
ಯಾದಗಿರಿ : ಮೇ.೧೬:ಕೇಂದ್ರ ಸರ್ಕಾರ ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಮಾಡಿರುವುದು ಸೇರಿದಂತೆ ಬಂಗಾರ ಖರೀದಿಯ ಮೇಲಿನ ಸುಂಕ ತೆರಿಗೆ ಏರಿಕೆ ಕ್ರಮವನ್ನು ಕರ್ನಾಟಕ ರಾಜ್ಯ ರೈತೋದಯ ಹಸಿರು ಸೇನೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ರುದ್ರಾಂಬಿಕ ಪಾಟೀಲ್ ತೀವ್ರವಾಗಿ ಖಂಡಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜನಸಾಮಾನ್ಯರು ಬಳಸುವ ಪ್ರತಿಯೊಂದು ಅಗತ್ಯ ವಸ್ತುಗಳ ಬೆಲೆಯನ್ನು ಏರಿಸುವ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಡ ಮತ್ತು ಮಧ್ಯಮ ವರ್ಗದ ಜನರ ಜೇಬಿಗೆ ಕತ್ತರಿ ಹಾಕುವ ಕೆಲಸ ಮಾಡುತ್ತಿವೆ ಎಂದು ಆರೋಪಿಸಿದರು.
ಅಡುಗೆ ಅನಿಲ ದರ ಏರಿಕೆಯಿಂದ ಮಹಿಳೆಯರ ಮೇಲಿನ ಆರ್ಥಿಕ ಹೊರೆ ಹೆಚ್ಚಾಗಿದ್ದು, ಅಕ್ಕಿ, ಬೇಳೆ ಸೇರಿದಂತೆ ದಿನಸಿ ವಸ್ತುಗಳ ಬೆಲೆ ಏರಿಕೆಯೂ ಜನಜೀವನವನ್ನು ಸಂಕಷ್ಟಕ್ಕೆ ದೂಡಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು. ಒಂದೆಡೆ ಉಚಿತ ಸಿಲಿಂಡರ್ ನೀಡುವ ಹೆಸರಿನಲ್ಲಿ ಪ್ರಚಾರ ಪಡೆಯುತ್ತಿರುವ ಸರ್ಕಾರ, ಮತ್ತೊಂದೆಡೆ ದರ ಏರಿಕೆಯ ಮೂಲಕ ಜನರಿಂದಲೇ ಹಣ ವಸೂಲಿ ಮಾಡುತ್ತಿರುವುದು ಖಂಡನೀಯ ಎಂದು ಹೇಳಿದರು.
“ಬಂಗಾರ ಖರೀದಿಸಬೇಡಿ, ಪೆಟ್ರೋಲ್-ಡೀಸೆಲ್ ಕಡಿಮೆ ಬಳಸಿ, ವಿದೇಶ ಪ್ರವಾಸ ಹೋಗಬೇಡಿ” ಎಂಬ ರೀತಿಯ ಹೇಳಿಕೆಗಳು ಜನರ ಸಂಕಷ್ಟವನ್ನು ಅರ್ಥಮಾಡಿಕೊಳ್ಳದ ಬಾಲಿಶ ಮನೋಭಾವವನ್ನು ತೋರಿಸುತ್ತವೆ ಎಂದು ಟೀಕಿಸಿದರು.
ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆಯಿಂದ ಸಾರಿಗೆ ವೆಚ್ಚ ಹೆಚ್ಚಾಗಿ, ಅದರ ಪರಿಣಾಮವಾಗಿ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಇದರಿಂದ ಬಡ ಹಾಗೂ ಮಧ್ಯಮ ವರ್ಗದ ಜನರು ತೀವ್ರ ಆರ್ಥಿಕ ಸಂಕಷ್ಟ ಅನುಭವಿಸುತ್ತಿದ್ದು, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದು ಹೇಳಿದರು.
ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ತಕ್ಷಣವೇ ದರ ಏರಿಕೆ ಕುರಿತು ಮರುಪರಿಶೀಲನೆ ನಡೆಸಿ, ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಹಾಗೂ ದಿನಬಳಕೆಯ ವಸ್ತುಗಳ ಬೆಲೆಯನ್ನು ಇಳಿಕೆ ಮಾಡಿ ಜನಸಾಮಾನ್ಯರಿಗೆ ನೆರವಾಗಬೇಕು ಎಂದು ಕರ್ನಾಟಕ ರಾಜ್ಯ ರೈತೋದಯ ಹಸಿರು ಸೇನೆ ಮಹಿಳಾ ಘಟಕದ ಯಾದಗಿರಿ ಜಿಲ್ಲಾಧ್ಯಕ್ಷೆ ರುದ್ರಾಂಬಿಕ ಆರ್. ಪಾಟೀಲ್ ಚಟ್ನಳ್ಳಿ ಆಗ್ರಹಿಸಿದ್ದಾರೆ.

























