ಕಾರ್ಮಿಕ ಹಾಗೂ ಬಾಲ್ಯವಿವಾಹ ಮುಕ್ತ ಭಾರತ ನಿರ್ಮಾಣಕ್ಕೆ ಸಮುದಾಯದ ಸಹಕಾರ ಅಗತ್ಯ:ಹಿರಿಯ ಸಿವಿಲ್ ನ್ಯಾಯಾಧೀಶ ಮರಿಯಪ್ಪ

ಯಾದಗಿರಿ:ಫೆ.೪:ಕಾರ್ಮಿಕ ಹಾಗೂ ಬಾಲ್ಯವಿವಾಹ ಮುಕ್ತ ಭಾರತ ನಿರ್ಮಾಣವಾಗಲು ಸಮುದಾಯದ ಪ್ರತಿಯೊಬ್ಬರೂ ಕೈಜೋಡಿಸಬೇಕೆಂದು ಯಾದಗಿರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಗೌರವಾನ್ವಿತ ಶ್ರೀ ಮರಿಯಪ್ಪ ಅವರು ಹೇಳಿದರು.

ಯಾದಗಿರಿ ಜಿಲ್ಲೆಯ ಖಾನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ನಡೆದ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ೨೦೨೫-೨೬ನೇ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆ (ಎಸ್‌ಸಿಎಸ್‌ಪಿ) ಹಾಗೂ ಗಿರಿಜನ ಉಪಯೋಜನೆ (ಟಿಎಸ್‌ಪಿ) ಅಡಿಯಲ್ಲಿ “ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ-೧೯೮೬ (೨೦೧೬ರ ತಿದ್ದುಪಡಿ)”ಕುರಿತು ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಬಾಲಕಾರ್ಮಿಕ ಹಾಗೂ ಬಾಲ್ಯವಿವಾಹ ಸಮಾಜದ ಪ್ರಗತಿಗೆ ದೊಡ್ಡ ಅಡ್ಡಿಯಾಗಿದ್ದು, ಅವುಗಳ ನಿರ್ಮೂಲನೆಗೆ ಜನಜಾಗೃತಿ ಅತ್ಯಂತ ಅಗತ್ಯವೆಂದು ಅವರು ಹೇಳಿದರು.

ಕಾರ್ಮಿಕ ಅಧಿಕಾರಿಗಳಾದ ಶ್ರೀಹರಿ ದೇಶಪಾಂಡೆ ಮಾತನಾಡಿ, ಭಾರತೀಯ ಸಂವಿಧಾನದ ೨೧ಎ ವಿಧಿಯಂತೆ ೬ ರಿಂದ ೧೪ ವರ್ಷದ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕಾಗಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಯೂ ಈ ಹಕ್ಕನ್ನು ಬಳಸಿಕೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾ ಬಾಲಕಾರ್ಮಿಕ ಯೋಜನೆಯ ನಿರ್ದೇಶಕರಾದ ರಿಯಾಜ್ ಪಟೇಲ್ ವರ್ಕನಳ್ಳಿ ಮಾತನಾಡಿ, ಮಕ್ಕಳನ್ನು ಶಾಲೆಯಿಂದ ದೂರವಿಟ್ಟು ಕೆಲಸಕ್ಕೆ ಕಳುಹಿಸುವುದು ಹಾಗೂ ಕೆಲಸಕ್ಕೆ ನೇಮಿಸಿಕೊಳ್ಳುವುದು ಕಾನೂನುಬಾಹಿರವಾಗಿದ್ದು, ತಪ್ಪಿತಸ್ಥರ ಮೇಲೆ ೨೦,೦೦೦ ರಿಂದ ೫೦,೦೦೦ ವರೆಗೆ ದಂಡ ಹಾಗೂ ೬ ತಿಂಗಳಿAದ ೨ ವರ್ಷವರೆಗೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಎಚ್ಚರಿಸಿದರು. ಶಾಲೆಗೆ ಹೋಗುವ ಮಕ್ಕಳನ್ನು ಆಟೋ, ಟಂಟA ಮೂಲಕ ಕೃಷಿ ಅಥವಾ ಇತರ ಕೆಲಸಗಳಿಗೆ ಕರೆದುಕೊಂಡು ಹೋಗುತ್ತಿರುವುದು ಕಂಡುಬAದಲ್ಲಿ ಮಕ್ಕಳ ಸಹಾಯವಾಣಿ ೧೦೯೮ಕ್ಕೆ ಮಾಹಿತಿ ನೀಡುವಂತೆ ಮನವಿ ಮಾಡಿದರು.

ಈ ಸಂದರ್ಭ ಬಾಲ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿಷೇಧ ಕುರಿತು ಆಯೋಜಿಸಿದ್ದ ಚಿತ್ರಕಲೆ, ಪ್ರಬಂಧ ಮತ್ತು ಭಾಷಣ ಸ್ಪರ್ಧೆಗಳಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಕಾರ್ಮಿಕ ನಿರೀಕ್ಷಕರಾದ ಸಂಗೀತಾ ಹೊನ್ನೂರು, ಪ್ಯಾನಲ್ ವಕೀಲ ಭೀಮಶಂಕರ ಆಶನಾಳ, ಡಾನ್ ಬೋಸ್ಕೋ ಸಮಾಜ ಸೇವಾ ಕೇಂದ್ರದ ನಿರ್ದೇಶಕ ಫ್ರಾನ್ಸಿಸ್ ಶಾಬು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಾಜೇಂದ್ರ ಕುಮಾರ್, ದೇವಪ್ಪ ಗಿರಿಗಿರಿ, ಎಸ್‌ಡಿಎಂಸಿ ಅಧ್ಯಕ್ಷ ಹಣಮಂತ, ಶಿಕ್ಷಕರಾದ ರೀಟಾ, ಜೈಸುಧಾ, ಚಂದ್ರಭಾಗ, ಅಮೀನ್ ಪಾಷಾ, ಗ್ರಾಮಸ್ಥ ಹಣಮಂತ ಹೊಸಮನಿ, ಕಾರ್ಮಿಕ ಇಲಾಖೆಯ ದೀಪಕ್ ಸಿಂಗ್, ಬಾಲು ನಾಯಕ ಸೇರಿದಂತೆ ಹಲವರು ಉಪಸ್ಥಿತರಿದ್ದರು.