
ನವದೆಹಲಿ, ನ.೨೮: ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಕ್ಷೇತ್ರ ಪುನರ್ವಿಂಗಡಣೆ ಮಸೂದೆಗೆ ವಿರೋಧ ವ್ಯಕ್ತಪಡಿಸಿರುವ ಇಂಡಿಯಾ ಮೈತ್ರಿಕೂಟದ ನಾಯಕರು, ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ ಸಜ್ಜಾಗಿದೆ ಎಂದು ರಾಜ್ಯಸಭೆಯ ಪ್ರತಿಪಕ್ರ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಇಂದು ಮಹತ್ವದ ಸಭೆ ನಡೆಯಿತು.
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಲೋಕಸಭೆಯಲ್ಲಿ ಮಂಡಿಸಲು ಮುಂದಾಗಿರುವ ಕ್ಷೇತ್ರ ಪುನರ್ ವಿಂಗಡಣೆ ಮಸೂದೆ ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ ಎಂದು ಆರೋಪಿಸಿದರು.
ಈ ಮಸೂದೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಸಮುದಾಯದ ವಿರುದ್ಧವಾಗಿದೆ. ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಶಾಶ್ವತ ಅಧಿಕಾರದಲ್ಲಿರಲು ಈ ಮಸೂದೆ ಜಾರಿಗೆ ತರಲು ಮುಂದಾಗಿದೆ.ಈ ಹಿನ್ನೆಲೆಯಲ್ಲಿ ಜಂಟಿ ಹೋರಾಟಕ್ಕೆ ತೀರ್ಮಾನಿಸಿದೆ ಎಂದು ಹೇಳಿದರು.
ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.೩೩ರಷ್ಟು ಮೀಸಲಾತಿ ಕಲ್ಪಿಸುವ ಉದ್ದೇಶದೊಂದಿಗೆ ಕೇಂದ್ರ ಸರ್ಕಾರ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯನ್ನು ಕೈಗೆತ್ತಿಕೊಳ್ಳಲು ಮುಂದಾಗಿದೆ. ಆದರೆ ಮಹಿಳಾ ಮೀಸಲಾತಿಯ ಹೆಸರಿನಲ್ಲಿ ಕ್ಷೇತ್ರಗಳ ಮರುಹಂಚಿಕೆ ಮೂಲಕ ರಾಜಕೀಯ ಲಾಭ ಪಡೆಯಲು ಸರ್ಕಾರ ಪ್ರಯತ್ನಿಸುತ್ತಿದೆ ಎಂಬುದು ಪ್ರತಿಪಕ್ಷಗಳ ಪ್ರಮುಖ ಆರೋಪವಾಗಿದೆ.
ನವೆಂಬರ್ ೩೦ರಿಂದ ಸಂಸತ್ತಿನ ವಿಶೇಷ ಅಧಿವೇಶನ
ಕ್ಷೇತ್ರ ಪುನರ್ವಿಂಗಡಣೆ ಮತ್ತು ಮಹಿಳಾ ಮೀಸಲಾತಿ ವಿಚಾರವಾಗಿ ಕೇಂದ್ರ ಸರ್ಕಾರ ಹಾಗೂ ಪ್ರತಿಪಕ್ಷಗಳ ನಡುವೆ ಮತ್ತೊಂದು ಸುತ್ತಿನ ರಾಜಕೀಯ ಸಂಘರ್ಷಕ್ಕೆ ವೇದಿಕೆ ಸಿದ್ಧವಾಗಿದೆ.
ನವೆಂಬರ್ ೩೦ ಮತ್ತು ಡಿಸೆಂಬರ್ ೧ರಂದು ಲೋಕಸಭೆ ಹಾಗೂ ಡಿಸೆಂಬರ್ ೨ ಮತ್ತು ೩ರಂದು ರಾಜ್ಯಸಭೆಯ ವಿಶೇಷ ಅಧಿವೇಶನ ನಡೆಯಲಿದೆ.
ಇಂಡಿಯಾ ಮೈತ್ರಿಕೂಟದ ಮೂರು ಪ್ರಮುಖ ಬೇಡಿಕೆಗಳು
- ಕ್ಷೇತ್ರ ಪುನರ್ವಿಂಗಡಣೆ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟ ಮೂರು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿವೆ.
- ಪ್ರಸ್ತುತ ಇರುವ ಲೋಕಸಭೆಯ ೫೪೩ ಸ್ಥಾನಗಳ ಸಂಖ್ಯೆಯನ್ನು ಮುಂದುವರಿಸಬೇಕು.
ಈಗಿರುವ ಲೋಕಸಭಾ ಸ್ಥಾನಗಳ ಆಧಾರದಲ್ಲಿಯೇ ಮಹಿಳೆಯರಿಗೆ ಶೇ.೩೩ರಷ್ಟು ಮೀಸಲಾತಿ ಜಾರಿಗೊಳಿಸಬೇಕು. - ರಾಜ್ಯಗಳ ನಡುವಿನ ಲೋಕಸಭಾ ಸ್ಥಾನಗಳ ಹಂಚಿಕೆಯ ಪ್ರಮಾಣವನ್ನು ಮುಂದಿನ ೨೫ ವರ್ಷಗಳವರೆಗೆ ಬದಲಾಯಿಸಬಾರದು.























