Home ಜಿಲ್ಲೆ ಎಸ್‌ಐಆರ್ ವಿರುದ್ಧ ಯಾದಗಿರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ

ಎಸ್‌ಐಆರ್ ವಿರುದ್ಧ ಯಾದಗಿರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ

ಯಾದಗಿರಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಹಾಗೂ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ರಾಜ್ಯಾದ್ಯಂತ ಹಮ್ಮಿಕೊಂಡಿದ್ದ ಪ್ರತಿಭಟನೆಯ ಭಾಗವಾಗಿ ಸೋಮವಾರ ಯಾದಗಿರಿ ಜಿಲ್ಲಾ ಕೇಂದ್ರದಲ್ಲಿಯೂ ಕಾಂಗ್ರೆಸ್ ಸಮಿತಿಯಿಂದ ಪ್ರತಿಭಟನೆ ನಡೆಯಿತು.

ನಗರದ ಸುಭಾಷ್ ಚಂದ್ರ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಪ್ರತಿಭಟನಾಕಾರರು ಎಸ್‌ಐಆರ್ ಪ್ರಕ್ರಿಯೆ ಹಾಗೂ ಚುನಾವಣಾ ಆಯೋಗದ ಕಾರ್ಯವೈಖರಿ ಕುರಿತು ಆಕ್ಷೇಪ ವ್ಯಕ್ತಪಡಿಸಿ, ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ, ಎಸ್‌ಐಆರ್ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿದರು. ಮುಗ್ಧ ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಡುವ ಮೂಲಕ ಅನ್ಯಾಯವಾಗಿದೆ ಎಂದು ಹೇಳಿದ ಅವರು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.

ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಬಸರೆಡ್ಡಿ ಪಾಟೀಲ್ ಅನಪುರ ಮಾತನಾಡಿ, ಚುನಾವಣಾ ಆಯೋಗವು ಕೇಂದ್ರ ಸರ್ಕಾರದ ಪರವಾಗಿ ಕಾರ್ಯನಿರ್ವಹಿಸುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಎಸ್‌ಐಆರ್ ಪ್ರಕ್ರಿಯೆಯಿಂದ ಕೋಟ್ಯಂತರ ಮತದಾರರ ಹೆಸರುಗಳು ಪಟ್ಟಿಯಿಂದ ಕೈಬಿಡುವ ಆತಂಕವಿದೆ ಎಂದು ಆರೋಪಿಸಿ, ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಮತದಾರರ ಪಟ್ಟಿಯ ಪರಿಷ್ಕರಣೆ ಸಂದರ್ಭದಲ್ಲಿ ಅರ್ಹ ಮತದಾರರ ಹೆಸರುಗಳು ಯಾವುದೇ ಕಾರಣಕ್ಕೂ ಕೈತಪ್ಪದಂತೆ ಚುನಾವಣಾ ಆಯೋಗ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಕಾಂಗ್ರೆಸ್ ಮುಖಂಡರು ಆಗ್ರಹಿಸಿದರು.

ಜಿಲ್ಲಾ ವಕ್ತಾರ ಸ್ಯಾಮ್ಸನ್ ಮಾಳಿಕೇರಿ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ರಾಜಾ ಗೋಪಾಲ್ ರೆಡ್ಡಿ ಮುದೀರ್, ರಾಘವೇಂದ್ರ ಮಾನಸಗಲ್, ಚಿದಾನಂದಪ್ಪ ಕಾಳೆಬೆಳಗುಂದಿ, ಭೀಮಣ್ಣ ಮೇಟಿ, ಆರೀಫ್ ಕಾಡ್ಲೂರು, ಮಲ್ಲಣ್ಣ ದಾಸನಕೇರಿ, ಬಾಬುರಾವ್ ಕಾಡ್ಲೂರು, ಸಂಜಯ್ ಕುಮಾರ್ ಕವಲಿ, ರಾಜಾ ಕುಮಾರ್ ನಾಯಕ್, ಮಲ್ಲಮ್ಮ ಕೋಮಾರ, ಹೋನೇಶ್ ದೊಡ್ಡಮನಿ, ಮರಿಯಪ್ಪ ಬಿಳ್ಹಾರ್, ಸುದರ್ಶನ್ ನಾಯಕ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಪ್ರತಿಭಟನೆಯ ಹಿನ್ನೆಲೆಯಲ್ಲಿ ಸುಭಾಷ್ ಚಂದ್ರ ವೃತ್ತದ ಸುತ್ತಮುತ್ತ ಕೆಲಕಾಲ ರಾಜಕೀಯ ಚಟುವಟಿಕೆಗಳು ಹಾಗೂ ಘೋಷಣೆಗಳು ಮೊಳಗಿದವು.