Home ಜಿಲ್ಲೆ ಬೆಂಗಳೂರು ಸಿಎಸ್‌ಆರ್ ಅನುದಾನದಿಂದ ಸರ್ಕಾರಿ ಶಾಲೆಗೆ ಹೊಸ ರೂಪ

ಸಿಎಸ್‌ಆರ್ ಅನುದಾನದಿಂದ ಸರ್ಕಾರಿ ಶಾಲೆಗೆ ಹೊಸ ರೂಪ

ಹೊಸಕೋಟೆ.ಸೆ.೧೦- ಸರ್ಕಾರಿ ಶಾಲೆಗಳ ಬಲವರ್ಧನೆ ಹಾಗೂ ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ಅನುದಾನವು ಮಹತ್ವದ ಪಾತ್ರ ವಹಿಸುತ್ತಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.


ತಾಲೂಕಿನ ಕಸಬಾ ಹೋಬಳಿಯ ಚೊಕ್ಕಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕನಲ್ಲೂರಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಮೆಸರ್ಸ್ ದಕ್ಷಿಣ್ ಫೌಂಡ್ರಿ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಅSಖ ಅನುದಾನದ ಸುಮಾರು ೨೪ ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಎರಡು ನೂತನ ತರಗತಿ ಕೊಠಡಿಗಳನ್ನು ಶಾಸಕ ಶರತ್ ಬಚ್ಚೇಗೌಡ ಉದ್ಘಾಟಿಸಿ ಮಾತನಾಡಿದರು


ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಪಡಿಸುವ ಮೂಲಕ ವಿದ್ಯಾರ್ಥಿಗಳಿಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವುದು ಅಗತ್ಯವಾಗಿದೆ. ಸರ್ಕಾರದ ಅನುದಾನದ ಜೊತೆಗೆ ಕೈಗಾರಿಕಾ ಸಂಸ್ಥೆಗಳು ತಮ್ಮ ಸಿಎಸ್‌ಆರ್ ನಿಧಿಯ ಮೂಲಕ ಶಿಕ್ಷಣ ಕ್ಷೇತ್ರಕ್ಕೆ ನೀಡುತ್ತಿರುವ ಕೊಡುಗೆಗಳು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಮತ್ತಷ್ಟು ಬಲ ನೀಡುತ್ತಿವೆ. ಹೊಸ ತರಗತಿ ಕೊಠಡಿಗಳ ನಿರ್ಮಾಣದಿಂದ ಚಿಕ್ಕನಲ್ಲೂರಹಳ್ಳಿ ಗ್ರಾಮದ ವಿದ್ಯಾರ್ಥಿಗಳಿಗೆ ಉತ್ತಮ ಹಾಗೂ ಸುರಕ್ಷಿತ ಕಲಿಕಾ ವಾತಾವರಣ ದೊರೆಯಲಿದೆ. ಗ್ರಾಮೀಣ ಭಾಗದ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಇದು ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು.


ಗ್ರಾಮೀಣ ಭಾಗದ ಮಕ್ಕಳ ಶಿಕ್ಷಣಕ್ಕೆ ಆಸರೆಯಾಗುವ ನಿಟ್ಟಿನಲ್ಲಿ ಸಮಾಜಮುಖಿ ಕಾರ್ಯ ಕೈಗೊಂಡಿರುವ ದಕ್ಷಿಣ್ ಫೌಂಡ್ರಿ ಸಂಸ್ಥೆಯ ಆಡಳಿತ ಮಂಡಳಿಗೆ ಅಭಿನಂದನೆ ಸಲ್ಲಿಸಿದ ಶಾಸಕರು, ಮುಂದಿನ ದಿನಗಳಲ್ಲಿಯೂ ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಕೈಗಾರಿಕಾ ಸಂಸ್ಥೆಗಳು ಕೈಜೋಡಿಸಬೇಕು ಎಂದು ಮನವಿ ಮಾಡಿದರು


ಈ ಸಂದರ್ಭದಲ್ಲಿ ಸ್ಥಳೀಯ ಬಮೂಲ್ ನಿರ್ದೇಶಕ ಎಲ್ ಅಂಡ್ ಟಿ ಮಂಜುನಾಥ್, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ತಮ್ಮಯ್ಯ ಗೌಡ, ಮುಖಂಡರಾದ ರಾಜಗೋಪಾಲ್,ಜೆಸಿಬಿ ಲಕ್ಷ್ಮಣ್,ವೆಂಕಟರಾಜು ಹಾಗೂ ಶಾಲಾ ಶಿಕ್ಷಕರು ಹಾಜರಿದ್ದರು