
ಕೋಲಾರ, ನ,೨೭- ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಪ್ರಕರಣ ನಡೆಯುತ್ತಿರುವ ನ್ಯಾಯಾಲಯಕ್ಕೆ ಪ್ರಕರಣ ರಾಜಿ ಮಾಡಿಕೊಳ್ಳುವ ಕುರಿತು ತಿಳಿಸುವ ಅಥವಾ ಅರ್ಜಿ ಸಲ್ಲಿಸುವ ಮೂಲಕ ಪ್ರಕರಣವನ್ನು ಇತ್ಯರ್ಥ ಮಾಡಿಕೊಳ್ಳಬಹುದೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ ಜಿ.ಎ ಅವರು ಹೇಳಿದರು.
ನವದೆಹಲಿ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಬೆಂಗಳೂರು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಕೋಲಾರ ಜಿಲ್ಲಾ ನ್ಯಾಯಾಲಯಗಳಲ್ಲಿ ಹಾಗೂ ತಾಲ್ಲೂಕು ಬಂಗಾರಪೇಟೆ, ಶ್ರೀನಿವಾಸಪುರ, ಮಾಲೂರು, ಮುಳಬಾಗಿಲು ಮತ್ತು ಕೆ.ಜಿ.ಎಫ್ ನ್ಯಾಯಾಲಯಗಳಲ್ಲಿ ಡಿಸೆಂಬರ್ ೧೩ ರಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಈ ವರ್ಷದ ಮೊದಲನೇ ರಾಷ್ಟ್ರೀಯ ಜನತಾ ನ್ಯಾಯಾಲಯ ಹಮ್ಮಿಕೊಳ್ಳಲಾಗುತ್ತಿದೆ. ಈ ರಾಷ್ಟ್ರೀಯ ಜನತಾ ನ್ಯಾಯಾಲಯದಲ್ಲಿ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥ ಮಾಡಿಕೊಳ್ಳಲು ಅವಕಾಶವಿರುತ್ತದೆ.
ಈ ರಾಷ್ಟ್ರೀಯ ಜನತಾ ನ್ಯಾಯಾಲಯದಲ್ಲಿ ಉಭಯ ಪಕ್ಷಗಾರರು ಹಾಗೂ ಅವರ ವಕೀಲರು ಪೂರ್ವ ಸಂಧಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ತಮ್ಮ ಪ್ರಕರಣಗಳನ್ನು ಸಂಧಾನ ಮೂಲಕ ಬಗೆಹರಿಸಿಕೊಳ್ಳುವ ಅವಕಾಶವಿದೆ. ಸದರಿ ಪರ್‍ಯಾಯ ನ್ಯಾಯ ವಿತರಣೆ ಜನಮನ್ನಣೆ ಪಡೆದುಕೊಂಡಿದ್ದು, ಅದರಲ್ಲಿ ಉಭಯ ಪಕ್ಷಗಾರರು ತಮ್ಮ ಪ್ರಕರಣಗಳನ್ನು ರಾಜಿ ಮಾಡಿಕೊಳ್ಳಲು ಮುಕ್ತ ಅವಕಾಶವಿರುತ್ತದೆ. ರಾಷ್ಟ್ರೀಯ ಜನತಾ ನ್ಯಾಯಾಲಯದಲ್ಲಿ ಪ್ರಕರಣಗಳನ್ನು ಇತ್ಯರ್ಥ ಮಾಡಿಕೊಳ್ಳಲು ಇಚ್ಛಿಸುವ ಪಕ್ಷಗಾರರು ಮುಂಚಿತವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲ್ಲೂಕು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ತಿಳಿಸಿದರು.
ಜನತಾ ನ್ಯಾಯಾಲಯದಲ್ಲಿ ಸಿವಿಲ್ ಪ್ರಕರಣಗಳು, ರಾಜಿಯಾಗುವ ಕ್ರಿಮಿನಲ್ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು, ಮೋಟಾರ್ ವಾಹನ ಅಪಘಾತ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ವೈವಾಹಿಕ-ಕುಟುಂಬ ನ್ಯಾಯಾಲಯದ ಪ್ರಕರಣಗಳು (ವಿಚ್ಚೇದನೆಯನ್ನು ಹೊರತುಪಡಿಸಿ), ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧಿಕರಣದ ಪ್ರಕರಣಗಳು, ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳು, ಕಾರ್ಮಿಕ ವಿವಾದಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ರಾಜಿಯಾಗಬಲ್ಲ ಸಿವಿಲ್ ಪ್ರಕರಣಗಳು ಮತ್ತು ಜೀವನಾಂಶ ಪ್ರಕರಣಗಳನ್ನು ರಾಜಿ ಮಾಡಿಕೊಳ್ಳುವ ಅವಕಾಶವಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದರು.
ಈ ಹಿಂದೆ ೨೦೨೫ನೇ ಸಾಲಿನಲ್ಲಿ ನಡೆದ ೦೩ ಜನತಾ ನ್ಯಾಯಾಲಯಗಳಲ್ಲಿ ಒಟ್ಟು ೨೯೦೫೮ ಪ್ರಕರಣಗಳು ರಾಜಿಯಾಗಿದ್ದು, ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳು ೨೭೨೩೨೦ ರಾಜಿಯಾಗಿದ್ದು, ಒಟ್ಟು ೩೦೧೦೭೮ ಪ್ರಕರಣಗಳು ರಾಜಿ ಮೂಲಕ ಮುಕ್ತಾಗೊಂಡಿರುತ್ತದೆ. ಸದರಿ ೦೩ ಜನತಾ ನ್ಯಾಯಾಲಯಗ:ಲ್ಲಿ ಒಟ್ಟು ರೂ.೫೪,೮೭,೧೮,೪೮೬-೦೦ ಪರಿಹಾರದ ಹಣ ರಾಜಿ ಮೂಲಕ ಪಾವತಿಯಾಗಿರುತ್ತದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾನೂನು ಸವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸುನಿಲ್ ಎಸ್ ಹೊಸಮನಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಮುನೇಗೌಡ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
























