Home ಜಿಲ್ಲೆ ಸಹಕಾರ ಸಂಘಗಳ ಅಭಿವೃದ್ಧಿಗೆ ನಿರಂತರ ಕಲಿಕೆ ಮುಖ್ಯ : ರೇವಣಸಿದ್ದಪ್ಪ ಪಾಟೀಲ್

ಸಹಕಾರ ಸಂಘಗಳ ಅಭಿವೃದ್ಧಿಗೆ ನಿರಂತರ ಕಲಿಕೆ ಮುಖ್ಯ : ರೇವಣಸಿದ್ದಪ್ಪ ಪಾಟೀಲ್

ಬೀದರ್ ಅ. 30: ಹಾಲು ಉತ್ಪಾದಕರ ಸಹಕಾರ ಸಂಘಗಳ ಅಭಿವೃದ್ಧಿ ಹಾಗೂ ಕಾರ್ಯನಿರ್ವಹಣೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಕಾಲಕಾಲಕ್ಕೆ ತರಬೇತಿ ನೀಡುವುದು ಅಗತ್ಯವಾಗಿದೆ ಎಂದು ಕಲಬುರಗಿ, ಬೀದರ್ ಹಾಗೂ ಯಾದಗಿರಿ ಹಾಲು ಒಕ್ಕೂಟದ ನಿರ್ದೇಶಕ ರೇವಣಸಿದ್ದಪ್ಪ ಪಾಟೀಲ್ ಹೇಳಿದರು.

ನಗರದ ಬೀದರ್ ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣದಲ್ಲಿ ಗುರುವಾರ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಬೀದರ್ ಜಿಲ್ಲಾ ಸಹಕಾರ ಯೂನಿಯನ್, ಕಲಬುರಗಿ, ಬೀದರ್ ಹಾಗೂ ಯಾದಗಿರಿ ಹಾಲು ಒಕ್ಕೂಟ ಮತ್ತು ಸಹಕಾರ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಬಸವಕಲ್ಯಾಣ ಹಾಗೂ ಹುಮನಾಬಾದ್ ತಾಲ್ಲೂಕುಗಳ ಹಾಲು ಉತ್ಪಾದಕರ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗಾಗಿ ಆಯೋಜಿಸಿದ್ದ ಒಂದು ದಿನದ ವಿಶೇಷ ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ತರಬೇತಿಯಿಂದ ಸಂಘಗಳ ಕಾರ್ಯನಿರ್ವಹಣೆಯ ಗುಣಮಟ್ಟ ಸುಧಾರಿಸುವುದರ ಜತೆಗೆ ಹಾಲು ಉತ್ಪಾದನೆ ಹೆಚ್ಚಿಸಲು ಸಹಕಾರಿಯಾಗುತ್ತದೆ. ಕಾರ್ಯದರ್ಶಿಗಳು ತರಬೇತಿಯಲ್ಲಿ ನೀಡುವ ಮಾಹಿತಿಯನ್ನು ಸಮರ್ಪಕವಾಗಿ ಬಳಸಿಕೊಂಡು ತಮ್ಮ ಸಂಘಗಳ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಸಹಕಾರ ಸಂಘಗಳ ಸಹಾಯಕ ನಿಭಂದಕಿ ಡಾ. ನೀಲಾಂಬಿಕ ಮಾತನಾಡಿ, ಪ್ರತಿಯೊಂದು ಸಹಕಾರ ಸಂಘವೂ ಇಂತಹ ತರಬೇತಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಆಡಳಿತಾತ್ಮಕ ಹಾಗೂ ತಾಂತ್ರಿಕ ಜ್ಞಾನ ಹೆಚ್ಚಿಸಿಕೊಳ್ಳಬೇಕು. ಸಂಘಗಳ ಹಣಕಾಸಿನ ವ್ಯವಹಾರಗಳಲ್ಲಿ ಪಾರದರ್ಶಕತೆ ಕಾಪಾಡಲು ಕಾಲಕಾಲಕ್ಕೆ ಲೆಕ್ಕಪರಿಶೋಧನೆ ಮಾಡಿಸಬೇಕು. ಸಹಕಾರ ಸಂಘಗಳ ಚುನಾವಣೆ ಪ್ರಕ್ರಿಯೆ ಹಾಗೂ ಸಂಬಂಧಿತ ನಿಯಮಗಳ ಬಗ್ಗೆಯೂ ಅಧಿಕಾರಿಗಳು ತಿಳಿದುಕೊಳ್ಳಬೇಕು ಎಂದು ಹೇಳಿದರು.

ಕೆ.ಐ.ಸಿ.ಎಂ. ಪ್ರಾಂಶುಪಾಲ ಅರುಣಕುಮಾರ ಬಿ. ಹರಸೂರು ಪ್ರಾಸ್ತಾವಿಕವಾಗಿ ಮಾತನಾಡಿ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಕಾರ್ಯಚಟುವಟಿಕೆಗಳು ಹಾಗೂ ಕೆ.ಐ.ಸಿ.ಎಂ. ಸಂಸ್ಥೆಯ ಉದ್ದೇಶಗಳ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬೀದರ್ ಜಿಲ್ಲಾ ಸಹಕಾರ ಯೂನಿಯನ್ ಉಪಾಧ್ಯಕ್ಷ ವೈಜಿನಾಥ ಅಣ್ಣೆಪ್ಪ ಆನಂದ ಮಾತನಾಡಿ, ಸಹಕಾರ ಯೂನಿಯನ್‍ನ ಕಾರ್ಯಚಟುವಟಿಕೆಗಳು ಮತ್ತು ಸಹಕಾರ ಕ್ಷೇತ್ರದ ಅಭಿವೃದ್ಧಿಯಲ್ಲಿ ತರಬೇತಿ ಕಾರ್ಯಕ್ರಮಗಳ ಮಹತ್ವವನ್ನು ವಿವರಿಸಿದರು.

ಸಹಾರ್ದ ತರಬೇತಿ ಕೇಂದ್ರದ ನಿರ್ದೇಶಕ ಸುಬ್ರಮಣ್ಯ ಪ್ರಭು ಅವರು ‘ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಕರ್ತವ್ಯ ಮತ್ತು ಜವಾಬ್ದಾರಿಗಳು’ ವಿಷಯದ ಕುರಿತು ಉಪನ್ಯಾಸ ನೀಡಿದರು. ಪಶುಪಾಲನಾ ಇಲಾಖೆಯ ಪಶುವೈದ್ಯಾಧಿಕಾರಿ ದೇವಾನಂದ ಅವರು ‘ಶುದ್ಧ ಹಾಲು ಉತ್ಪಾದನೆ ಮತ್ತು ಹಾಲು ಉತ್ಪಾದನೆ ಹೆಚ್ಚಿಸುವ ವಿಧಾನಗಳು’ ಕುರಿತು ಮಾಹಿತಿ ನೀಡಿದರು.

ಜಿಲ್ಲಾ ಸಹಕಾರ ಶಿಕ್ಷಕ ಮಾರುತಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಸಹಕಾರ ಯೂನಿಯನ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಚ್. ಆರ್ ಮಲ್ಲಮ್ಮ ವಂದಿಸಿದರು.

ಕಾರ್ಯಕ್ರಮದಲ್ಲಿ ಬೀದರ್ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕರಾದ ದಯಾನಂದ ಜಿ., ವೀರೇಶ ತೂಗಾಂವ, ಕಿರಣಕುಮಾರ ಕಾಮಶೆಟ್ಟಿ, ಮಲ್ಲಿಕಾರ್ಜುನ ಪಾಂಚಾಳ, ಹಾಲು ಒಕ್ಕೂಟದ ಅಧಿಕಾರಿಗಳು ಹಾಗೂ ಯೂನಿಯನ್ ಸಿಬ್ಬಂದಿ ಉಪಸ್ಥಿತರಿದ್ದರು.