
ಗುಬ್ಬಿ, ಅ. ೧೦- ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಪಟ್ಟಣ ಪಂಚಾಯಿತಿ ವತಿಯಿಂದ ಪೌರ ಕಾರ್ಮಿಕರು ಹಾಗೂ ಸಿಬ್ಬಂದಿಗೆ ಪಟ್ಟಣದ ಜೂನಿಯರ್ ಕಾಲೇಜು ಆಟದ ಮೈದಾನದಲ್ಲಿ ವಿವಿಧ ಕ್ರೀಡಾಕೂಟಗಳನ್ನು ಆಯೋಜಿಸಲಾಗಿತ್ತು.
ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಂಜುಳಾದೇವಿ ಅವರು ಬ್ಯಾಸ್ಕೆಟ್ಬಾಲ್ ಆಡುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಗುಂಡು ಎಸೆತ, ಹಗ್ಗಜಗ್ಗಾಟ, ಮ್ಯೂಸಿಕಲ್ ಚೇರ್, ಮಡಿಕೆ ಹೊಡೆಯುವಾಟ ಸೇರಿದಂತೆ ವಿವಿಧ ಸ್ಪರ್ಧೆಗಳಲ್ಲಿ ಪೌರ ಕಾರ್ಮಿಕರು ಹಾಗೂ ಸಿಬ್ಬಂದಿ ಉತ್ಸಾಹದಿಂದ ಭಾಗವಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಂಜುಳಾದೇವಿ, ವರ್ಷವಿಡೀ ಪಟ್ಟಣದ ಸ್ವಚ್ಛತೆಗಾಗಿ ಶ್ರಮಿಸುವ ಪೌರ ಕಾರ್ಮಿಕರಿಗೆ ಕೆಲಸದ ಒತ್ತಡದಿಂದ ಕೊಂಚ ನೆಮ್ಮದಿ ಹಾಗೂ ಮನೋಲ್ಲಾಸ ನೀಡುವ ಉದ್ದೇಶದಿಂದ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದರು.
ವಿಜೇತರಿಗೆ ಪೌರ ಕಾರ್ಮಿಕರ ದಿನಾಚರಣೆ ಸಂದರ್ಭದಲ್ಲಿ ಬಹುಮಾನ ವಿತರಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಇಂಜಿನಿಯರ್ ಬಿಂದು ಸಾರಾ, ಕಂದಾಯ ನಿರೀಕ್ಷಕಿ ಗಿರಿಜಮ್ಮ, ಬಸವರಾಜು, ಅಂತರಾಜು ಸೇರಿದಂತೆ ಸಿಬ್ಬಂದಿ ಹಾಗೂ ಪೌರ ಕಾರ್ಮಿಕರು ಉಪಸ್ಥಿತರಿದ್ದರು.

























