ಕಲ್ಯಾಣ ಕರ್ನಾಟಕ ಪ್ರತ್ಯೇಕ ಸಚಿವಾಲಯ ರಚಿಸಿ: ಚನ್ನಬಸವಾನಂದ ಶ್ರೀ

ಬೀದರ್:ಅ.8: ಕಲ್ಯಾಣ ಕರ್ನಾಟಕ ಪ್ರತ್ಯೇಕ ಸಚಿವಾಲಯ ರಚಿಸಿ ವಿಧಾನ ಮಂಡಲ ಅಧಿವೇಶನ ನಡೆಸಬೇಕು ಎಂಬಿತ್ಯಾದಿ ಬೇಡಿಕೆಗಳ ಈಡೇರಿಕೆಗೆ ಸಹಕರಿಸಬೇಕೆಂದು ಕಲ್ಯಾಣ ಕರ್ನಾಟಕ 371 ಜೆ ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿಯ ಗೌರವಾಧ್ಯಕ್ಷರಾದ ಪೂಜ್ಯ ಶ್ರೀ ಡಾ. ಚನ್ನಬಸವಾನಂದ ಸ್ವಾಮೀಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿಯ ವತಿಯಿಂದ ಕಲಬುರಗಿಯಲ್ಲಿ ಗುರುವಾರ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯ ಅಧ್ಯಕ್ಷ ಪೆÇ್ರ. ಗೋವಿಂದರಾವ ಅವರಿಗೆ ಮನವಿ ಪತ್ರ ಸಲ್ಲಿಸಿದ ಬಳಿಕ ಪ್ರಕಟಣೆ ಹೊರಡಿಸಿದ್ದಾರೆ.
ನೇಮಕಾತಿ ಮತ್ತು ಪದೋನ್ನತಿಯಲ್ಲಿ ಹಾಗೂ ಕ.ಕ. ಭಾಗದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು. ಕ.ಕ. ದ ಅರಣ್ಯ ಸಂಪತ್ತಿಗೆ ಮಹತ್ವ ನೀಡಿ ಏಳು ಕೋಟಿ ಸಸಿ ನೆಡುವ ಕಾರ್ಯಕ್ರಮ ಹಾಕಿಕೊಳ್ಳಬೇಕು. ಪ್ರವಾಸೋದ್ಯಮ ಮತ್ತು ಐತಿಹಾಸಿಕ ಸ್ಮಾರಕಗಳಿಗೆ ವಿಶ್ವದರ್ಜೆಗೆ ಏರಿಸಬೇಕು ಔದ್ಯೋಗಿಕರಣ ಸ್ಥಾಪಿಸಿ ಒಂದು ಲಕ್ಷ ಉದ್ಯೋಗ ಸೃಷ್ಟಿ ಮಾಡಬೇಕು ಎಂಬಿತ್ಯಾದಿ ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕೆಂದು ಮನವಿ ಪತ್ರ ಸಲ್ಲಿಸಿದ್ದಾರೆ.
ಕಲ್ಯಾಣ ಕರ್ನಾಟಕ 371 ಜೆ ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿಯ ಅಧ್ಯಕ್ಷ ಅಶೋಕ ಮಾನೂರೆ ಮಾತನಾಡಿ ಶೈಕ್ಷಣಿಕ ಗುಣಮಟ್ಟ ಹಾಗೂ ಮಕ್ಕಳ ಫಲಿತಾಂಶ ಸುಧಾರಣೆಗೆ ವಿಶೇಷ ಯೋಜನೆ, ಶೌಚಾಲಯ ಹಾಗೂ ಒಳಚರಂಡಿ ನಿರ್ಮಿಸಿ ಕ.ಕ. ಭಾಗದ ಎಲ್ಲಾ ಜಿಲ್ಲೆಗಳಲ್ಲಿ ಸ್ವಚ್ಛತೆ ಕಾಪಾಡಬೇಕು. ಕ.ಕ. ಭಾಗದ ಎಲ್ಲಾ ಜಿಲ್ಲೆಗಳಿಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡಬೇಕೆಂದು ತಿಳಿಸಿದರು.
ಇದೇ ವೇಳೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ.ಅಜಯಸಿಂಗ್ ಅವರಿಗೂ ಮನವಿ ಪತ್ರ ಸಲ್ಲಿಸಲಾಯಿತು. ಪ್ರಮುಖರಾದ ಶಿವರಾಜ ಪಾಟೀಲ ಅತಿವಾಳ, ಶಿವಶರಣಪ್ಪ ಪಾಟೀಲ ಹಾರೂರಗೇರಿ, ಮಲ್ಲಿಕಾರ್ಜುನ ಜೈಲರ್, ಬಸವಂತರಾವ ಬಿರಾದಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.