
ಬೆಂಗಳೂರು,ಅ.೨೩- ಕರ್ನಾಟಕದ ನಾಲ್ಕು ವಿಧಾನ ಪರಿಷತ್ ಕ್ಷೇತ್ರಗಳಿಗೆ (೨ ಪದವೀಧರ ಮತ್ತು ೨ ಶಿಕ್ಷಕರ ಕ್ಷೇತ್ರಗಳು)ಇಂದು ಬಿರುಸಿನ ಮತದಾನ ನಡೆದಿದ್ದು, ಮತದಾನದ ವೇಳೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಗದಗ ಕಡೆಗಳಲ್ಲಿ ರಾಜಕೀಯ ಪಕ್ಷಗಳ ಕಾರ್ಯಕರ್ತರ ನಡುವೆ ಗಲಾಟೆ,ಘರ್ಷಣೆ, ತಳ್ಳಾಟ,ನೂಕಾಟ ನಡೆದಿದ್ದು,ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.
ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಮತದಾನದ ಸಂದರ್ಭದಲ್ಲಿ ನಾಗರಬಾವಿಯ ಅಂಬೇಡ್ಕರ್ ಕಾಲೇಜಿನಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಮತದಾನ ನಡೆಯುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಕೊಟ್ಟಿಗೆಪಾಳ್ಯದ ಮಾಜಿ ಕಾರ್ಪೊರೇಟರ್ ಹಾಗೂ ಕಾಂಗ್ರೆಸ್ ನಾಯಕರಾದ ಮೋಹನ್ ಕುಮಾರ್ಗೆ ಬಿಜೆಪಿ ಕಾರ್ಯಕರ್ತರು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದ್ದು, ಇದರಿಂದ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ವಾಗ್ವಾದ ನಡೆದು ತಾರಕಕ್ಕೇರಿ ಗಲಾಟೆಗೆ ತಿರುಗಿತ್ತು.
ಬಳಿಕ ಪರಿಸ್ಥಿತಿ ಉದ್ವಿಗ್ನಗೊಂಡಾಗ ಸ್ಥಳಕ್ಕೆ ಧಾವಿಸಿದ ಪೊಲೀಸರು ಮಧ್ಯಪ್ರವೇಶಿಸಿ, ಎರಡೂ ಪಕ್ಷಗಳ ಕಾರ್ಯಕರ್ತರನ್ನು ಚದುರಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.
ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ನಾಗರಬಾವಿಯ ಡಾ. ಅಂಬೇಡ್ಕರ್ ಕಾಲೇಜು ಮತಗಟ್ಟೆ ಬಳಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಸ್ಥಳಕ್ಕೆ ಶಾಸಕ ಮುನಿರತ್ನ ಆಗಮಿಸಿದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಅವರ ವಿರುದ್ಧ ಘೋಷಣೆ ಕೂಗಿದರು . ಇದಕ್ಕೆ ಪ್ರತಿಯಾಗಿ ಮುನಿರತ್ನ ಕಾಂಗ್ರೆಸ್ ಕಾರ್ಯಕರ್ತರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದರು ಎಂಬ ಆರೋಪ ಕೇಳಿಬಂದಿದೆ.ಈ ವೇಳೆ ಬಿಜೆಪಿ ಶಾಸಕ ಮುನಿರತ್ನ ಮೇಲೆ ಹಲ್ಲೆಗೆ ಯತ್ನಿಸಲಾಗಿದೆ ಎಂದು ಆರೋಪಿಸಲಾಗಿದೆ.
ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ದಾಸರಹಳ್ಳಿಯ ಪಾಲಿಕೆ ಕಚೇರಿ ಬಳಿ ಎನ್ಡಿಎ ಮತ್ತು ಕಾಂಗ್ರೆಸ್ ಮುಖಂಡರ ನಡುವೆ ಮಾತಿನ ಚಕಮಕಿ ನಡೆದು, ತಳ್ಳಾಟ-ನೂಕಾಟ ನಡೆದ ಘಟನೆ ನಡೆದಿದೆ.
ಚುನಾವಣಾ ಪ್ರಚಾರ ಮತ್ತು ಮತದಾರರ ಪರಿಶೀಲನೆ ವಿಚಾರಕ್ಕೆ ಸಂಬಂಧಿಸಿದಂತೆ ಉಭಯ ಪಕ್ಷಗಳ ಕಾರ್ಯಕರ್ತರು ಪಾಲಿಕೆ ಕಚೇರಿ ಬಳಿ ಜಮಾಯಿಸಿದ್ದರು. ಈ ವೇಳೆ ಆರಂಭದಲ್ಲಿ ಮಾತಿಗೆ ಮಾತು ಬೆಳೆದು, ನಂತರ ಮಾತಿನ ಚಕಮಕಿ ವಿಕೋಪಕ್ಕೆ ಹೋಗಿದೆ. ಪರಸ್ಪರ ಆರೋಪ-ಪ್ರತ್ಯಾರೋಪ ಮಾಡುತ್ತಿದ್ದ ಮುಖಂಡರ ನಡುವೆ ತಳ್ಳಾಟ-ನೂಕಾಟ ನಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಮಧ್ಯಪ್ರವೇಶಿಸಿ, ಉಭಯ ಗುಂಪುಗಳನ್ನು ಚದುರಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.
ಈ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ. ಮುನ್ನೆಚ್ಚರಿಕೆ ಕ್ರಮವಾಗಿ ಪಾಲಿಕೆ ಕಚೇರಿ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಚುನಾವಣೆ ಹಿನ್ನೆಲೆಯಲ್ಲಿ ಕಾರ್ಯಕರ್ತರು ಶಾಂತಿಯುತವಾಗಿ ವರ್ತಿಸಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.
ಬಿಜೆಪಿ ಕಾರ್ಯಕರ್ತರು- ಅಧಿಕಾರಿಗಳ ನಡುವೆ ವಾಕ್ಸಮರ:
ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಆನೇಕಲ್ನಲ್ಲಿ ಬ್ಯಾನರ್ ತೆರವು ವಿಚಾರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಜೆಡಿಎಸ್-ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಎ.ಪಿ. ರಂಗನಾಥ್ ಚುನಾವಣಾ ಬ್ಯಾನರ್ ತೆರವುಗೊಳಿಸಿದ್ದಕ್ಕೆ ಬಿಜೆಪಿ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದು, ಪುರಸಭೆ ಅಧಿಕಾರಿಗಳೊಂದಿಗೆ ಮಾತಿನ ಚಕಮಕಿ ನಡೆಸಿದರು.
ಚುನಾವಣಾ ಪ್ರಚಾರದ ಬ್ಯಾನರ್ ತೆರವುಗೊಳಿಸಿದ ಪುರಸಭೆ ಅಧಿಕಾರಿಗಳ ಕ್ರಮಕ್ಕೆ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದರು.ಈ ವಿಚಾರವಾಗಿ ಸ್ಥಳದಲ್ಲಿ ಕೆಲಕಾಲ ವಾಗ್ವಾದ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಳ್ಳುವ ಸಾಧ್ಯತೆ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ಧಾವಿಸಿದರು. ಬಳಿಕ ಪೊಲೀಸರು ಎರಡೂ ಕಡೆಯವರನ್ನು ಸಮಾಧಾನಪಡಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಲು ಪ್ರಯತ್ನಿಸಿದರು.ಪೊಲೀಸರು ಪರಿಸ್ಥಿತಿಯನ್ನು ಶಾಂತಗೊಳಿಸಲು ಪ್ರಯತ್ನಿಸುತ್ತಿದ್ದ ಸಂದರ್ಭದಲ್ಲಿಯೇ ಮಾತಿನ ಚಕಮಕಿ ಮುಂದುವರಿದಿದ್ದು, ಬ್ಯಾನರ್ ತೆರವು ಪ್ರಕರಣ ಆನೇಕಲ್ನಲ್ಲಿ ರಾಜಕೀಯ ಚರ್ಚೆಗೆ ಕಾರಣವಾಗಿದೆ.
ಗದಗದಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ :
ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ರಾಜಕೀಯ ಪಕ್ಷಗಳ ನಡುವೆ ವಾಗ್ವಾದ ನಡೆದಿರುವ ಘಟನೆ ಗದಗದ ಮುನ್ಸಿಪಲ್ ಕಾಲೇಜಿನಲ್ಲಿರುವ ಮತಗಟ್ಟೆ ಕೇಂದ್ರದಲ್ಲಿ ನಡೆದಿದೆ.
ಬಿಜೆಪಿ ಕಾರ್ಯಕರ್ತರು ತಮ್ಮ ಪಕ್ಷದ ಶಾಲುಗಳನ್ನು ಧರಿಸಿ ಮತಗಟ್ಟೆಗೆ ಪ್ರವೇಶಿಸಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದ್ದಾರೆ. ಮತದಾನ ಕೇಂದ್ರಗಳ ಒಳಗೆ ಯಾವುದೇ ರಾಜಕೀಯ ಪಕ್ಷಗಳ ಚಿಹ್ನೆ ಅಥವಾ ಪ್ರಚಾರ ಸಾಮಗ್ರಿಗಳನ್ನು ಧರಿಸುವುದನ್ನು ಚುನಾವಣಾ ಆಯೋಗವು ನಿಷೇಧಿಸಿದೆ. ಆದರೆ, ಬಿಜೆಪಿ ಕಾರ್ಯಕರ್ತರು ಈ ನಿಯಮವನ್ನು ಉಲ್ಲಂಘಿಸಿ ಪಕ್ಷದ ಶಾಲುಗಳನ್ನು ಹಾಕಿಕೊಂಡು ಬಂದಿದ್ದಾರೆಂದು ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದೆ.
ಈ ವಿಚಾರವಾಗಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮತಗಟ್ಟೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರ ನಡುವೆ ತೀವ್ರ ವಾಗ್ವಾದ ನಡೆದಿದೆ. ಘಟನೆಯ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಪಕ್ಷದ ಪರ ಘೋಷಣೆಗಳನ್ನು ಕೂಗಿದ್ದಾರೆ ಎನ್ನಲಾಗಿದ್ದು, ಇದು ಪರಿಸ್ಥಿತಿಯನ್ನು ಮತ್ತಷ್ಟು ಉದ್ವಿಗ್ನಗೊಳಿಸಿದೆ. ಚುನಾವಣಾ ಸಂದರ್ಭದಲ್ಲಿ ಇಂತಹ ಪ್ರಚಾರ ಚಟುವಟಿಕೆಗಳು ಮತದಾರರ ಮೇಲೆ ಪ್ರಭಾವ ಬೀರಬಹುದು ಎಂಬ ಆತಂಕವನ್ನು ಕಾಂಗ್ರೆಸ್ ವ್ಯಕ್ತಪಡಿಸಿದೆ. ಚುನಾವಣಾ ನಿಯಮಗಳನ್ನು ಪಾಲಿಸಬೇಕೆಂದು ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸಿದ್ದಾರೆ.
ಮತಗಟ್ಟೆ ಪರಿಶೀಲಿಸಿದ ಬಿ.ಕೆ. ಹರಿಪ್ರಸಾದ್ :
ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಬೆಂಗಳೂರಿನ ಮಲ್ಲೇಶ್ವರಂನ ೧೮ನೇ ಕ್ರಾಸ್ನಲ್ಲಿರುವ ಮತಗಟ್ಟೆಗೆ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಭೇಟಿ ನೀಡಿ ಚುನಾವಣಾ ಸಿದ್ಧತೆಗಳನ್ನು ಪರಿಶೀಲಿಸಿದರು.
ಮತಗಟ್ಟೆಯಲ್ಲಿ ಮತದಾರರಿಗೆ ಕಲ್ಪಿಸಲಾಗಿರುವ ಮೂಲಸೌಕರ್ಯಗಳು, ಮತದಾನಕ್ಕೆ ಸಂಬಂಧಿಸಿದ ವ್ಯವಸ್ಥೆಗಳು ಹಾಗೂ ಇತರ ಸಿದ್ಧತೆಗಳ ಕುರಿತು ಅವರು ಮಾಹಿತಿ ಪಡೆದರು. ಸ್ಥಳದಲ್ಲಿದ್ದ ಮುಖಂಡರೊಂದಿಗೆ ಚುನಾವಣಾ ವ್ಯವಸ್ಥೆಗಳ ಬಗ್ಗೆ ಸಮಾಲೋಚನೆ ನಡೆಸಿದರು.
ಚುನಾವಣೆ ಸುಗಮವಾಗಿ ನಡೆಯಲು ಕೈಗೊಂಡಿರುವ ಸಿದ್ಧತೆಗಳು ಹಾಗೂ ಮತದಾರರಿಗೆ ಒದಗಿಸಿರುವ ಸೌಲಭ್ಯಗಳ ಕುರಿತು ಅವರು ಪರಿಶೀಲನೆ ನಡೆಸಿದರು.

























