Home ಜಿಲ್ಲೆ ಗಾಂಧೀಜಿ, ಶಾಸ್ತ್ರಿಜಿ ಜಯಂತಿ ಆಚರಣೆ

ಗಾಂಧೀಜಿ, ಶಾಸ್ತ್ರಿಜಿ ಜಯಂತಿ ಆಚರಣೆ

ಯಾದಗಿರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ನಗರಸಭೆ ಸಹಯೋಗದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಶುಕ್ರವಾರ ಸರಳವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ರಾಹುಲ್ ತುಕಾರಾಮ ಪಾಂಡ್ವೆ ಹಾಗೂ ಅಪರ ಜಿಲ್ಲಾಧಿಕಾರಿ ರಮೇಶ್ ಕೋಲಾರ ಅವರು ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ರಾಹುಲ್ ತುಕಾರಾಮ ಪಾಂಡ್ವೆ, ಮಹಾತ್ಮ ಗಾಂಧೀಜಿ ಅವರು ಪ್ರತಿಪಾದಿಸಿದ ಸತ್ಯ, ಅಹಿಂಸೆ ಹಾಗೂ ಶಾಂತಿಯ ಮೂಲ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಸರಳತೆ, ಪ್ರಾಮಾಣಿಕತೆ ಮತ್ತು ದೇಶಸೇವೆಯ ಆದರ್ಶಗಳು ಇಂದಿಗೂ ಸಮಾಜಕ್ಕೆ ದಾರಿದೀಪವಾಗಿವೆ. ಅವರ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ (ಪ್ರ) ಧರ್ಮದತ್ತಿ ಇಲಾಖೆ ಅಧಿಕಾರಿ ವಿಶ್ವನಾಥ, ಶಿರಸ್ತೇದಾರ್ ರೇಖಾ ದೀಕ್ಷಿತ್, ಜಿಲ್ಲಾಧಿಕಾರಿಗಳ ಆಪ್ತ ಸಹಾಯಕ ವಿಕ್ರಮ ಠಾಕೂರ್ ಸೇರಿದಂತೆ ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.