
ಯಾದಗಿರಿ: ಕಳೆ ಕೀಳುವ ಕಾಮಗಾರಿಗೆ ಸಂಬಂಧಿಸಿದಂತೆ ದೂರು ನೀಡಿದ ವಿಚಾರವಾಗಿ ಗ್ರಾಮದ ಪ್ರಭಾವಿ ಕುಟುಂಬದವರು ಎನ್ನಲಾದ ಕೆಲವರು ಬಡ ರೈತನ ಮನೆಗೆ ನುಗ್ಗಿ, ಕಣ್ಣಿಗೆ ಕಾರದ ಪುಡಿ ಎರಚಿ, ಕಬ್ಬಿಣದ ರಾಡ್, ಬೆತ್ತ ಹಾಗೂ ದೊಣ್ಣೆಗಳಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾದ ಘಟನೆ ಯಾದಗಿರಿ ಜಿಲ್ಲೆಯ ಗಡಿಭಾಗಕ್ಕೆ ಹೊಂದಿಕೊಂಡಿರುವ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾಂಪುರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಈ ಘಟನೆಯಲ್ಲಿ ಗ್ರಾಮದ ಬಡ ರೈತ ಸಾಬಣ್ಣ, ಮಲ್ಲಪ್ಪ, ಗಂಗೋಲಿ, ಸರಸ್ವತಿ ಸೇರಿದಂತೆ ಕುಟುಂಬದ ಸದಸ್ಯರು ಹಲ್ಲೆಗೊಳಗಾಗಿದ್ದಾರೆ ಎಂದು ತಿಳಿದುಬಂದಿದೆ. ಹಲ್ಲೆಯಿಂದ ಗಾಯಾಳುಗಳ ತಲೆ ಹಾಗೂ ದೇಹದ ಇತರ ಭಾಗಗಳಲ್ಲಿ ಗಂಭೀರ ಗಾಯಗಳಾಗಿದ್ದು, ರಕ್ತಸ್ರಾವವಾಗಿದೆ ಎನ್ನಲಾಗಿದೆ. ಗಾಯಾಳುಗಳನ್ನು ಗ್ರಾಮಸ್ಥರು ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.
ಗೃಹ ಸಚಿವರ ಕ್ಷೇತ್ರದಲ್ಲೇ ಇಂತಹ ಘಟನೆ ನಡೆದಿರುವುದು ಆತಂಕಕಾರಿ ಎಂದು ಕಳವಳ ವ್ಯಕ್ತಪಡಿಸಿದ ಸಾಮಾಜಿಕ ಹೋರಾಟಗಾರ ಹಾಗೂ ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ್ ಕೆ. ಮುದ್ನಾಳ್, ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರೆಂದು ಗುರುತಿಸಲ್ಪಟ್ಟವರ ವಿರುದ್ಧ ಕಾನೂನುಬದ್ಧವಾಗಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಗೃಹ ಸಚಿವರನ್ನು ಆಗ್ರಹಿಸಿದ್ದಾರೆ.
ಘಟನೆ ಕುರಿತು ಮಾಹಿತಿ ತಿಳಿದ ತಕ್ಷಣ ಯಾದಗಿರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಉಮೇಶ್ ಕೆ. ಮುದ್ನಾಳ್, ಗಾಯಾಳುಗಳ ಆರೋಗ್ಯ ವಿಚಾರಿಸಿ, ಅವರಿಗೆ ಆತ್ಮಸ್ಥೈರ್ಯ ತುಂಬಿದರು. ಬಡ ರೈತ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಲು ಅಗತ್ಯ ಹೋರಾಟ ನಡೆಸುವುದಾಗಿ ಭರವಸೆ ನೀಡಿದರು.
ಬಡವರು ಹಾಗೂ ರೈತ ಕುಟುಂಬಗಳ ಮೇಲೆ ಪ್ರಭಾವ ಬಳಸಿ ದೌರ್ಜನ್ಯ ಎಸಗುವ ಪ್ರಯತ್ನಗಳಿಗೆ ಕಡಿವಾಣ ಹಾಕಬೇಕು. ಘಟನೆಯ ಕುರಿತು ಸಮಗ್ರ ತನಿಖೆ ನಡೆಸಿ, ಹಲ್ಲೆ ನಡೆಸಿದ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಸಂತ್ರಸ್ತ ಕುಟುಂಬಕ್ಕೆ ರಕ್ಷಣೆ ಒದಗಿಸುವುದರ ಜೊತೆಗೆ ನ್ಯಾಯ ದೊರಕಿಸಿಕೊಡಲು ಸಂಬಂಧಪಟ್ಟ ಅಧಿಕಾರಿಗಳು ಮುಂದಾಗಬೇಕು ಎಂದು ಉಮೇಶ್ ಕೆ. ಮುದ್ನಾಳ್ ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಗಾಯಾಳುಗಳ ಸಂಬಂಧಿಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.























