
ಬೀದರ್: ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ಪಾಲ್ ಸುವರ್ಣ ಅವರು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಅವಹೇಳನಕಾರಿ ಹಾಗೂ ಬೆದರಿಕೆ ಸ್ವರೂಪದ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ, ಅವರ ವಿರುದ್ಧ ಎಫ್‍ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಬೀದರ್ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಗಳಿಗೆ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಹಾಗೂ ಸಂವಿದಾನ ಸಂರಕ್ಷಣ ಸಮಿತಿ, ವಿವಿಧ ದಲಿತಪರ ಮತ್ತು ಅಹಿಂದ್ ಸಂಘಟನೆಗಳ ಮುಖಂಡರು ಮನವಿ ಸಲ್ಲಿಸಿದರು.
ಜುಲೈ 26ರಂದು ಉಡುಪಿ ನಗರದ ಬಸ್ ನಿಲ್ದಾಣದ ಸಮೀಪ ನಡೆದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಶಾಸಕ ಯಶ್ಪಾಲ್ ಸುವರ್ಣ ಅವರು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡುವ ವೇಳೆ ರಾಹುಲ್ ಗಾಂಧಿ ಅವರ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿದ್ದು, ಅವರ ಕುಟುಂಬದ ವಿರುದ್ಧ ಬೆದರಿಕೆ ಹಾಕುವ ರೀತಿಯ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಇಂತಹ ಹೇಳಿಕೆಗಳು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದ್ದು, ಸಮಾಜದಲ್ಲಿ ಅಶಾಂತಿ ಉಂಟುಮಾಡುವ ಸಾಧ್ಯತೆಯಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಭಾರತದ ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಬದುಕುವ ಹಕ್ಕನ್ನು ನೀಡಿದ್ದು, ಯಾವುದೇ ವ್ಯಕ್ತಿಯ ವಿರುದ್ಧ ಕೊಲೆ ಬೆದರಿಕೆ ಅಥವಾ ಪ್ರಚೋದನಕಾರಿ ಹೇಳಿಕೆ ನೀಡುವುದು ಕಾನೂನುಬಾಹಿರ ಎಂದು ಮನವಿಯಲ್ಲಿ ತಿಳಿಸಲಾಗಿದೆ. ಆದ್ದರಿಂದ ಸಂಬಂಧಪಟ್ಟವರ ವಿರುದ್ಧ ತಕ್ಷಣ ಎಫ್‍ಐಆರ್ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅಧ್ಯಕ್ಷ ಅಮೃತರಾವ ಚಿಮಕೊಡೆ, ಬೀದರ ದಕ್ಷಿಣ ತಾಲೂಕಾ ಅಧ್ಯಕ್ಷ ನರಸಪ್ಪ ಜಾನಕನೊರ್,ಸಂವಿಧಾನ ಸಂರಕ್ಷಣಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಅನೀಲಕುಮಾರ ಬೆಲ್ದಾರ್, ಗೋವರ್ಧನ ರಾಠೋಡ, ತಾನಾಜಿ ಸಗರ, ರಾಜಕುಮಾರ ಟಿಳ್ಳೆಕರ್, ತುಕಾರಾಮ ಚಿಮಕೋಡೆ ಇನ್ನಿತರರು ಉಪಸ್ಥಿತರಿದ್ದರು.






























