ಮಾಧ್ಯಮ ಸಂಜೀವಿನಿ ಯೋಜನೆಗೆ ಸಿಎಂ ಚಾಲನೆ

ನಗರದ ವಾರ್ತಾ ಸೌಧದ ಸುಲೋಚನಾ ಸಭಾಂಗಣದಲ್ಲಿ ಇಂದು ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಧ್ಯಮ ಸಂಜೀವಿನಿ ಯೋಜನೆಗೆ ಚಾಲನೆ ನೀಡಿದರು. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಪ್ರಭಾಕರ್, ರಾಜಕೀಯ ಕಾರ್ಯದರ್ಶಿ ನಜೀರ್ ಅಹಮದ್, ಹಿರಿಯ ಪತ್ರಕರ್ತ ಪಿ. ಸಾಯಿನಾಥ್, ಖ್ಯಾತ ಸಾಹಿತಿ ರಹಮತ್ ತರೀಕೆರೆ, ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯುಷ ಖಾನೂಂ, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಮತ್ತಿತರರು ಇದ್ದಾರೆ.

ಬೆಂಗಳೂರು, ಜು. ೧- ಪತ್ರಿಕಾ ದಿನಾಚರಣೆಯ ದಿನವಾದ ಇಂದು ರಾಜ್ಯದ ಪತ್ರಕರ್ತರಿಗೆ ರಾಜ್ಯ ಸರ್ಕಾರ ಶುಭ ಸುದ್ದಿ ನೀಡಿದ್ದು, ಮಾಧ್ಯಮ ಸಂಜೀವಿನಿ ಮತ್ತು ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್ ಯೋಜನೆಗಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂದು ಚಾಲನೆ ನೀಡಿದರು.


ಬೆಂಗಳೂರಿನ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಭಾಭವನದಲ್ಲಿಂದು ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯದ ಪತ್ರಕರ್ತರಿಗೆ ಐದು ಲಕ್ಷದವರೆಗೂ ಉಚಿತ ಆರೋಗ್ಯ ಸೇವೆ ಒದಗಿಸುವ ಮಾಧ್ಯಮ ಸಂಜೀವಿನಿ ಯೋಜನೆಗೆ ಚಾಲನೆ ನೀಡಿದರು.


ಹಾಗೆಯೇ ಗ್ರಾಮೀಣ ಪತ್ರಕರ್ತರಿಗೆ ಜಿಲ್ಲೆಯಲ್ಲಿ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಉಚಿತ ಪ್ರಯಾಣದ ಪಾಸ್‌ಗಳನ್ನು ಮುಖ್ಯಮಂತ್ರಿಗಳು ವಿತರಿಸಿದರು.


ಮಾಧ್ಯಮ ಸಂಜೀವಿನಿ ಯೋಜನೆ ಜಾರಿ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬಜೆಟ್‌ನಲ್ಲಿ ಘೋಷಣೆ ಮಾಡಿದ್ದರು. ಅದರಂತೆ ಈ ಯೋಜನೆಯನ್ನು ಜಾರಿ ಮಾಡಲಾಗಿದ್ದು, ರಾಜ್ಯದ ಪತ್ರಕರ್ತರಿಗೆ ಸರ್ಕಾರ ನಿಗದಿಪಡಿಸಿರುವ ಖಾಸಗಿ ಆಸ್ಪತ್ರೆಗಳಲ್ಲಿ ಐದು ಲಕ್ಷಗಳವರೆಗೂ ಉಚಿತ ಆರೋಗ್ಯ ಸೇವೆಯ ಸೌಲಭ್ಯ ಸಿಗಲಿದೆ.


ಹಾಗೆಯೇ ಗ್ರಾಮೀಣ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರು ಇಂದಿನಿಂದ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು.


ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಪ್ರಭಾಕರ್, ರಾಜಕೀಯ ಕಾರ್ಯದರ್ಶಿ ನಜೀರ್ ಅಹಮದ್, ಹಿರಿಯ ಪತ್ರಕರ್ತ ಪಿ. ಸಾಯಿನಾಥ್, ಖ್ಯಾತ ಸಾಹಿತಿ ರಹಮತ್ ತರೀಕೆರೆ, ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯುಷ ಖಾನೂಂ, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿ ಜೆ.ಸಿ. ಲೋಕೇಶ್, ವಾರ್ತಾ ಇಲಾಖೆಯ ಆಯುಕ್ತ ಹೇಮಂತ್ ಲಿಂಬ್ಳಾಕರ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಕಾವೇರಿ, ಕರ್ನಾಟಕ ಮಹಿಳಾ ಪತ್ರಕರ್ತೆಯರ ಅಧ್ಯಕ್ಷೆ ಅಧ್ಯಕ್ಷೆ ಪದ್ಮ ಶಿವಮೊಗ್ಗ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.