
ಕರಜಗಿ:ಜ.5:ಅಫಜಲಪೂರ ತಾಲೂಕಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುವ ವೈದ್ಯಕೀಯ ಸಿಬ್ಬಂದಿಗಳು ಕರ್ತವ್ಯ ಸಮಯವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಜೊತೆಗೆ ಸಮವಸ್ತ್ರ ಹಾಗೂ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಧರಿಸಿ ಸೇವೆ ಸಲ್ಲಿಸಬೇಕು ಎಂದು ಕರುನಾಡ ವಿಜಯಸೇನೆ ತಾಲೂಕು ಅಧ್ಯಕ್ಷ ಸಿದ್ದು ಸುಲ್ತಾನಪೂರ ಅವರು ತಾಲೂಕು ಆರೋಗ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಆರೋಗ್ಯಾಧಿಕಾರಿಗಳನ್ನು ಭೇಟಿ ಮಾಡಿ ಮಾತನಾಡಿದ ಅವರು, ಕೆಲ ಸರ್ಕಾರಿ ಆಸ್ಪತ್ರೆಗಳಲ್ಲಿ ಸಿಬ್ಬಂದಿಗಳ ಸಮಯ ಪಾಲನೆ ಕೊರತೆಯಿಂದ ಸಾರ್ವಜನಿಕರಿಗೆ ಅನಗತ್ಯ ತೊಂದರೆ ಎದುರಾಗುತ್ತಿದೆ ಎಂದು ದೂರಿದರು. ಸಮವಸ್ತ್ರ ಹಾಗೂ ಗುರುತಿನ ಚೀಟಿಯಿಲ್ಲದೇ ಕರ್ತವ್ಯ ನಿರ್ವಹಿಸುವುದರಿಂದ ಯಾರು ಸಿಬ್ಬಂದಿ, ಯಾರು ಸಾರ್ವಜನಿಕರು ಎಂಬ ಗೊಂದಲ ಉಂಟಾಗಿ ರೋಗಿಗಳಿಗೆ ಸೇವೆ ಪಡೆಯುವುದು ಕಷ್ಟವಾಗುತ್ತಿದೆ ಎಂದು ಹೇಳಿದರು.
ಸರ್ಕಾರಿ ಸಂಬಳ ಪಡೆಯುವ ಸಿಬ್ಬಂದಿಗಳು ನಿಯಮಗಳನ್ನು ಪಾಲಿಸದೇ ನಿರ್ಲಕ್ಷ್ಯ ವಹಿಸುವುದು ಸರಿಯಲ್ಲ. ಕೆಲ ಆಸ್ಪತ್ರೆಗಳಲ್ಲಿ ಮನಸೋ ಇಚ್ಛೆಯಂತೆ ಕಾರ್ಯನಿರ್ವಹಿಸುವ ಪ್ರವೃತ್ತಿ ಕಂಡುಬರುತ್ತಿದ್ದು, ಇದರಿಂದ ರೋಗಿಗಳು ಮತ್ತು ಅವರ ಕುಟುಂಬಗಳು ಸಮಸ್ಯೆ ಎದುರಿಸಬೇಕಾಗಿದೆ ಎಂದು ಅವರು ಹೇಳಿದರು.
ಆದ್ದರಿಂದ ಎಲ್ಲ ವೈದ್ಯಕೀಯ ಸಿಬ್ಬಂದಿಗಳು ಕರ್ತವ್ಯ ಸಮಯ, ಸಮವಸ್ತ್ರ ಮತ್ತು ಗುರುತಿನ ಚೀಟಿ ಸೇರಿದಂತೆ ಸೇವಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಕಠಿಣ ನಿರ್ದೇಶನ ನೀಡಬೇಕು ಎಂದು ಸಿದ್ದು ಸುಲ್ತಾನಪೂರ ಒತ್ತಾಯಿಸಿದರು.
























