ಮಕ್ಕಳು ಪ್ರತಿನಿತ್ಯ ಶಾಲೆಗೆ ಬಂದು ಅಧ್ಯಯನಮಾಡಿ

ಯಾದಗಿರಿ,ನ.೧೫:ಮಕ್ಕಳು ಪ್ರತಿನಿತ್ಯ ಶಾಲೆಗೆ ಬಂದು ಅಧ್ಯಯನ ಮಾಡಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲವೀಶ್ ಓರಾಡಿಯಾ ಅವರು ಹೇಳಿದರು. ಗುರುಮಠಕಲ್ ತಾಲೂಕಿನ ಕೊಂಕಲ್ ಗ್ರಾಮದ ಸರ್ಕಾರಿ ಮಾದರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಪೋಷಕರ-ಶಿಕ್ಷಕರ ಮಹಾಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿ, ಪೋಷಕರು ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಕಾಳಜಿ ವಹಿಸಬೇಕು ಎಂದರು. ನಂತರ ಮಕ್ಕಳ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ವಸ್ತು ಪ್ರದರ್ಶನ ವೀಕ್ಷಿಸಿ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದರು. ಪೋಷಕರು ಮತ್ತು ಶಿಕ್ಷಕರ ಜೊತೆ ಚರ್ಚಿಸಿದರು. ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿದರು. ಆನಂತರ ಗ್ರಂಥಾಲಯ, ಅಂಗನವಾಡಿ ಕೇಂದ್ರ, ಕೂಸಿನ ಮನೆ, ಬಿಸಿಯೂಟದ ವ್ಯವಸ್ಥೆ ಕುರಿತು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಶಿಕ್ಷಣಾಧಿಕಾರಿಗಳು, ಶಿಕ್ಷಕರು, ಎಸ್ ಡಿ ಎಂ ಸಿ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗದವರು, ಪೋಷಕರು, ಮಕ್ಕಳು ಹಾಜರಿದ್ದರು.