
ವಿಜಯಪುರ, ನ. 16: ಮಕ್ಕಳು ದೇಶದ ನಿಜವಾದ ಸಂಪತ್ತಾಗಿದ್ದು, ಅವರ ಉಜ್ವಲ ಭವಿಷ್ಯಕ್ಕಾಗಿ ಶಿಕ್ಷಣ, ಆರೋಗ್ಯ, ವಿಜ್ಞಾನ ಹಾಗೂ ಮಕ್ಕಳ ಹಕ್ಕುಗಳ ಕ್ಷೇತ್ರಗಳಲ್ಲಿ ಭದ್ರ ಬುನಾದಿ ಹಾಕಿದ ಮಾಜಿ ಪ್ರಧಾನಿ ಪಂಡಿತ ಜವಾಹರಲಾಲ್ ನೆಹರು ಅವರು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಹಲವಾರು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಎಂದು ಶಾಲಾ ಪ್ರಧಾನಮಂತ್ರಿ ಆಯಿಷಾಬಾನು ಕಮಲಾಪುರ ಹೇಳಿದರು.
ಇಂಡಿ ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಶನಿವಾರ ಪಂಡಿತ ಜವಾಹರಲಾಲ್ ನೆಹರು ಅವರ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ದೇಶದ ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕೆಂಬ ಆಶಯದೊಂದಿಗೆ ನೆಹರು ಅವರು ಪಂಚವಾರ್ಷಿಕ ಯೋಜನೆಗಳಲ್ಲಿ ಉಚಿತ ಮತ್ತು ಕಡ್ಡಾಯ ಪ್ರಾಥಮಿಕ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದರು. ಗ್ರಾಮೀಣ ಪ್ರದೇಶದ ಮಕ್ಕಳು ಕೂಡ ಶಿಕ್ಷಣವಂತರಾಗಬೇಕು ಎಂಬ ಉದ್ದೇಶದಿಂದ ದೇಶಾದ್ಯಂತ ಸರ್ಕಾರಿ ಶಾಲೆಗಳ ಸ್ಥಾಪನೆಗೆ ಒತ್ತು ನೀಡಿದ್ದರು ಎಂದು ತಿಳಿಸಿದರು.
ಸಾಂಸ್ಕøತಿಕ ಸಚಿವೆ ಶಮೀನಾ ಅಂಗಡಿ ಮಾತನಾಡಿ, ಮಕ್ಕಳಲ್ಲಿನ ಅಪೌಷ್ಟಿಕತೆ ನಿವಾರಿಸುವ ಉದ್ದೇಶದಿಂದ ಪಂಚವಾರ್ಷಿಕ ಯೋಜನೆಗಳ ಮೂಲಕ ಶಾಲಾ ಮಕ್ಕಳಿಗೆ ಹಾಲು ವಿತರಣೆ ಹಾಗೂ ಮಧ್ಯಾಹ್ನದ ಬಿಸಿಯೂಟದಂತಹ ಕಲ್ಯಾಣ ಕಾರ್ಯಕ್ರಮಗಳಿಗೆ ಉತ್ತೇಜನ ನೀಡಿದ್ದು ಶ್ಲಾಘನೀಯ ಎಂದರು.
ಕ್ರೀಡಾ ಸಚಿವೆ ಸಾನಿಯಾ ಮುಲ್ಲಾ ಮಾತನಾಡಿ, ಮಕ್ಕಳು ದೇಶದ ಅಮೂಲ್ಯ ಸಂಪತ್ತು. ಇಂದಿನ ಮಕ್ಕಳಲ್ಲಿ ಪ್ರೀತಿ, ಕರುಣೆ, ಸಹಬಾಳ್ವೆ ಮತ್ತು ಪರಸ್ಪರ ಗೌರವದಂತಹ ಮಾನವೀಯ ಮೌಲ್ಯಗಳನ್ನು ಬೆಳೆಸಿದರೆ ಸಮಾಜದಲ್ಲಿನ ಅಸಮಾನತೆ ಕಡಿಮೆ ಮಾಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಶಿಕ್ಷಕರಾದ ಸಂತೋಷ ಬಂಡೆ, ಎಸ್.ಎಸ್. ಅರಬ, ಎನ್.ಬಿ. ಚೌಧರಿ ಹಾಗೂ ಮುಖ್ಯಶಿಕ್ಷಕ ಕೆ.ಐ. ಮಕಾನದಾರ ಅವರು ಮಕ್ಕಳ ದಿನಾಚರಣೆಯ ಮಹತ್ವ ಹಾಗೂ ಮಕ್ಕಳ ವ್ಯಕ್ತಿತ್ವ ವಿಕಸನದ ಕುರಿತು ಮಾತನಾಡಿದರು.
ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಶಿಕ್ಷಕಿ ಎಸ್.ಪಿ. ಪೂಜಾರಿ, ಅತಿಥಿ ಶಿಕ್ಷಕ ಅಫ್ತಾಬ್ ಮುಲ್ಲಾ ಸೇರಿದಂತೆ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


















