Home Lead News ಮೋದಿ ರಾಜೀನಾಮೆಗೆ “ಕೈ” ಪಟ್ಟು

ಮೋದಿ ರಾಜೀನಾಮೆಗೆ “ಕೈ” ಪಟ್ಟು

ನವದೆಹಲಿ.ಸೆ.೨೯- ಮತದಾರರ ಪಟ್ಟಿ ಮತ್ತು ಚುನಾವಣಾ ಪ್ರಕ್ರಿಯೆಯಲ್ಲಿನ ಅಕ್ರಮ ಆರೋಪಗಳಿಗೆ ಸಂಬಂಧಿಸಿದಂತೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್‌ರನ್ನು ತಕ್ಷಣವೇ ಹುದ್ದೆಯಿಂದ ವಜಾ ಮಾಡಬೇಕು. ಚುನಾವಣಾ ಆಯೋಗದ ಮುಖ್ಯಸ್ಥರ ಮೇಲೆ ಒತ್ತಡ ಹೇರಿದ ಆರೋಪದ ಮೇಲೆ ಪ್ರಧಾನಿ ನರೇಂದ್ರ ಮೋದಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ಆಗ್ರಹಿಸಿದ್ದಾರೆ.

ದೆಹಲಿಯಲ್ಲಿ ಪಕ್ಷದ ಕಚೇರಿಯಲ್ಲಿ ಇಂದು ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿ ಮತ್ತು ಚುನಾವಣಾ ಪ್ರಕ್ರಿಯೆಯಲ್ಲಿನ ಅಕ್ರಮ ಆರೋಪಗಳಿಗೆ ಸಂಬಂಧಿಸಿದ ವಿಷಯಗಳನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸಲಾಗುವುದು.ಈ ಬಗ್ಗೆ ಕಾಂಗ್ರೆಸ್ ಬೀದಿಗಿಳಿದು ಹೋರಾಟ ನಡೆಸಲಿದೆ ಎಂದು ತಿಳಿಸಿದ್ದಾರೆ.

ಸಿಡಬ್ಲ್ಯೂಸಿ ಸಭೆಯಲ್ಲಿ ಖರ್ಗೆ ಐದು ಪ್ರಮುಖ ಬೇಡಿಕೆಗಳನ್ನು ಮಂಡಿಸಿದ್ದಾರೆ.ಮತದಾರರ ಪಟ್ಟಿಯಲ್ಲಿನ ಬದಲಾವಣೆಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಸಾರ್ವಜನಿಕಗೊಳಿಸಬೇಕು, ಹೆಸರುಗಳನ್ನು ಕೈಬಿಡಲಾದ ಮತದಾರರಿಗೆ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಬೇಕು ಮತ್ತು ಎಲ್ಲಾ ರಾಜಕೀಯ ಪಕ್ಷಗಳಿಗೆ ಸರಳ ಸ್ವರೂಪದ ಮತದಾರರ ಪಟ್ಟಿಯನ್ನು ಸಮಯಕ್ಕೆ ಸರಿಯಾಗಿ ಒದಗಿಸಬೇಕು ಎಂದು ಹೇಳಿದರು.

ಗಂಭೀರ ಲೋಪದೋಷಗಳು ಕಂಡುಬಂದ ಕಡೆಗಳಲ್ಲಿ ಸ್ವತಂತ್ರ ಹಾಗೂ ನಿರ್ದಿಷ್ಟ ಕಾಲಮಿತಿಯ ತನಿಖೆ ನಡೆಸಬೇಕು ಮತ್ತು ಮಾಹಿತಿಯನ್ನು ಮುಚ್ಚಿಡಲಾಗುತ್ತಿದೆ ಎಂಬ ಭಾವನೆ ಬಾರದಂತೆ ಚುನಾವಣಾ ಪ್ರಕ್ರಿಯೆಯನ್ನು ಪಾರದರ್ಶಕಗೊಳಿಸಬೇಕು ಎಂದು ಆಗ್ರಹಿಸಿದರು

ಇಬ್ಬರು ಚುನಾವಣಾ ಆಯುಕ್ತರೇ ಸಿಇಸಿ ಅವರ ಕ್ರಮಗಳನ್ನು ಸ್ವೇಚ್ಛಾಚಾರದ ಮತ್ತು ಅಸಮಂಜಸ ನಿರ್ಧಾರ ಎಂದು ಕರೆದಿದ್ದಾರೆ. ಅವರು ಆಡಳಿತಾರೂಢ ಪಕ್ಷಕ್ಕೆ ಸಹಾಯ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂಬುದು ಈಗ ಇಡೀ ದೇಶಕ್ಕೆ ತಿಳಿದಿದೆ. ಇಂತಹ ಪರಿಸ್ಥಿತಿಯಲ್ಲಿ ಆ ಹುದ್ದೆಯಲ್ಲಿ ಮುಂದುವರಿಯುವ ಹಕ್ಕು ಅವರಿಗಿಲ್ಲ ಮತ್ತು ಅವರನ್ನು ತಕ್ಷಣವೇ ತೆಗೆದುಹಾಕಬೇಕು ಎಂದು ಒತ್ತಾಯಿಸಿದರು.

ಕೇಂದ್ರ ಮುಖ್ಯ ಚುನಾವಣಾ ಆಯುಕ್ತರ ಮೇಲೆ ಒತ್ತಡ ಹೇರಿದ ಕಾರಣಕ್ಕಾಗಿ ಪ್ರಧಾನ ಮಂತ್ರಿ ಮೋದಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಹೇಳಿದರು.

ಮತದಾರರ ಪಟ್ಟಿಯಲ್ಲಿ ಪಾರದರ್ಶಕತೆ ಇರಬೇಕು ಮತ್ತು ಚುನಾವಣಾ ಪ್ರಕ್ರಿಯೆಯು ನಿಷ್ಪಕ್ಷಪಾತವಾಗಿರಬೇಕು ಎಂದು ನಾವು ಸಿಡಬ್ಲ್ಯೂಸಿ ಸಭೆಯಲ್ಲಿ ಪ್ರತಿಜ್ಞೆ ಮಾಡಬೇಕು. ಸಂಸ್ಥೆಗಳು ಸ್ವತಂತ್ರವಾಗಿರಬೇಕು ಮತ್ತು ಪ್ರತಿಯೊಬ್ಬ ಭಾರತೀಯನ ಮತವನ್ನು ರಕ್ಷಿಸಬೇಕು ಎಂದರು

ಇದು ನಮ್ಮ ಸಂವಿಧಾನದ ಮೂಲ ಮಂತ್ರವಾಗಿದೆ ಮತ್ತು ನಮ್ಮ ಪ್ರಜಾಪ್ರಭುತ್ವದ ಆತ್ಮವಾಗಿದೆ.ಈ ಜವಾಬ್ದಾರಿಯನ್ನು ಪೂರೈಸುವಲ್ಲಿ ಕಾಂಗ್ರೆಸ್ ಪಕ್ಷವು ಹಿಂದೆ ಸರಿಯುವುದಿಲ್ಲ ಎಂದು ತಿಳಿಸಿದರು.
ಈ ಎಲ್ಲಾ ವಿಷಯಗಳನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸಲಾಗುವುದು ಹಾಗೂ ದೇಶಾದ್ಯಂತ ಬೀದಿಗಿಳಿದು ಹೋರಾಟ ಮಾಡುತ್ತೇವೆ ಎಂದು ಘೋಷಿಸಿದರು.

ಸಿಇಸಿ ವಿರುದ್ಧ ವಿಚಾರಣೆಗೆ ಸುಪ್ರೀಂ ಅಸ್ತು
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ನೇತೃತ್ವದ ಚುನಾವಣಾ ಆಯೋಗದ ಕೆಲವು ನಿರ್ಧಾರಗಳ ಬಗ್ಗೆ ಪ್ರಶ್ನೆ ಎತ್ತಿರುವ ಅರ್ಜಿಯನ್ನು ಮುಂದಿನ ವಾರ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಮಂಗಳವಾರ ಒಪ್ಪಿಗೆ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜಾಯ್‌ಮಾಲ್ಯ ಬಾಗ್ಚಿ ಹಾಗೂ ವಿ. ಮೋಹನಾ ಅವರನ್ನೊಳಗೊಂಡ ಪೀಠದ ಮುಂದೆ ಹಿರಿಯ ವಕೀಲ ವಿಕಾಸ್ ಸಿಂಗ್ ಅವರು ಅರ್ಜಿಯ ತ್ವರಿತ ವಿಚಾರಣೆಗೆ ಮನವಿ ಮಾಡಿದರು.

ಬಹುಸದಸ್ಯರನ್ನೊಳಗೊಂಡ ಚುನಾವಣಾ ಆಯೋಗದ ನಿರ್ಧಾರಗಳು ಕಾನೂನುಬದ್ಧ ವ್ಯವಸ್ಥೆಯ ಪ್ರಕಾರ ಸರ್ವಾನುಮತದಿಂದ ಅಥವಾ ಬಹುಮತದ ಆಧಾರದ ಮೇಲೆ ಕೈಗೊಳ್ಳಬೇಕಾಗುತ್ತದೆ ಎಂದು ವಿಕಾಸ್ ಸಿಂಗ್ ನ್ಯಾಯಪೀಠದ ಗಮನಕ್ಕೆ ತಂದರು. ಪ್ರಸ್ತುತ ಆಯೋಗದ ಕಾರ್ಯವೈಖರಿಯಲ್ಲಿ ಕೆಲವು ನಿರ್ಧಾರಗಳು ಸರ್ವಾನುಮತದಿಂದ ಕೈಗೊಳ್ಳಲಾಗಿದೆಯೇ ಎಂಬ ಬಗ್ಗೆ ಗಂಭೀರ ಅನುಮಾನವಿದೆ ಎಂದು ಅವರು ವಾದಿಸಿದರು.

ಈ ಅರ್ಜಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಸೇರಿದಂತೆ ಚುನಾವಣಾ ಆಯೋಗದ ಇತ್ತೀಚಿನ ಕಾರ್ಯವೈಖರಿ ಕುರಿತು ಎದ್ದಿರುವ ಚರ್ಚೆಯ ನಡುವೆಯೇ ಬಂದಿದೆ.

‘ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಪ್ರಕಾರ, ಚುನಾವಣಾ ಆಯುಕ್ತರಾದ ಸುಖಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರು ಕಳೆದ ೧೦ ತಿಂಗಳಲ್ಲಿ ಎಸ್‌ಐಆರ್‌ಗೆ ಸಂಬಂಧಿಸಿದ ನಿರ್ಧಾರಗಳು ಹಾಗೂ ಆದೇಶಗಳ ಕುರಿತು ಕನಿಷ್ಠ ೧೪ ಬಾರಿ ಆಕ್ಷೇಪ ದಾಖಲಿಸಿದ್ದರು. ಕೆಲವು ನಿರ್ಧಾರಗಳು ತಮ್ಮ ತಿಳಿವಳಿಕೆ ಅಥವಾ ಶಿಫಾರಸು ಇಲ್ಲದೆ ಹೊರಬಂದಿವೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದರು ಎಂದು ವರದಿ ತಿಳಿಸಿದೆ.

ಆದರೆ ಚುನಾವಣಾ ಆಯೋಗವು ಈ ಕುರಿತು ಸ್ಪಷ್ಟನೆ ನೀಡಿದ್ದು, ಸಂಧು ಮತ್ತು ಜೋಶಿ ಅವರು ಕ್ಯಾಬಿನೆಟ್ ಕಾರ್ಯದರ್ಶಿಗೆ ಕಳುಹಿಸಿದ್ದ ಪತ್ರಗಳು ನಿಯೋಜಿತ ಅಧಿಕಾರಿಯ ವಿಷಯಕ್ಕೆ ಸಂಬಂಧಿಸಿದ್ದವು. ಅವು ನೀತಿ ನಿರ್ಧಾರಗಳು ಅಥವಾ ಐಟಿ ವಿಭಾಗದ ವಿಚಾರಗಳಿಗೆ ಸಂಬಂಧಿಸಿಲ್ಲ ಎಂದು ತಿಳಿಸಿದೆ.

ಅರ್ಜಿಯ ಮುಂದಿನ ವಿಚಾರಣೆಯಲ್ಲಿ ಚುನಾವಣಾ ಆಯೋಗದ ಬಹುಸದಸ್ಯ ವ್ಯವಸ್ಥೆ, ನಿರ್ಧಾರ ಕೈಗೊಳ್ಳುವ ವಿಧಾನ ಹಾಗೂ ಇತ್ತೀಚಿನ ವಿವಾದಗಳಿಗೆ ಸಂಬಂಧಿಸಿದ ಅಂಶಗಳು ನ್ಯಾಯಾಲಯದ ಮುಂದೆ ಚರ್ಚೆಗೆ ಬರುವ ಸಾಧ್ಯತೆಯಿದೆ.