
ಬೆಂಗಳೂರು, ನ. ೨೦- ಸಂಪುಟ ಪುನಾರಚನೆ,ಅಧಿಕಾರ ಹಂಚಿಕೆ ಎಲ್ಲವನ್ನು ಹೈಕಮಾಂಡ್ ತೀರ್ಮಾನಿಸುತ್ತದೆ. ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದರು
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರ ಹಂಚಿಕೆ ವಿಚಾರ ಕಾಂಗ್ರೆಸ್ ಶಾಸಕಾಂಗ ಪಕ್ಷದಸಭೆಯಲ್ಲಿ ಚರ್ಚೆಯಾಗಿಲ್ಲ. ಈ ಬಗ್ಗೆ ನಮಗ್ಯಾರಿಗೂ ಮಾಹಿತಿಯೇ ಇಲ್ಲ. ಹೀಗಿರುವಾಗ ಅದಕ್ಕೆ ಅಷ್ಟೊಂದು ಮಹತ್ವ ಕೊಡುವ ಅಗತ್ಯವಿಲ್ಲ ಎಂದರು.
ಅಧಿಕಾರ ಹಂಚಿಕೆ, ಸಂಪುಟ ಪುನಾರಚನೆ ಎಲ್ಲವನ್ನೂ ಹೈಕಮಾಂಡ್ ತೀರ್ಮಾನಿಸುತ್ತದೆ. ಸುಮ್ಮನೆ ಈ ಬಗ್ಗೆ ನಾವುಗಳು ಚರ್ಚೆ ಮಾಡಿದರೆ ಅದಕ್ಕೆ ಕಿಮ್ಮತ್ತಿಲ್ಲ ಎಂದರು.
ಹೈಕಮಾಂಡ್‌ಗೆ ಎಲ್ಲವೂ ಗೊತ್ತಿದೆ. ರಾಜ್ಯದ ರಾಜಕೀಯಬೆಳವಣಿಗೆಗಳ ಬಗ್ಗೆಯೂ ಮಾಹಿತಿ ಇರುತ್ತದೆ. ಹಾಗಾಗಿ ಅವರು ಎಲ್ಲವನ್ನು ತೀರ್ಮಾನಿಸುತ್ತಾರೆ ಎಂದು ಪರಮೇಶ್ವರ್ ಹೇಳಿದರು.
ಬೆಂಗಳೂರಿನಲ್ಲಿ ನಿನ್ನೆ ಹಾಡ ಹಗಲೇ ಸುಮಾರು ೭ ಕೋಟಿ ರೂ. ದರೋಡೆ ಮಾಡಿದ ಪ್ರಕರಣದ ತನಿಖೆ ಚುರುಕಾಗಿ ನಡೆದಿದ್ದು ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸುತ್ತೇವೆ ಎಂದು ಹೇಳಿದರು.


































