Home ಜಿಲ್ಲೆ ನಾಳೆ ಶೋಷಿತ ಸಮುದಾಯಗಳ ಮುಖಂಡರ ಸಮಾವೇಶ ಹಾಗೂ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಅಭಿನಂದನಾ...

ನಾಳೆ ಶೋಷಿತ ಸಮುದಾಯಗಳ ಮುಖಂಡರ ಸಮಾವೇಶ ಹಾಗೂ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಅಭಿನಂದನಾ ಸಮಾರಂಭ: ಅಮೃತರಾವ ಚಿಮಕೊಡೆ

ಬೀದರ್, ೧: ಶೋಷಿತ ಸಮುದಾಯಗಳ ಹಕ್ಕುಗಳು, ಸಾಮಾಜಿಕ ನ್ಯಾಯ, ಮೀಸಲಾತಿ ಹಾಗೂ ಸಾಮಾಜಿಕ-ಶೈಕ್ಷಣಿಕ-ಆರ್ಥಿಕ ಸಮೀಕ್ಷೆ (ಜಾತಿ ಜನಗಣತಿ) ವರದಿ ಸೇರಿದಂತೆ ವಿವಿಧ ಮಹತ್ವದ ವಿಷಯಗಳ ಕುರಿತು ಚರ್ಚಿಸಿ ಮುಂದಿನ ಹೋರಾಟದ ರೂಪುರೇಷೆ ಸಿದ್ಧಪಡಿಸುವ ಉದ್ದೇಶದಿಂದ ನಾಳೆ(ಆಗಸ್ಟ್ ೨ರಂದು) ನಗರದ ಚನ್ನಬಸವ ಪಟ್ಟದ್ದೇವರ ರಂಗಮAದಿರದಲ್ಲಿ ಶೋಷಿತ ಸಮುದಾಯಗಳ ಮುಖಂಡರ ಸಮಾವೇಶವನ್ನು ಆಯೋಜಿಸಲಾಗಿದೆ. ಇದೇ ಸಂದರ್ಭದಲ್ಲಿ ರಾಜ್ಯದ ನೂತನ ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಅಭಿನಂದನಾ ಸಮಾರಂಭವೂ ನಡೆಯಲಿದೆ ಎಂದು ಸಮಾರಂಭದ ಅಧ್ಯಕ್ಷತೆ ವಹಿಸಿರುವ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿಯ ಜಿಲ್ಲಾಧ್ಯಕ್ಷರು ಹಾಗೂ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷರು ಆದ ಅಮೃತರಾವ ಚಿಮಕೊಡೆ ತಿಳಿಸಿದರು.
ಶುಕ್ರವಾರ ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಟಿ ಉದ್ದೇಶಿಸಿ ಮಾತನಾಡಿರುವ ಅವರು, ೨೦೧೫ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಸಲು ಅಂದಿನ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾಗಿದ್ದ ನ್ಯಾಯವಾದಿ ಎಚ್. ಕಾಂತರಾಜ ಅವರ ನೇತೃತ್ವದಲ್ಲಿ ಸಮೀಕ್ಷೆಗೆ ಆದೇಶಿಸಿತ್ತು. ಬಳಿಕ ಸರ್ಕಾರ ಬದಲಾದ ಹಿನ್ನೆಲೆಯಲ್ಲಿ ಆ ವರದಿ ಜಾರಿಯಾಗದೆ ಉಳಿಯಿತು ಎಂದು ತಿಳಿಸಿದರು.
೨೦೨೩ರಲ್ಲಿ ಮತ್ತೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹೊಸದಾಗಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾದ ಮಧುಸುಧನ ನಾಯಕ್ ಅವರ ನೇತೃತ್ವದಲ್ಲಿ ಸಮೀಕ್ಷೆ ನಡೆಸುವ ಜವಾಬ್ದಾರಿ ನೀಡಲಾಗಿದ್ದು, ಅದರ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಿದೆ ಎಂದು ಅವರು ಹೇಳಿದರು.
ಸಾಮಾಜಿಕ ನ್ಯಾಯದ ಆಶಯಗಳನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಸಂವಿಧಾನದ ೩೪೦, ೩೪೧ ಮತ್ತು ೩೪೨ನೇ ವಿಧಿಗಳ ಆಶಯಗಳಿಗೆ ಅನುಗುಣವಾಗಿ ಪರಿಶಿಷ್ಟ ಜಾತಿಗೆ ಶೇ.೧೭, ಪರಿಶಿಷ್ಟ ಪಂಗಡಕ್ಕೆ ಶೇ.೭ ಹಾಗೂ ಹಿಂದುಳಿದ ವರ್ಗಗಳಿಗೆ ಶೇ.೪೦ ಮೀಸಲಾತಿ ಕಲ್ಪಿಸುವಂತೆ ಸರ್ಕಾರವನ್ನು ಒತ್ತಾಯಿಸುವ ಕುರಿತು ಸಮಾವೇಶದಲ್ಲಿ ಚರ್ಚೆ ನಡೆಯಲಿದೆ ಎಂದು ತಿಳಿಸಿದರು.
ನಗರಾಭಿವೃದ್ಧಿ ಸಚಿವರಾಗಿರುವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಶೋಷಿತ ಸಮುದಾಯಗಳ ಬೇಡಿಕೆಗಳಿಗೆ ಸ್ಪಂದಿಸಿ ಹೋರಾಟಕ್ಕೆ ಬೆಂಬಲ ನೀಡಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಮುಖಂಡರು, ಈ ಹಿನ್ನೆಲೆಯಲ್ಲಿ ಅವರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿರುವ ಚಿಮಕೊಡೆ ಅವರು, ನಾಳೆ ನಡೆಯಲಿರುವ ಈ ಸಮಾವೇಶದಲ್ಲಿ ಅಹಿಂದ ವರ್ಗದ ಸಂಘಟನೆಗಳು, ಶೋಷಿತ ಸಮುದಾಯಗಳ ಮುಖಂಡರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಅವರು ಮನವಿ ಮಾಡಿದರು.
ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷರಾದ ಡಾ.ರಾಜಶೇಖರ ಸೇಡಂಕರ್ ಕಾರ್ಯಕ್ರಮದ ವಿವರಣೆ ನೀಡಿ, ನಾಳೆ ಬೆಳಗ್ಗೆ ೧೧.೦೦ ಗಂಟೆಗೆ ನಗರದ ಡಾ. ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಜರುಗಲಿದೆ. ರಾಜ್ಯ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ ರಾಜ್ ಸಚಿವರು ಮತ್ತು ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ. ಖಂಡ್ರೆ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರನ್ನು ಈ ಸಮಾರಂಭದಲ್ಲಿ ವಿಶೇಷವಾಗಿ ಅಭಿನಂದಿಸಲಾಗುವುದು. ಬೀದರ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಮೃತಬಾವ ಚಿಮಕೋಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮಾಜಿ ಸಚಿವ ರಾಜಶೇಖರ ಬಿ. ಪಾಟೀಲ, ಸ್ಥಳಿಯ ಶಾಸಕ ರಹೀಮ್ ಖಾನ್, ವಿಧಾನ ಪರಿಷತ್ ಸದಸ್ಯರಾದ ಡಾ. ಚಂದ್ರಶೇಖರ ಬಿ. ಪಾಟೀಲ, ಭೀಮರಾವ ಬಿ. ಪಾಟೀಲ, ಬೀದರ ದಕ್ಷಿಣ ಕ್ಷೇತ್ರದ ಮಾಜಿ ಶಾಸಕ ಅಶೋಕ ಖೇಣಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಇವರೊಂದಿಗೆ ಬೆಂಗಳೂರಿನ ಶೋಷಿತ ಸಮುದಾಯಗಳ ಒಕ್ಕೂಟದ ಪ್ರಧಾನ ಸಂಚಾಲಕ ಕೆ.ಎಂ. ರಾಮಚಂದ್ರಪ್ಪ, ದಲಿತ ಸಂಘರ್ಷ ಸಮಿತಿಯ (ಅಂಬೇಡ್ಕರ್ ವಾದ) ಸಂಚಾಲಕ ಮಾವಳ್ಳಿ ಶಂಕರ್, ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಜಬಶೆಟ್ಟಿ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯರಾದ ವಿಜಯಸಿಂಗ್ ಕಾಂಗ್ರೆಸ್ ಮುಖಂಡರಾದ ಭೀಮಸೇನರಾವ ಸಿಂಧೆ ಉಪಸ್ಥಿತರಿರುವರು ಎಂದರು.
ಸAವಿಧಾನ ಸಂರಕ್ಷಣಾ ಸಮಿತಿಯ ಮಹಾ ಪ್ರಧಾನ ಕಾರ್ಯದರ್ಶಿ ಅನಿಲಕುಮಾರ ಬೆಲ್ದಾರ್ ಮಾತನಾಡಿ, ಉಡುಪಿ ಶಾಸಕ ಯಶಪಾಲ ಸೂವರ್ಣ ಅವರು ರಾಹುಲ ಗಾಂಧಿಯವರನ್ನು ಹಾಗೂ ಅವರ ಇಡಿ ಕುಟುಂಬವನ್ನು ಬಾಬರಿ ಮಸಿದಿಗೆ ಹೋಲಿಸಿ ಅವರನ್ನು ಧ್ವಂಸಗೊಳಿಸುವುದಾಗಿ ಹೇಳಿರುವುದು ಇಡೀ ಮಾನವ ಕುಲ ತಲೆ ತಗ್ಗಿಸುವಂತಾಗಿದೆ. ಇದರ ವಿರೂದ್ಧ ಗೃಹ ಇಲಾಖೆ ಕಠಿಣ ಕ್ರಮ ಜರುಗಿಸಬೇಕೆಂದು ಒತ್ತಾಯಿಸಲು ಬೀದರ್ ಎಸ್.ಪಿ ಅವರ ಮೂಲಕ ದೂರು ಸಲ್ಲಿಸಲಾಗುತ್ತಿದೆ ಎಂದರು. ದಲಿತ ಸಂಘರ್ಷ ಸಮಿತಿಯ ಸಂಘಟನಾ ಸಂಚಾಲಕ ರಮೇಶ ಡಾಕುಳಗಿ ಮಾತನಾಡಿದರು.
ಶೋಷಿತ ಸಮುದಾಯಗಳ ಒಕ್ಕೂಟದ ಗೌರವ ಅಧ್ಯಕ್ಷ ಬಸವರಾಜ ಮಾಳಗೆ, ಶೋಷಿತ ಸಮುದಾಯಗಳ ಮುಖಂಡ ಸುನಿಲ ಖಾಶೆಂಪುರ, ದೇವಿದಾಸ ತುಮಕುಂಟೆ, ಗೋವರ್ಧನ ರಾಠೋಡ, ಒ.ಬಿ.ಸಿ ಆರ್ಮಿ ಅಧ್ಯಕ್ಷ ತಾನಾಜಿ ಸಗರ, ಕಾರ್ಯಾಧ್ಯಕ್ಷ ರಾಜಕುಮಾರ ಟಿಳ್ಳೆಕರ್, ಗೊಂಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ತುಕಾರಾಮ ಚಿಮಕೊಡೆ, ಡಿ.ಎಸ್.ಎಸ್ ಜಿಲ್ಲಾ ಸಂಚಾಲಕ ಶಿವಕುಮಾರ ನೀಲಿಕಟ್ಟಿ ಪತ್ರಿಕಾಗೋಷ್ಟಿಯಲ್ಲಿದ್ದರು.