Home ಮುಖಪುಟ ಸುದ್ದಿ ಮೈಸೂರು ದಸರಾ ಉದ್ಘಾಟನೆಗೆ ಕ್ಷಣಗಣನೆ – ಚಾಮುಂಡಿ ಬೆಟ್ಟದಲ್ಲಿ ಅಂತಿಮ ಹಂತದ ಸಿದ್ಧತೆ, 2 ಸಾವಿರ...

ಮೈಸೂರು ದಸರಾ ಉದ್ಘಾಟನೆಗೆ ಕ್ಷಣಗಣನೆ – ಚಾಮುಂಡಿ ಬೆಟ್ಟದಲ್ಲಿ ಅಂತಿಮ ಹಂತದ ಸಿದ್ಧತೆ, 2 ಸಾವಿರ ಆಸನ ವ್ಯವಸ್ಥೆ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026 ರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ಚಾಮುಂಡಿ ಬೆಟ್ಟದಲ್ಲಿ ಅಂತಿಮ ಹಂತದ ಸಿದ್ಧತೆಗಳು ಭರದಿಂದ ಸಾಗಿವೆ.

ನಾಳೆ ನಡೆಯಲಿರುವ ಉದ್ಘಾಟನಾ ಕಾರ್ಯಕ್ರಮಕ್ಕೆ ವೇದಿಕೆ ಮುಂಭಾಗದಲ್ಲಿ 2 ಸಾವಿರಕ್ಕೂ ಹೆಚ್ಚು ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ಈ ಬಾರಿ ಎಲ್ಲಾ ಧರ್ಮದ ಪ್ರಮುಖ ಮಠಾಧೀಶರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಶ್ರೀಗಳಿಗೆ ಪ್ರತ್ಯೇಕ ವಿಶೇಷ ಆಸನದ ವ್ಯವಸ್ಥೆಯನ್ನು ಜಿಲ್ಲಾಡಳಿತ ಮಾಡಿದೆ.

ಇಂದು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ ಅವರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಅಂತಿಮ ಹಂತದ ಸಿದ್ಧತೆಗಳನ್ನು ಪರಿಶೀಲಿಸಿದರು.

ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ ಅವರು, ನಾಳೆ ಮುಖ್ಯಮಂತ್ರಿ ಸೇರಿದಂತೆ ಅನೇಕ ಗಣ್ಯರು ದಸರಾ ಉದ್ಘಾಟನೆಗೆ ಆಗಮಿಸಲಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ಅಂತಿಮ ಹಂತದ ಸಿದ್ಧತೆಗಳು ನಡೆಯುತ್ತಿವೆ. ಬೆಟ್ಟದ ಮೇಲೆ ಸುಮಾರು 2 ಸಾವಿರ ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ರಾಜ್ಯದ ವಿವಿಧ ಮಠಗಳ ಸುಮಾರು 200ಕ್ಕೂ ಹೆಚ್ಚು ಮಠಾಧೀಶರು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಎಲ್ಲಾ ಮಠಾಧೀಶರಿಗೆ ವಿಶೇಷ ಆಸನದ ವ್ಯವಸ್ಥೆ ಮಾಡಲಾಗಿದೆ. ದಸರಾಗೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಜಿಲ್ಲಾಡಳಿತ ಮಾಡಿಕೊಂಡಿದೆ ಎಂದು ತಿಳಿಸಿದರು.