Home ಜಿಲ್ಲೆ ದೋರನಹಳ್ಳಿ ಪಟ್ಟಣದ ಮೂಲಸೌಕರ್ಯ ಅಭಿವೃದ್ಧಿಗೆ ಆಗ್ರಹ: ಶಾಸಕ ತುನ್ನೂರಗೆ ಮನವಿ

ದೋರನಹಳ್ಳಿ ಪಟ್ಟಣದ ಮೂಲಸೌಕರ್ಯ ಅಭಿವೃದ್ಧಿಗೆ ಆಗ್ರಹ: ಶಾಸಕ ತುನ್ನೂರಗೆ ಮನವಿ

ಯಾದಗಿರಿ: ಯಾದಗಿರಿ ಮತಕ್ಷೇತ್ರದ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಅವರಿಗೆ ದೋರನಹಳ್ಳಿ ಪಟ್ಟಣದ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಹಾಗೂ ಅಬ್ದುಲ್ ಬಾಷಾ ಮುತ್ಯಾನ ಕರೆ ರಸ್ತೆಯ ನಿರ್ಮಾಣ ಮತ್ತು ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವಂತೆ ಪ್ರಜಾಸೇವಾ ಆಂದೋಲನದ ವತಿಯಿಂದ ಮನವಿ ಸಲ್ಲಿಸಲಾಯಿತು.
ಪಟ್ಟಣದ ಜನರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಗಮನ ಸೆಳೆದ ಕರವೇ ತಾಲೂಕು ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ದೋರನಹಳ್ಳಿ ಅವರು, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಛತೆ, ಕುಡಿಯುವ ನೀರು, ಚರಂಡಿ ವ್ಯವಸ್ಥೆ, ರಸ್ತೆ ಹಾಗೂ ಬೀದಿದೀಪ ಸೇರಿದಂತೆ ಹಲವು ಮೂಲಭೂತ ಸೌಕರ್ಯಗಳ ಕೊರತೆಯಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಸಮಸ್ಯೆಗಳಿಗೆ ಆದ್ಯತೆ ನೀಡಿ ಅಗತ್ಯ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವಂತೆ ಶಾಸಕರಿಗೆ ಮನವಿ ಮಾಡಿದರು.
ಅದೇ ರೀತಿ, ಅಬ್ದುಲ್ ಬಾಷಾ ಮುತ್ಯಾನ ಕರೆ ರಸ್ತೆಯ ಸಮಸ್ಯೆ ಹಲವು ದಿನಗಳಿಂದ ಬಗೆಹರಿಯದೆ ಉಳಿದಿದ್ದು, ಈ ಹಿಂದೆ ಜುಲೈ ತಿಂಗಳಲ್ಲಿ ಕರವೇ ಸಂಘಟನೆ ಹಾಗೂ ಪಟ್ಟಣದ ನಾಗರಿಕರು ಒಟ್ಟಾಗಿ ಶಾಸಕರಿಗೆ ಮನವಿ ಸಲ್ಲಿಸಿದ್ದರು. ಆಗ ಶಾಸಕರು ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಭರವಸೆ ನೀಡಿದ್ದರೂ, ಈವರೆಗೆ ನಿರೀಕ್ಷಿತ ಪ್ರಗತಿ ಕಂಡುಬಂದಿಲ್ಲ ಎಂದು ಮನವಿಯಲ್ಲಿ ಗಮನ ಸೆಳೆಯಲಾಯಿತು.
ಹೀಗಾಗಿ, ರಸ್ತೆಯ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ತಕ್ಷಣ ಅಭಿವೃದ್ಧಿ ಕಾಮಗಾರಿ ಆರಂಭಿಸುವ ಮೂಲಕ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕು ಎಂದು ಪ್ರತ್ಯೇಕ ಮನವಿ ಸಲ್ಲಿಸಿ ಒತ್ತಾಯಿಸಲಾಯಿತು.
ಪಟ್ಟಣದ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿ, ಅಗತ್ಯ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರವಾಗಿ ಕೈಗೊಳ್ಳುವಂತೆ ಪ್ರಜಾಸೇವಾ ಆಂದೋಲನದ ಮುಖಂಡರು ಶಾಸಕರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕರವೇ ತಾಲೂಕು ಅಧ್ಯಕ್ಷ ಅಂಬ್ರೇಶ್ ಕಟ್ಟಿಮನಿ, ಉಪಾಧ್ಯಕ್ಷ ಆಂಜನೇಯ ಇಂಬ್ರಾಪೂರ, ಹೋಬಳಿ ಅಧ್ಯಕ್ಷ ಮರಿಲಿಂಗ ಗಣೇರ, ಹೋಬಳಿ ಪ್ರಧಾನ ಕಾರ್ಯದರ್ಶಿ ಭಾಗಣ್ಣ ನಂದಿಕೋಲ, ಹೋಬಳಿ ಉಪಾಧ್ಯಕ್ಷ ದೇವರಾಜ ಗುತ್ತಿಗೆದಾರ ಸೇರಿದಂತೆ ಸಂಘಟನೆಯ ಮುಖಂಡರು ಹಾಗೂ ಇತರರು ಉಪಸ್ಥಿತರಿದ್ದರು.