
ಯಾದಗಿರಿ: ನಗರದ ಸ್ವಚ್ಛತೆ, ರಸ್ತೆ ಹಾಗೂ ಮೂಲಸೌಕರ್ಯಗಳ ಸ್ಥಿತಿಗತಿಗಳನ್ನು ಪರಿಶೀಲಿಸಲು ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ ಅವರು ಬುಧವಾರ ಬೆಳಂಬೆಳಗ್ಗೆ ನಗರದ ವಿವಿಧೆಡೆ ಮಿಂಚಿನ ಸಂಚಾರ ನಡೆಸಿದರು.
ನಗರದ ಡಿಗ್ರಿ ಕಾಲೇಜಿನಿಂದ ಕನಕ ವೃತ್ತದವರೆಗೆ ತೆರಳಿದ ಜಿಲ್ಲಾಧಿಕಾರಿಗಳು ರಸ್ತೆ, ಪಾದಚಾರಿ ಮಾರ್ಗ, ಮಾರುಕಟ್ಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳನ್ನು ಪರಿಶೀಲಿಸಿದರು. ಸಾರ್ವಜನಿಕರ ಸಂಚಾರಕ್ಕೆ ಎದುರಾಗುತ್ತಿರುವ ಸಮಸ್ಯೆಗಳು ಹಾಗೂ ಮೂಲಸೌಕರ್ಯಗಳ ಸ್ಥಿತಿಗತಿಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಒಳರಸ್ತೆಗಳ ಪರಿಶೀಲನೆ ನಡೆಸಿದ ಅವರು, ರಸ್ತೆಯ ಅಗಲ, ಸಂಚಾರಕ್ಕೆ ಅಡ್ಡಿಯಾಗುತ್ತಿರುವ ಅಂಶಗಳು ಹಾಗೂ ಸಾರ್ವಜನಿಕರಿಗೆ ಉಂಟಾಗುತ್ತಿರುವ ತೊಂದರೆಗಳ ಕುರಿತು ನಗರಸಭೆ ಪೌರಾಯುಕ್ತ ಉಮೇಶ ಚವ್ಹಾಣ ಅವರಿಂದ ಮಾಹಿತಿ ಪಡೆದರು. ಸಮಸ್ಯೆಗಳಿಗೆ ತಕ್ಷಣವೇ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಪಾದಚಾರಿ ಮಾರ್ಗದ ಕಾಮಗಾರಿಯನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಪಾದಚಾರಿ ಮಾರ್ಗ ಹಾಗೂ ರಸ್ತೆ ಬದಿಯಲ್ಲಿರುವ ಎಲ್ಲ ರೀತಿಯ ಒತ್ತುವರಿಗಳನ್ನು ತೆರವುಗೊಳಿಸಿ, ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ನಿರ್ದೇಶನ ನೀಡಿದರು. ರಸ್ತೆಯಲ್ಲಿ ಸಂಗ್ರಹಿಸಿರುವ ನಿರ್ಮಾಣ ಸಾಮಗ್ರಿಗಳನ್ನು ಕೂಡಲೇ ತೆರವುಗೊಳಿಸುವಂತೆ ಸೂಚಿಸಿದರು.
ರಸ್ತೆಯು ಯಾವುದೇ ಅಡೆತಡೆಗಳಿಲ್ಲದೆ ತನ್ನ ಪೂರ್ಣ ಅಗಲದಲ್ಲಿ ಸಾರ್ವಜನಿಕರ ಬಳಕೆಗೆ ಮುಕ್ತವಾಗಿರಬೇಕು. ರಸ್ತೆ ಬದಿಗಳಲ್ಲಿ ಸಂಗ್ರಹವಾಗಿರುವ ಕಸವನ್ನು ತಕ್ಷಣ ತೆರವುಗೊಳಿಸುವುದರ ಜತೆಗೆ, ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ನಿಯಮಾನುಸಾರ ದಂಡ ವಿಧಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ತರಕಾರಿ ಮಾರುಕಟ್ಟೆಯನ್ನು ಸ್ವಚ್ಛವಾಗಿ ಹಾಗೂ ವ್ಯವಸ್ಥಿತವಾಗಿ ನಿರ್ವಹಿಸಬೇಕು. ಚರಂಡಿಗಳಿಗೆ ಸ್ಲ್ಯಾಬ್ಗಳಿಲ್ಲದ ಸ್ಥಳಗಳನ್ನು ಗುರುತಿಸಿ, ಅಗತ್ಯ ಸ್ಲ್ಯಾಬ್ಗಳನ್ನು ಕೂಡಲೇ ಅಳವಡಿಸುವಂತೆ ತಿಳಿಸಿದರು. ರಸ್ತೆ ಮತ್ತು ಪಾದಚಾರಿ ಮಾರ್ಗಗಳು ಸಾರ್ವಜನಿಕರ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗುವಂತೆ ನಿರಂತರವಾಗಿ ನಿರ್ವಹಿಸಬೇಕು ಎಂದು ಹೇಳಿದರು.
ರಸ್ತೆಗಳನ್ನು ನಿಯಮಿತವಾಗಿ ಗುಡಿಸುವುದರ ಜತೆಗೆ ಸ್ಕ್ರಬ್ಬಿಂಗ್ ಮೂಲಕ ರಸ್ತೆಯ ಮೇಲಿರುವ ಕೊಳಕು, ಮಣ್ಣು ಸೇರಿದಂತೆ ಎಲ್ಲ ರೀತಿಯ ತ್ಯಾಜ್ಯವನ್ನು ಸಂಪೂರ್ಣವಾಗಿ ತೆರವುಗೊಳಿಸಬೇಕು. ರಸ್ತೆಯ ಬಿಟುಮಿನ್ ಪದರ ಸ್ಪಷ್ಟವಾಗಿ ಗೋಚರಿಸುವಂತೆ ಸ್ವಚ್ಛತೆ ಕಾಪಾಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಈ ವೇಳೆ ಜಿಲ್ಲಾಧಿಕಾರಿಗಳು ಸಾರ್ವಜನಿಕರೊಂದಿಗೆ ಸಂವಾದ ನಡೆಸಿ, ಸ್ಥಳೀಯ ಸಮಸ್ಯೆಗಳು ಹಾಗೂ ಅಹವಾಲುಗಳನ್ನು ಆಲಿಸಿದರು. ಸಾರ್ವಜನಿಕರು ತಿಳಿಸಿದ ಸಮಸ್ಯೆಗಳನ್ನು ದಾಖಲಿಸಿಕೊಂಡು, ಸಂಬAಧಪಟ್ಟ ಅಧಿಕಾರಿಗಳು ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ನಗರಸಭೆ ಪೌರಾಯುಕ್ತ ಉಮೇಶ ಚವ್ಹಾಣ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಜವಾಹರ್ ಕಾಲೇಜಿನ ಪಕ್ಕದಲ್ಲಿರುವ ಮಹಾತ್ಮ ಗಾಂಧಿ ಉದ್ಯಾನವನಕ್ಕೂ ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಉದ್ಯಾನವನವನ್ನು ಸಮರ್ಪಕವಾಗಿ ನಿರ್ವಹಿಸುವುದರ ಜತೆಗೆ, ಸಾರ್ವಜನಿಕರ ಬಳಕೆಗೆ ಸಂಪೂರ್ಣವಾಗಿ ಅನುಕೂಲವಾಗುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.































