Home ಜಿಲ್ಲೆ ಬೆಂಗಳೂರು ಕುಡಿಯುವ ನೀರಿನ ಸಮಸ್ಯೆ ನಿರ್ವಹಣೆ ನಿರ್ಲಕ್ಷ್ಯಕ್ಕೆ ಡಿಸಿ ಅಸಮಾಧಾನ

ಕುಡಿಯುವ ನೀರಿನ ಸಮಸ್ಯೆ ನಿರ್ವಹಣೆ ನಿರ್ಲಕ್ಷ್ಯಕ್ಕೆ ಡಿಸಿ ಅಸಮಾಧಾನ

ಕೋಲಾರ,ಮಾ, ೨೭-ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿರುವ ಸಂದರ್ಭದಲ್ಲಿ ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸದ ಮತ್ತು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ನಗರದ ಜಿಲ್ಲಾ ಆಡಳಿತಾಧಿಕಾರಿಗಳ ಕಚೇರಿಯ ಕೇಸ್ವಾನ್ ಸಭಾಂಗಣದಲ್ಲಿ ನಡೆದ ಟಾಸ್ಕ್ ಫೋರ್ಸ್ ಮತ್ತು ವಿಪತ್ತು ನಿರ್ವಹಣಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


ಸಭೆಯಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಕಾರ್ಯವೈಖರಿಯನ್ನು ಪರಾಮರ್ಶಿಸಿದ ಜಿಲ್ಲಾಧಿಕಾರಿಗಳು, ಕುಡಿಯುವ ನೀರಿನ ಪೂರೈಕೆ ಮತ್ತು ಮೂಲಸೌಕರ್ಯಗಳ ನಿರ್ವಹಣೆಯಲ್ಲಿನ ವಿಳಂಬವನ್ನು ಕಂಡು ಆಕ್ರೋಶ ವ್ಯಕ್ತಪಡಿಸಿದರು. “ಮನೆಗೆ ಬೆಂಕಿ ಬಿದ್ದಾಗ ಅನುದಾನ ಇಲ’ ಎಂದು ಕೈಕಟ್ಟಿ ಕುಳಿತುಕೊಳ್ಳಲು ಸಾಧ್ಯವಿಲ್ಲ. ವಿಪತ್ತು ನಿರ್ವಹಣಾ ಕಾಯ್ದೆಯಡಿ (ಆಆಒಂ) ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು. ವಿಶೇಷವಾಗಿ ಕೋಲಾರ ಮತ್ತು ಮಾಲೂರು ತಹಶೀಲ್ದಾರ್‌ಗಳು ಒಂದು ಸಭೆಯನ್ನೂ ನಡೆಸದಿರುವುದಕ್ಕೆ ಅತೃಪ್ತಿ ವ್ಯಕ್ತಪಡಿಸಿದ ಅವರು, ಕೂಡಲೇ ಶೋಕಾಸ್ ನೋಟಿಸ್ ಜಾರಿ ಮಾಡುವಂತೆ ಸೂಚಿಸಿದರು.


ಜಿಲ್ಲೆಯಾದ್ಯಂತ ಸ್ಥಗಿತಗೊಂಡಿರುವ ಶುದ್ಧ ಕುಡಿಯುವ ನೀರಿನ ಘಟಕಗಳ ಬಗ್ಗೆ ಚರ್ಚಿಸಿದ ಜಿಲ್ಲಾಧಿಕಾರಿಗಳು ಶ್ರೀನಿವಾಸಪುರದಲ್ಲಿ ಒಟ್ಟು ೧೪೪ ಘಟಕಗಳ ಪೈಕಿ ಕೇವಲ ೧೯ ಮಾತ್ರ ಕಾರ್ಯನಿರ್ವಹಿಸುತ್ತಿದ್ದು, ಉಳಿದ ೧೨೫ ಘಟಕಗಳ ದುರಸ್ತಿಗೆ ತುರ್ತು ಕ್ರಮ ಕೈಗೊಳ್ಳುವಂತೆ ಆದೇಶಿಸಿದರು. ಬಂಗಾರಪೇಟೆಯಲ್ಲಿ ಈ ಭಾಗದಲ್ಲಿ ೨೧ ಲಕ್ಷ ರೂ. ವೆಚ್ಚದಲ್ಲಿ ದುರಸ್ತಿ ಕಾರ್ಯಗಳು ನಡೆಯುತ್ತಿದ್ದು, ಬಾಕಿ ಇರುವ ಘಟಕಗಳನ್ನು ಕೂಡಲೇ ಸರಿಪಡಿಸಲು ಸೂಚನೆ ನೀಡಿದರು.


ನೀರು ಕಲುಷಿತಗೊಂಡಿರುವ ಗ್ರಾಮಗಳಲ್ಲಿ ಸಾರ್ವಜನಿಕರಿಗೆ ಎಚ್ಚರಿಕೆ ಫಲಕಗಳನ್ನು ಅಳವಡಿಸಲು ಮತ್ತು ಪರ್ಯಾಯವಾಗಿ ಖಾಸಗಿ ಬೋರ್‌ವೆಲ್‌ಗಳನ್ನು ಗುರುತಿಸಲು ಸೂಚಿಸಿದರು.
ಬೇಸಿಗೆಯ ತೀವ್ರತೆ ಹೆಚ್ಚುತ್ತಿರು ವುದರಿಂದ ಖಾಸಗಿ ಟ್ಯಾಂಕರ್‌ಗಳ ಮೂಲಕ ನೀರು ಪೂರೈಸುವ ಅನಿವಾರ್ಯತೆ ಎದುರಾಗಬಹುದು. ಈ ನಿಟ್ಟಿನಲ್ಲಿ ಟ್ಯಾಂಕರ್ ಮಾಲೀಕರು ಸಾರ್ವಜನಿಕರನ್ನು ಸುಲಿಗೆ ಮಾಡದಂತೆ ತಡೆಯಲು, ಜಿಲ್ಲೆಯಾದ್ಯಂತ ಏಕರೂಪದ ದರ ನಿಗದಿಪಡಿಸುವಂತೆ ತಹಶೀಲ್ದಾರ್‌ಗಳಿಗೆ ಸೂಚಿಸಿದರು. ಪ್ರತಿ ೫,೦೦೦ ಲೀಟರ್ ನೀರಿಗೆ ವೈಜ್ಞಾನಿಕವಾಗಿ ದರ ನಿಗದಿಪಡಿಸಿ ವರದಿ ನೀಡುವಂತೆ ತಿಳಿಸಿದರು.


“ಕೇವಲ ಕಚೇರಿಯಲ್ಲಿ ಕುಳಿತು ವರದಿಗಳನ್ನು ಸಿದ್ಧಪಡಿಸಬೇಡಿ. ಗ್ರಾಮಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಿ,” ಎಂದು ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು (PDO) ಗಳಿಗೆ ತಾಕೀತು ಮಾಡಿದರು. ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿದ ಭಾವಚಿತ್ರಗಳನ್ನು ಮತ್ತು ಕೈಗೊಂಡ ಕ್ರಮಗಳ ವಿವರಗಳನ್ನು ವಾಟ್ಸಾಪ್ ಗ್ರೂಪ್‌ಗಳಲ್ಲಿ ಹಂಚಿಕೊಳ್ಳಬೇಕು. ಇಲ್ಲದಿದ್ದರೆ ಅಂತವರ ವಿರುದ್ಧ ಶಿಸ್ತು ಕ್ರಮ ಅನಿವಾರ್ಯ ಎಂದು ಎಚ್ಚರಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕನ್ನಿಕಾ ಸಿಕ್ರಿವಾಲ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ ರಮೇಶ್, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ನಗರಸಭೆಗಳ ಆಯುಕ್ತರು ಉಪಸ್ಥಿತರಿದ್ದರು.