ಕಲಬುರಗಿ, ಸೆ. ೩೦- ಕಲ್ಯಾಣ ಕರ್ನಾಟಕದ ನೆರೆ ಪೀಡಿತ ಜಿಲ್ಲೆಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ವೈಮಾನಿಕ ಸಮೀಕ್ಷೆ ನಡೆಸಿ ಪ್ರವಾಹದಿಂದ ಆಗಿರುವ ಹಾನಿಯನ್ನು ವೀಕ್ಷಿಸಿದರು.
ಬೆಂಗಳೂರಿನಿಂದ ಇಂದು ಬೆಳಿಗ್ಗೆ ಕಲಬರುಗಿ ವಿಶೇಷ ವಿಮಾನದಲ್ಲಿ ಆಗಮಿಸಿದ ಮುಖ್ಯಮಂತ್ರಿಗಳು ಇಲ್ಲಿನ ವಿಮಾನ ನಿಲ್ದಾಣದಿಂದಲ್ಲೇ ಹೆಲಿಕಾಪ್ಟರ್ ಏರಿ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದರು.
ಸುಮಾರು ೨ ಗಂಟೆಗೂ ಹೆಚ್ಚು ಕಾಲ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರುಗಳಾದ ಈಶ್ವರ್ ಖಂಡ್ರೆ, ಪ್ರಿಯಾಂಕಾ ಖರ್ಗೆ, ಕೃಷ್ಣ ಬೈರೇಗೌಡ, ಡಾ. ಶರಣ ಪ್ರಕಾಶ್ ಪಾಟೀಲ್ ಇವರುಗಳ ಜೊತೆ ಕಲಬುರಗಿ, ಬೀದರ್, ಯಾದಗಿರ್ ಹಾಗೂ ಬೀದರ್ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳನ್ನು ವೀಕ್ಷಿಸಿದರು.
ವೈಮಾನಿಕ ಸಮೀಕ್ಷೆಗಳ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲಬುರಗಿಗೆ ಆಗಮಿಸಿ, ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸಲು ಕೈಕೊಳ್ಳಬೇಕಾದ ತುರ್ತು ಕ್ರಮಗಳ ಬಗ್ಗೆ ಕಲಬುರಗಿ, ಬೀದರ್, ವಿಜಯಪುರ, ಯಾದಗಿರಿ, ಜಿಲ್ಲೆಗಳ ಜಿಲ್ಲಾಧಿಕಾರಿಗಳು ಜಿಪಂ ಸಿಒಗಳು ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಮುಖ್ಯಸ್ಥರುಗಳು ಸಭೆ ನಡೆಸಿ, ಪ್ರವಾಹ ಪರಿಸ್ಥಿತಿಯನ್ನು ನಿರ್ವಹಿಸಲು ಕೈಗೊಳ್ಳಬೇಕಾದ ತುರ್ತು ಕ್ರಮಗಳ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿದರು.
ಈ ಸಭೆಯಲ್ಲಿ ಸಚಿವರುಗಳಾದ ಕೃಷ್ಣಬೈರೇಗೌಡ, ಪ್ರಿಯಾಂಕಾ ಖರ್ಗೆ, ಈಶ್ವರ್ ಖಂಡ್ರೆ, ಡಾ. ಶರಣ ಪ್ರಕಾಶ್ ಪಾಟೀಲ್, ಎಂಬಿ ಪಾಟೀಲ್, ಚಲುವರಾಯಸ್ವಾಮಿ, ಭೈರತಿ ಸುರೇಶ್, ಕಲ್ಯಾಣ ಕರ್ನಾಟಕ ಮಂಡಳಿ ಅಧ್ಯಕ್ಷ ಡಾ. ಅಜಯ್ ಸಿಂಗ್ ಸೇರಿದಂತೆ ಹಲವು ಶಾಸಕರು ಭಾಗಿಯಾಗಿದ್ದರು.
ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಮಾರೋಪಾದಿಯಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರವಾಹದಿಂದ ಯಾವುದೇ ರೀತಿಯ ಪ್ರಾಣ ಹಾನಿಯಾಗದಂತೆ ಎಚ್ಚರ ವಹಿಸುವಂತೆಯೂ ಸೂಚನೆ ನೀಡಿದರು.
ಪ್ರವಾಹ ಸಂತ್ರಸ್ತರಿಗೆ ಕೂಡಲೇ ಪರಿಹಾರ ಹಣವನ್ನು ಬಿಡುಗಡೆ ಮಾಡುವಂತೆಯೂ ಸೂಚಿಸಿದ ಅವರು, ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ ಮನೆ ನಿರ್ಮಿಸಲು ಹಣ ಬಿಡುಗಡೆ ಮಾಡುವಂತೆಯೂ ಸೂಚನೆ ನೀಡಿದರು.
ಭೀಮಾ ತೀರದ ಹಲವು ಹಳ್ಳಿಗಳು ಪ್ರವಾಹದಿಂದ ಜಲಾವೃತಗೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕೈಗೊಂಡಿರುವ ಪರಿಹಾರ ಕ್ರಮಗಳ ಬಗ್ಗೆ ಮುಖ್ಯಮಂತ್ರಿಗಳು ಮಾಹಿತಿ ಪಡೆದುಕೊಂಡು, ಪ್ರವಾಹದಿಂದ ಯಾವುದೇ ಜೀವ ಹಾನಿಯಾಗದಂತೆ ಎಚ್ಚರ ವಹಿಸಿ, ಸಂತ್ರಸ್ತರ ನೆರವಿಗೆ ನಿಲ್ಲಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಲಾವೃತಗೊಂಡಿರುವ ಗ್ರಾಮಸ್ಥರನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಿ, ಅವರಿಗೆ ಆಹಾರ, ಕುಡಿಯುವ ನೀರು ಸೇರಿದಂತೆ ಅಗತ್ಯ ಸೌಕರ್ಯಗಳನ್ನು ಒದಗಿಸಬೇಕು.
ಈಗಾಗಲೇ ತೆರೆದಿರುವ ಕಾಳಜಿ ಕೇಂದ್ರಗಳಲ್ಲಿ ಪ್ರವಾಹ ಸಂತ್ರಸ್ತರಿಗೆ ಏನೆಲ್ಲಾ ಸೌಕರ್ಯಗಳನ್ನು ಒದಗಿಸಲಾಗಿದೆ ಎಂಬ ಬಗ್ಗೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಧಿಕಾರಿಗಳಿಗೆ ಮಾಹಿತಿ ಪಡೆದುಕೊಂಡು, ಪ್ರವಾಹ ಪರಿಹಾರ ಕಾರ್ಯಗಳನ್ನು ಸಮಾರೋಪಾದಿಯಲ್ಲಿ ಕೈಗೊಳ್ಳುವಂತೆ ಸೂಚನೆ ನೀಡಿದರು.


























