
ಯಾದಗಿರಿ: ನಗರದ ದೊಡ್ಡ ಕೆರೆಯಲ್ಲಿ ಮೊಸಳೆ ಕಾಣಿಸಿಕೊಂಡಿರುವ ಮಾಹಿತಿ ತಿಳಿಯುತ್ತಿದ್ದಂತೆಯೇ ಯಾದಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಹಿರಿಯ ಮುಖಂಡ ರಾಚನಗೌಡ ಮುದ್ನಾಳ ಅವರು ತಕ್ಷಣ ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಿ ಸ್ಥಳಕ್ಕೆ ಕರೆಸಿಕೊಂಡು ಪರಿಸ್ಥಿತಿಯ ಪರಿಶೀಲನೆ ನಡೆಸಿದರು.
ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಕೆರೆಯ ಪ್ರದೇಶಕ್ಕೆ ಭೇಟಿ ನೀಡಿದ ಅವರು, ಸಾರ್ವಜನಿಕರ ಸುರಕ್ಷತೆಗೆ ಯಾವುದೇ ರೀತಿಯ ಧಕ್ಕೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು. ಕೆರೆಯಲ್ಲಿ ಕಾಣಿಸಿಕೊಂಡಿರುವ ಮೊಸಳೆಯನ್ನು ಸುರಕ್ಷಿತವಾಗಿ ಸೆರೆಹಿಡಿದು ಅದರ ಸ್ವಾಭಾವಿಕ ಆವಾಸಕ್ಕೆ ಸ್ಥಳಾಂತರಿಸಲು ತ್ವರಿತ ಕಾರ್ಯಾಚರಣೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಇದೇ ವೇಳೆ ಕೆರೆಯ ಸುತ್ತಮುತ್ತ ಎಚ್ಚರಿಕೆ ಫಲಕಗಳನ್ನು ಅಳವಡಿಸುವುದು, ಅಗತ್ಯವಿದ್ದರೆ ಸಿಬ್ಬಂದಿಯನ್ನು ನಿಯೋಜಿಸಿ ಸ್ಥಳದ ಮೇಲೆ ನಿರಂತರ ನಿಗಾ ವಹಿಸುವುದು ಹಾಗೂ ಸಾರ್ವಜನಿಕರು ಅಪಾಯದ ಪ್ರದೇಶಕ್ಕೆ ತೆರಳದಂತೆ ಜಾಗೃತಿ ಮೂಡಿಸುವ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ರಾಚನಗೌಡ ಮುದ್ನಾಳ, “ಸಾರ್ವಜನಿಕರ ಜೀವ ಹಾಗೂ ಸುರಕ್ಷತೆ ಸರ್ಕಾರ ಮತ್ತು ಸಂಬಂಧಿತ ಇಲಾಖೆಗಳ ಮೊದಲ ಆದ್ಯತೆಯಾಗಬೇಕು. ಮೊಸಳೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಜನರು ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಅರಣ್ಯ ಇಲಾಖೆ ಪರಿಸ್ಥಿತಿಯನ್ನು ನಿಕಟವಾಗಿ ಗಮನಿಸುತ್ತಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಸಾರ್ವಜನಿಕರು ಕೆರೆಯ ಸುತ್ತಮುತ್ತ ಅನಗತ್ಯವಾಗಿ ಓಡಾಡುವುದನ್ನು ತಪ್ಪಿಸಿ, ಮಕ್ಕಳನ್ನು ನೀರಿನ ಪ್ರದೇಶದ ಬಳಿ ಕಳುಹಿಸದಂತೆ ಎಚ್ಚರ ವಹಿಸಬೇಕು. ಅಧಿಕಾರಿಗಳ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಎಲ್ಲರೂ ಸಹಕರಿಸಬೇಕು” ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಬಂದಪ್ಪ ಅರಳಿ, ಶರಣಗೌಡ ಮಾಲಿ ಪಾಟೀಲ್, ಮಾಹಂತೇಶ ಕುಮನೂರ, ವಿಶ್ವನಾಥ ಕಾಜಗಾರ ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.































