
ಕೋಲಾರ,ಜ,೧೩- ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ಸೇರಿದಂತೆ ಎಲ್ಲಾ ಇಲಾಖೆಗಳ ಸಹಭಾಗಿತ್ವದಲ್ಲಿ ಜನವರಿ ೨೬ ರಂದು ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಅಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗಣರಾಜ್ಯೋತ್ಸವವನ್ನು ನಗರದ ಸರ್ ಎಂ. ವಿಶ್ವೇಶ್ವರಯ್ಯ ಜಿಲ್ಲಾ ಆಟದ ಮೈದಾನದಲ್ಲಿ ಆಯೋಜಿಸಲಾಗುತ್ತಿದ್ದು, ಅಂದು ಬೆಳಿಗ್ಗೆ ೭ಕ್ಕೆ ನಗರದ ಕ್ಲಾಕ್ ಟವರ್‌ನಲ್ಲಿ ಧ್ವಜಾರೋಹಣ ನಡೆಯಲಿದೆ. ಬೆಳಿಗ್ಗೆ ೯ ಗಂಟೆಗೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ ನೆರವೇರಿಸುವರು. ತಮ್ಮ ತಮ್ಮ ಕಚೇರಿಗಳಲ್ಲಿ ಧ್ವಜಾರೋಹಣ ನೆರವೇರಿಸಿ ಅಧಿಕಾರಿಗಳು ತಮ್ಮ ಸಿಬ್ಬಂದಿಗಳೊಂದಿಗೆ ಕಡ್ಡಾಯವಾಗಿ ಭಾಗವಹಿಸುವಂತೆ ಸೂಚಿಸಿದ ಅವರು, ಜಿಲ್ಲೆಯಾದ್ಯಂತ ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆಗೆ ಕ್ರಮಕೈಗೊಳ್ಳಬೇಕು ಎಂದು ಹೇಳಿದರು.
ಶಿಷ್ಟಾಚಾರ ಪಾಲನೆ ಮತ್ತು ವೇದಿಕೆ ನಿರ್ಮಾಣ ಸೇರಿದಂತೆ ಮೈದಾನ ಸ್ವಚ್ಛತೆ, ಕಚೇರಿಗಳಲ್ಲಿ ಹಾಗೂ ನಗರದಲ್ಲಿ ದೀಪಾಲಂಕಾರ ವ್ಯವಸ್ಥೆ ಮಾಡುವಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ತಿಳಿಸಿದರು.
ಧ್ವಜಾರೋಹಣ ಪ್ರಯುಕ್ತ ರಾಷ್ಟ್ರಗೀತೆ, ನಾಡಗೀತೆ, ಪಥಸಂಚಲನ ಹಾಗೂ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಶಿಷ್ಟಾಚಾರದಂತೆ ಅತಿಥಿ ಗಣ್ಯರನ್ನು ಆಹ್ವಾನಿಸಲು ಅಗತ್ಯ ಸಿದ್ದತೆಗಳನ್ನು ಮಾಡಿ ಅಚ್ಚುಕಟ್ಟಾಗಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದರು.
ಪೊಲೀಸ್ ಇಲಾಖೆ, ಅಬಕಾರಿ ಇಲಾಖೆ, ಅಗ್ನಿಶಾಮಕದಳ ಸೇರಿದಂತೆ ಕವಾಯತು ತಂಡಗಳ ಪಥ ಸಂಚಲನಕ್ಕೆ ಸಿದ್ಧತೆ ಮಾಡಿಕೊಳ್ಳುವಂತೆ ತಿಳಿಸಿದ ಅವರು, ಸೂಕ್ತ ಬಂದೋಬಸ್ತ್ ಕೈಗೊಳ್ಳಲು ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಸಂಜೆ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಗರದ ಟಿ. ಚನ್ನಯ್ಯ ರಂಗಮಂದಿರದಲ್ಲಿ ಹಮ್ಮಿಕೊಳ್ಳಲು ಸಭೆಯಲ್ಲಿ ನಿರ್ಧರಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕನ್ನಿಕಾ ಸಿಕ್ರಿವಾಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪ್ರವೀಣ್ ಪಿ. ಬಾಗೇವಾಡಿ, ಅಪರ ಜಿಲ್ಲಾಧಿಕಾರಿ ಎಸ್.ಎಂ. ಮಂಗಳ, ಅಸಿಸ್ಟೆಂಟ್ ಕಮಿಷನರ್ ಮೈತ್ರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಜಯಲಕ್ಷ್ಮಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಜಗದೀಶ್, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅಜಯ್ ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ವಿಜಯಲಕ್ಷ್ಮಿ ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.



























