
ಮಂಡ್ಯ, ಜೂ. ೩೦- ಜಿಲ್ಲೆಯ ಜೀವನ ಅಡಿ ಕೃಷ್ಣರಾಜ ಸಾಗರ ಜಲಾಶಯಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಇಂದು ಕಾವೇರಿ ಮಾತೆಗೆ ಬಾಗಿನ ಸಮರ್ಪಿಸಿದರು.
೯೨ ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಜೂನ್ ತಿಂಗಳ ಅವಧಿಯಲ್ಲೇ ಕೆಆರ್ಎಸ್ ಜಲಾಶಯ ಭರ್ತಿಯಾಗಿದೆ. ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಸುರಿಯುತ್ತಿರುವ ವ್ಯಾಪಕ ಮಳೆಯಿಂದಾಗಿ ಕೆಆರ್ಎಸ್ ಜಲಾಶಯ ಜೂನ್ ತಿಂಗಳಲ್ಲೇ ಭರ್ತಿಯಾಗಿದೆ.
ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಇಂದು ಕಾವೇರಿ ಮಾತೆಗೆ ಬಾಗಿನ ಅರ್ಪಿಸುವ ಮೂಲಕ ಜೂನ್ನಲ್ಲಿ ಬಾಗಿನ ಅರ್ಪಿಸಿದ ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಸಿದ್ದರಾಮಯ್ಯ ಪಾತ್ರರಾಗಿದ್ದಾರೆ.
ಜೂನ್ ೨೮ ರಂದೇ ಜಲಾಶಯ ಭರ್ತಿಯಾಗಿದ್ದು, ವೇದಬ್ರಹ್ಮ ಡಾ. ಭಾನುಪ್ರಕಾಶ್ ಶರ್ಮ ನೇತೃತ್ವದಲ್ಲಿ ಧಾರ್ಮಿಕ ನಿಧಿವಿಧಾನಗಳು ನೆರವೇರಿದವು.
ಬಾಗಿನ ಸಮರ್ಪಣೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಕೆಆರ್ಎಸ್ ಜಲಾಶಯವನ್ನು ಬಣ್ಣ ಬಣ್ಣದ ಹೂವುಗಳಿಂದ ಅಲಂಕರಿಸಲಾಗಿತ್ತು. ಅಣೆಕಟ್ಟೆ ಗೋಡೆಗೆ ಸುಣ್ಣ, ಬಣ್ಣ ಬಳೆದಿದ್ದು ಎಲ್ಲೆಡೆ ಕನ್ನಡ ಬಾವುಟಗಳು ರಾರಾಜಿಸುತ್ತಿದ್ದ ದೃಶ್ಯ ಕಂಡು ಬಂದಿತ್ತು.
ಕಾರ್ಯಕ್ರಮದಲ್ಲಿ ಸಚಿವರಾದ ಎಚ್. ಸಿ.ಮಹಾದೇವಪ್ಪ, ಕೆ. ವೆಂಕಟೇಶ್, ಎನ್.ಎಸ್. ಬೋಸರಾಜು, ಹಾಗೂ ಸ್ಥಳೀಯ ಶಾಸಕರು ಪಾಲ್ಗೊಂಡಿದ್ದರು.