಗಳ ಸಂರಕ್ಷಣೆಗೆ ಸಾರ್ವಜನಿಕರು ಸಹಕರಿಸಬೇಕು ಎಂದರು.
ಗಣೇಶ ಚತುರ್ಥಿಯನ್ನು ಸರಳವಾಗಿ ಹಾಗೂ ಭಕ್ತಿಪೂರ್ವಕವಾಗಿ ದೇವಸ್ಥಾನಗಳಲ್ಲಿ ಅಥವಾ ತಮ್ಮ ಮನೆಗಳಲ್ಲಿಯೇ ಆಚರಿಸುವಂತೆ ಅವರು ಸಲಹೆ ನೀಡಿದ್ದಾರೆ. ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಹೂವು, ಹಣ್ಣು, ಬಾಳೆಕಂಬ, ಮಾವಿನ ತೋರಣ ಸೇರಿದಂತೆ ಹಸಿ ಕಸವನ್ನು ಮೂರ್ತಿಯೊಂದಿಗೆ ನೀರಿಗೆ ಹಾಕದೆ ಪ್ರತ್ಯೇಕವಾಗಿ ಸಂಗ್ರಹಿಸಿ, ಸ್ಥಳೀಯ ಸಂಸ್ಥೆಗಳ ಮೂಲಕ ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಬೇಕು ಎಂದು ಹೇಳಿದರು.
ಸರ್ಕಾರದ ಆದೇಶ ಹಾಗೂ ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ ರಾತ್ರಿ ೧೦ರಿಂದ ಬೆಳಿಗ್ಗೆ ೬ರವರೆಗೆ ತುರ್ತು ಸಂದರ್ಭ ಹೊರತುಪಡಿಸಿ ಧ್ವನಿವರ್ಧಕ, ಡೋಲು, ತಮ್ಮಟೆ ಸೇರಿದಂತೆ ಧ್ವನಿ ಉಂಟುಮಾಡುವ ಸಾಧನಗಳನ್ನು ಬಳಸುವುದನ್ನು ನಿಷೇಧಿಸಲಾಗಿದೆ. ಸಾರ್ವಜನಿಕರು ಈ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದರು.
ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ನಿಗದಿತ ಸಮಯದಲ್ಲಿ ಮಾತ್ರ ಸಿಡಿಸಬೇಕು. ರಸ್ತೆ ಹಾಗೂ ಚರಂಡಿಗಳಲ್ಲಿ ಹೂವಿನ ಹಾರ, ತಟ್ಟೆ, ಲೋಟ, ಎಲೆ ಸೇರಿದಂತೆ ತ್ಯಾಜ್ಯ ವಸ್ತುಗಳನ್ನು ಎಸೆಯದೆ, ಮನೆಗಳ ಬಳಿ ಬರುವ ಸ್ಥಳೀಯ ಸಂಸ್ಥೆಗಳ ಕಸದ ವಾಹನಗಳಿಗೆ ನೀಡಬೇಕು ಎಂದು ಹೇಳಿದರು.
ಹಬ್ಬದ ಅಲಂಕಾರದಲ್ಲಿ ನಿಷೇಧಿತ ಏಕಬಳಕೆ ಪ್ಲಾಸ್ಟಿಕ್ ವಸ್ತುಗಳನ್ನು ಬಳಸದೆ, ಪರಿಸರ ಸ್ನೇಹಿ ವಸ್ತುಗಳನ್ನು ಬಳಸುವ ಮೂಲಕ ಹಬ್ಬವನ್ನು ಆಚರಿಸಬೇಕು. ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಜಿಲ್ಲಾಡಳಿತದ ಮಾರ್ಗಸೂಚಿಗಳನ್ನು ಪಾಲಿಸಿ ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ ಆಚರಿಸಲು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಸಿ.ಆರ್ ಮುಂಡರಗಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.






















