
ಸಂಜೆವಾಣಿ ವಾರ್ತೆ,
ವಿಜಯಪುರ, ನ.೧೦: ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದ ಕುಲಾಧಿಪತಿ ಬಸನಗೌಡ ಎಂ. ಪಾಟೀಲ ಅವರ ಹುಟ್ಟುಹಬ್ಬವನ್ನು ಸಮಾಜಮುಖಿ ಸೇವಾ ಚಟುವಟಿಕೆಗಳ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಈ ನಿಮಿತ್ತ ಆಸ್ಪತ್ರೆಯಲ್ಲಿ ಜನಿಸಿದ ನವಜಾತ ಶಿಶುಗಳಿಗೆ ಉಚಿತ ಕಿಟ್ಗಳನ್ನು ವಿತರಿಸಲಾಯಿತು. ಅಲ್ಲದೆ, ಆಸ್ಪತ್ರೆಯ ಎಲ್ಲ ಒಳರೋಗಿಗಳಿಗೆ ಹಣ್ಣು-ಹಂಪಲುಗಳನ್ನು ವಿತರಿಸಿ, ಮಾನವೀಯ ಕಾಳಜಿಯೊಂದಿಗೆ ಹುಟ್ಟುಹಬ್ಬದ ಸಂಭ್ರಮ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಅವರು, ಯುವನಾಯಕ ಬಸನಗೌಡ ಎಂ. ಪಾಟೀಲ ಅವರು ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯವನ್ನು ಜ್ಞಾನದ ಕ್ಷೇತ್ರದಲ್ಲಿ ಉತ್ತುಂಗಕ್ಕೇರಿಸುವುದರ ಜತೆಗೆ, ವಿಜಯಪುರದ ಬಡ ಮತ್ತು ಸಾಮಾನ್ಯ ಜನರಿಗೆ ಅತ್ಯುತ್ತಮ ವೈದ್ಯಕೀಯ ಸೇವೆ ಒದಗಿಸುವ ಮಹತ್ವಾಕಾಂಕ್ಷೆಯ ಕನಸು ಹೊಂದಿದ್ದಾರೆ. ಅವರ ಕನಸನ್ನು ನನಸಾಗಿಸುವ ಹೊಣೆಗಾರಿಕೆ ಸಂಸ್ಥೆಯ ಪ್ರತಿಯೊಬ್ಬರ ಮೇಲಿದೆ. ಈ ನಿಟ್ಟಿನಲ್ಲಿ ವೈದ್ಯರು ಹಾಗೂ ಸಿಬ್ಬಂದಿ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.
ಕುಲಸಚಿವ ಡಾ. ರಾಘವೇಂದ್ರ ಕುಲಕರ್ಣಿ ಮಾತನಾಡಿ, ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆದಿದ್ದರೂ ತಾಯ್ನಾಡಿನ ಸೇವೆಗಾಗಿ ವಿಜಯಪುರವನ್ನು ಆಯ್ಕೆ ಮಾಡಿಕೊಂಡಿರುವ ಬಸನಗೌಡ ಎಂ. ಪಾಟೀಲ ಅವರು, ಅತ್ಯಂತ ಕಿರಿಯ ವಯಸ್ಸಿನಲ್ಲಿಯೇ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯವನ್ನು ಸಮರ್ಥವಾಗಿ ಮುನ್ನಡೆಸುತ್ತಿದ್ದಾರೆ. ವಿಜಯಪುರ ಭಾಗದ ಬಡ ಜನರಿಗೆ ಗುಣಮಟ್ಟದ ಶಿಕ್ಷಣ ಹಾಗೂ ಉನ್ನತ ಆರೋಗ್ಯ ಸೇವೆ ಕೈಗೆಟುಕುವ ದರದಲ್ಲಿ ದೊರೆಯುವಂತೆ ಮಾಡುವುದು ಅವರ ಪ್ರಮುಖ ಧ್ಯೇಯವಾಗಿದೆ ಎಂದು ಅವರ ದೂರದೃಷ್ಟಿಯನ್ನು ಶ್ಲಾಘಿಸಿದರು.
ಕಾರ್ಯಕ್ರಮದಲ್ಲಿ ಪರೀಕ್ಷಾ ನಿಯಂತ್ರಣಾಧಿಕಾರಿ ಡಾ. ಶಶಿಧರ ದೇವರಮನಿ, ಪ್ರಾಂಶುಪಾಲೆ ಡಾ. ತೇಜಸ್ವಿನಿ ವಲ್ಲಭ, ವೈದ್ಯಕೀಯ ಅಧೀಕ್ಷಕ ಡಾ. ಎಸ್. ಎನ್. ಬೆಂಟೂರ, ವೈದ್ಯಕೀಯ ಉಪ ಅಧೀಕ್ಷಕ ಡಾ. ರವಿಕುಮಾರ ಬಿರಾದಾರ, ವೈದ್ಯಕೀಯ ನಿರ್ದೇಶಕ ಡಾ. ವಿಜಯಕುಮಾರ ಕಲ್ಯಾಣಪ್ಪಗೊಳ, ಉಪಪ್ರಾಂಶುಪಾಲ ಡಾ. ಆನಂದ ಅಂಬಲಿ, ಸಂಶೋಧನಾ ನಿರ್ದೇಶಕ ಡಾ. ಎಂ. ಎಂ. ಪಾಟೀಲ, ಹಣಕಾಸು ಅಧಿಕಾರಿ ಬಿ. ಎಸ್. ಪಾಟೀಲ, ಉಪಕುಲಸಚಿವ ಸತೀಶ ಪಾಟೀಲ ಸೇರಿದಂತೆ ಪ್ರಾಧ್ಯಾಪಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ವಿಶ್ವವಿದ್ಯಾಲಯದ ಆವರಣದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಿ ಕುಲಾಧಿಪತಿ ಬಸನಗೌಡ ಎಂ. ಪಾಟೀಲ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಲಾಯಿತು.





















