
ಕಲಬುರಗಿ,ಜ.31-ದಾಯಾದಿ ಕಲಹ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಸೇಡಂ ತಾಲ್ಲೂಕಿನ ಹಂಗನಳ್ಳಿ ಗ್ರಾಮದಲ್ಲಿ ನಡೆದಿದೆ.
ಬಸವರಾಜ ತಳವಾರ (33) ಕೊಲೆಯಾದವರು. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಸಹೋದರ ಸಂಬಂಧಿ ಘೂಳೇಶ ಎಂಬಾತ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಕಳೆದ ರಾತ್ರಿ 11 ರಿಂದ 12 ಗಂಟೆ ಸುಮಾರಿಗೆ ಬಸವರಾಜ ಮತ್ತು ಘೂಳೇಶ ನಡುವೆ ಆಸ್ತಿ ವೈಷಮ್ಯದ ಹಿನ್ನೆಲೆಯಲ್ಲಿ ಜಗಳ ನಡೆದಿದ್ದು, ಮಾತಿಗೆ ಮಾತು ಬೆಳೆದು ಬಸವರಾಜಗೆ, ಘೂಳೇಶ ಎರಡು ಬಾರಿ ಚಾಕುವಿನಿಂದ ಇರಿದಿದ್ದಾನೆ ಎನ್ನಾಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಬಸವರಾಜನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಈ ಸಂಬಂಧ ಮಳಖೇಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಸೇಡಂ ಸಿಪಿಐ ಮತ್ತು ಮಳಖೇಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

























