
ಔರಾದ್ : ಔರಾದ(ಬಿ) ತಾಲ್ಲೂಕನ್ನು ಕೂಡಲೇ ಬರಪೀಡಿತ ಪ್ರದೇಶವೆಂದು ಘೋಷಿಸಿ, ಬರದಿಂದ ಸಂಕಷ್ಟಕ್ಕೊಳಗಾಗಿರುವ ರೈತರಿಗೆ ಸರ್ಕಾರದ ಪರಿಹಾರ ಹಾಗೂ ಅಗತ್ಯ ನೆರವು ಒದಗಿಸುವಂತೆ ಶಾಸಕ ಪ್ರಭು ಬಿ.ಚವ್ಹಾಣ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರನ್ನು ಒತ್ತಾಯಿಸಿದ್ದಾರೆ.
ವಿಧಾನಸೌಧದಲ್ಲಿ ಸೆ.23 ರಂದು ಮುಖ್ಯಮಂತ್ರಿಗಳನ್ನು ಖುದ್ದಾಗಿ ಭೇಟಿ ಮಾಡಿದ ಶಾಸಕರು, ಔರಾದ(ಬಿ) ತಾಲ್ಲೂಕಿನಲ್ಲಿ ಉಂಟಾಗಿರುವ ಮಳೆ ಕೊರತೆ ಹಾಗೂ ರೈತರು ಎದುರಿಸುತ್ತಿರುವ ಗಂಭೀರ ಬರ ಪರಿಸ್ಥಿತಿಯ ಕುರಿತು ವಿವರವಾಗಿ ಮನವರಿಕೆ ಮಾಡಿಕೊಟ್ಟರು.
ಬೀದರ ಜಿಲ್ಲೆಯ ಔರಾದ(ಬಿ) ತಾಲ್ಲೂಕನ್ನು ಹೊರತುಪಡಿಸಿ ಉಳಿದ ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದೆ. ಔರಾದ(ಬಿ) ತಾಲ್ಲೂಕಿನಲ್ಲಿ ಬಹುತೇಕ ಕೃಷಿ ಮಳೆಯಾಧಾರಿತವಾಗಿದ್ದು, ಈ ಬಾರಿ ಮುಂಗಾರು ಮಳೆಯೂ ತಡವಾಗಿ ಆರಂಭವಾಗಿದ್ದಲ್ಲದೆ, ಬೆಳೆಗಳ ಹೂ ಮತ್ತು ಕಾಯಿ ಬಿಡುವ ಹಂತದಲ್ಲಿ ಮಳೆ ಕೈಕೊಟ್ಟಿದೆ. ಪರಿಣಾಮವಾಗಿ ಉದ್ದು, ಹೆಸರು, ಸೋಯಾಬೀನ್, ತೊಗರಿ ಸೇರಿದಂತೆ ವಿವಿಧ ಬೆಳೆಗಳು ಒಣಗಿ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಈ ಹಿಂದೆಯೂ ಹಲವು ಬಾರಿ ಮುಖ್ಯಮಂತ್ರಿಗಳು, ಸಂಬಂಧಪಟ್ಟ ಸಚಿವರು ಹಾಗೂ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಔರಾದ(ಬಿ) ತಾಲ್ಲೂಕಿನ ಬರ ಪರಿಸ್ಥಿತಿಯನ್ನು ಸರ್ಕಾರದ ಗಮನಕ್ಕೆ ತರಲಾಗಿದೆ. ಅಲ್ಲದೆ, ರೈತರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಆಗ್ರಹಿಸಿ ಔರಾದ ಪಟ್ಟಣದಲ್ಲಿ ರೈತರೊಂದಿಗೆ ಬೃಹತ್ ಪ್ರತಿಭಟನೆಯನ್ನೂ ನಡೆಸಲಾಗಿದೆ. ಆದರೂ ಔರಾದ(ಬಿ) ತಾಲ್ಲೂಕು ಬರಪೀಡಿತ ಪಟ್ಟಿಯಿಂದ ಹೊರಗುಳಿದಿರುವುದು ರೈತರಿಗೆ ಅನ್ಯಾಯವಾಗಿದೆ ಎಂದು ಪ್ರಭು ಚವ್ಹಾಣ ಅವರು ತಿಳಿಸಿದ್ದಾರೆ.
ಕಮಲನಗರ ತಾಲ್ಲೂಕನ್ನು ಗ್ರೌಂಡ್ ಟ್ರುಥಿಂಗ್ ಪಟ್ಟಿಗೆ ಸೇರಿಸಿದ್ದರೂ ಸಾಧಾರಣ ಬರ ಎಂದು ನಮೂದಿಸಲಾಗಿದೆ. ಔರಾದ(ಬಿ) ಹಾಗೂ ಕಮಲನಗರ ಎರಡೂ ತಾಲ್ಲೂಕುಗಳಲ್ಲೂ ವಾಸ್ತವ ಪರಿಸ್ಥಿತಿ ಗಂಭೀರವಾಗಿದ್ದು, ಬರದ ತೀವ್ರತೆಯನ್ನು ಮರುಪರಿಶೀಲಿಸಿ ಎರಡೂ ತಾಲ್ಲೂಕುಗಳನ್ನು ತೀವ್ರ ಸ್ವರೂಪದ ಬರಪೀಡಿತ ಪ್ರದೇಶಗಳ ಪಟ್ಟಿಗೆ ಸೇರಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.
ಮನವಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಔರಾದ(ಬಿ) ತಾಲ್ಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ನಾನು ಸದಾ ರೈತರ ಪರವಾಗಿ ನಿಂತಿದ್ದೇನೆ. ರೈತರ ಸಂಕಷ್ಟದ ಸಂದರ್ಭದಲ್ಲಿ ಅವರೊಂದಿಗೆ ಇರಲು ಯಾವತ್ತೂ ಹಿಂದೆ ಸರಿಯುವುದಿಲ್ಲ. ಔರಾದ(ಬಿ) ತಾಲ್ಲೂಕಿನ ರೈತರಿಗೆ ಯಾವುದೇ ರೀತಿಯ ಅನ್ಯಾಯವಾಗಲು ಬಿಡುವುದಿಲ್ಲ. ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ಸರ್ಕಾರದ ನೆರವು ದೊರೆಯುವವರೆಗೆ ನಿರಂತರವಾಗಿ ಪ್ರಯತ್ನಿಸುತ್ತೇನೆ ಎಂದು ಶಾಸಕ ಪ್ರಭು ಬಿ.ಚವ್ಹಾಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ


























