
ಕಲಬುರಗಿ : ಡಿ.ದೇವರಾಜ ಅರಸು ಅವರು ಕರ್ನಾಟಕದ ಮಾಜಿ ಮುಖ್ಯಮಂತ್ರಿ. ಅವರು ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಬಹಳಷ್ಟು ಕೆಲಸ ಮಾಡಿದ್ದಾರೆ. ಅವರ ಕಾರ್ಯಗಳು ಇಂದಿಗೂ ಪ್ರಸ್ತುತವಾಗಿವೆ. ಸಾಮಾಜಿಕ ನ್ಯಾಯದ ಹರಿಕಾರರಾಗಿದ್ದಾರೆ ಎಂದು ಉಪನ್ಯಾಸಕ ಎಚ್.ಬಿ.ಪಾಟೀಲ್ ಹೇಳಿದರು. ನಗರದ ಆಳಂದ ರಸ್ತೆಯ ಶಿವ ನಗರದಲ್ಲಿನ ‘ಜ್ಞಾನ ಚಿಗುರು ಟ್ಯುಟೋರಿಯಲ್ಸ್’ನಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ಐತಿಹಾಸಿಕ 7400ನೇ ಕಾರ್ಯಕ್ರಮ ಗುರುವಾರ ಜರುಗಿದ ‘ಡಿ.ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆಯ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.
ಅರಸು ಅವರು ಭೂಸುಧಾರಣೆ, ಹಿಂದುಳಿದ ವರ್ಗಗಳ ಕಲ್ಯಾಣ, ಮತ್ತು ಸಾಮಾಜಿಕ ನ್ಯಾಯಕ್ಕೆ ಸಂಬಂಧಿಸಿದ ಅನೇಕ ಮಹತ್ವದ ಯೋಜನೆಗಳನ್ನು ಜಾರಿಗೊಳಿಸಿದರು. ಅವರ ಅವಧಿಯಲ್ಲಿ ಜಾರಿಗೆ ತಂದ ಗೇಣಿದಾರಿಕೆ ಕಾಯಿದೆ ಮತ್ತು ಹಾವನೂರು ಆಯೋಗದಂತಹ ಕ್ರಮಗಳು ರೈತರು ಮತ್ತು ಹಿಂದುಳಿದ ವರ್ಗದವರ ಜೀವನದಲ್ಲಿ ಮಹತ್ವದ ಬದಲಾವಣೆಗಳನ್ನು ತಂದವು. ಭೂಸುಧಾರಣೆ,ಉಳುವವನಿಗೆ ಭೂಮಿ ಎಂಬ ಕ್ರಾಂತಿಕಾರಿ ಆಲೋಚನೆಯನ್ನು ಜಾರಿಗೊಳಿಸಿದರು. ಇದರಿಂದಾಗಿ ಭೂಹೀನರಿಗೆ ಭೂಮಿ ಸಿಕ್ಕಿತು ಮತ್ತು ರೈತರ ಜೀವನ ಮಟ್ಟ ಸುಧಾರಿಸಿತು.ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿದರು. ಹಾವನೂರು ಆಯೋಗದ ರಚನೆ ಅವರ ಪ್ರಮುಖ ಕಾರ್ಯಗಳಲ್ಲಿ ಒಂದಾಗಿದೆ. ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದರು ಮತ್ತು ಎಲ್ಲಾ ವರ್ಗದವರಿಗೂ ಸಮಾನ ಅವಕಾಶಗಳನ್ನು ಒದಗಿಸಲು ಶ್ರಮಿಸಿದರು. ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣ ಮಾಡಿದರು. ಅವರನ್ನು ಕರ್ನಾಟಕದ ಇತಿಹಾಸದಲ್ಲಿ ಒಬ್ಬ ಮಹಾನ್ ನಾಯಕ ಎಂದು ಪರಿಗಣಿಸಲಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ಶಿವಯೋಗೆಪ್ಪಾ ಎಸ್. ಬಿರಾದಾರ, ಡಾ.ರಾಜಶೇಖರ ಪಾಟೀಲ್, ಮುಖ್ಯ ಶಿಕ್ಷಕಿ ಚಂಪಾ ನೆಲ್ಲುರೆ, ಶಿಕ್ಷಕಿಯರು, ವಿದ್ಯಾರ್ಥಿಗಳು ಇದ್ದರು.































