ವಿಬಿ ಜಿ ರಾಮ್ ಜಿ ಕಾಯ್ದೆ ರದ್ದತಿಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ ನಾಳೆ

ಬೀದರ್:ಜ.೨೩: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ದುರ್ಬಲಗೊಳಿಸಿ ಹೊಸದಾಗಿ ರೂಪಿಸಲಾದ ವಿಬಿ ಜಿ ರಾಮ್ ಜಿ ಕಾಯ್ದೆ ರದ್ದುಪಡಿಸಲು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿಯು ನಗರದಲ್ಲಿ ಶನಿವಾರ (ಜ. ೨೪) ಪ್ರತಿಭಟನಾ ಮೆರವಣಿಗೆ ನಡೆಸಲಿದೆ.
ಪಕ್ಷವು ಅಂದು ಬೆಳಿಗ್ಗೆ ೧೧ಕ್ಕೆ ನಗರದ ಶಿವನಗರದಲ್ಲಿ ಇರುವ ಪಕ್ಷದ ಕಚೇರಿಯಿಂದ ಪ್ರಮುಖ ಬೀದಿಗಳ ಮೂಲಕ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆ ನಡೆಸಿ, ರಾಷ್ಟ್ರಪತಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿಗೆ ಸಲ್ಲಿಸಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ ತಿಳಿಸಿದ್ದಾರೆ.
ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಪ್ರತಿಭಟನೆ ನೇತೃತ್ವ ವಹಿಸಲಿದ್ದಾರೆ. ಪೌರಾಡಳಿತ ಹಾಗೂ ಹಜ್ ಸಚಿವ ರಹೀಂಖಾನ್, ಮಾಜಿ ಸಚಿವ ರಾಜಶೇಖರ ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ಡಾ. ಚಂದ್ರಶೇಖರ ಪಾಟೀಲ, ಭೀಮರಾವ್ ಪಾಟೀಲ, ಮಾಜಿ ಶಾಸಕ ಅಶೋಕ ಖೇಣಿ, ವಿಧಾನ ಪರಿಷತ್ ಮಾಜಿ ಸದಸ್ಯ ವಿಜಯಸಿಂಗ್, ಮುಖಂಡ ಭೀಮಸೇನರಾವ್ ಸಿಂಧೆ ಸೇರಿದಂತೆ ಪಕ್ಷದ ಮುಖಂಡರು ಭಾಗವಹಿಸಲಿದ್ದಾರೆ ಎಂದು ಹೇಳಿದ್ದಾರೆ.
ಕೆಪಿಸಿಸಿ ಪದಾಧಿಕಾರಿಗಳು, ಪಕ್ಷದ ಜಿಲ್ಲಾ, ತಾಲ್ಲೂಕು ಘಟಕ, ಮುಂಚೂಣಿ ಜಿಲ್ಲಾ, ತಾಲ್ಲೂಕು ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ನಾಮ ನಿರ್ದೇಶಿತ ಸದಸ್ಯರು, ಮಹಾನಗರ ಪಾಲಿಕೆ ಸದಸ್ಯರು, ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.