
ಕೋಲಾರ,ಜ,೧೭- ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಅಧಿಕಾರಿಗಳು ಕೆಲಸ ಮಾಡಲು ರಾಜಕೀಯ ಒತ್ತಡಗಳು ಹೆಚ್ಚಾಗುತ್ತಿದ್ದು, ಶಿಡ್ಲಘಟ್ಟ ನಗರಸಭೆಯ ಆಯುಕ್ತರಿಗೆ ಕಾಂಗ್ರೆಸ್ ಮುಖಂಡರಾದ ರಾಜೀವ್‌ಗೌಡ ಎಂಬುವರು ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ, ಜನರನ್ನು ದಂಗೆಯೆಬ್ಬಿಸುವುದಾಗಿ ಬೆದರಿಕೆ ಹಾಕಿದ್ದು, ಇವರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಿ.ಎಂ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಜಿಲ್ಲಾಧ್ಯಕ್ಷ ಟಿ.ಎನ್.ರಾಮೇಗೌಡ ಒತ್ತಾಯಿಸಿದರು.
ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿ ಮಾತನಾಡುತ್ತಾ, ಕಳೆದ ಕೆಲವು ದಿನಗಳ ಹಿಂದೆ ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಾಟೆಯಲ್ಲಿ ಅಮಾಯಕರೊಬ್ಬರು ಜೀವ ಕಳೆದುಕೊಂಡಿದ್ದಾರೆ. ಇದಕ್ಕೆ ಅಲ್ಲಿನ ರಕ್ಷಣಾಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿ ಅವರನ್ನು ಅಮಾನತು ಮಾಡಲಾಗಿರುತ್ತದೆ. ಇಂತಹ ಹಲವಾರು ಘಟನೆಗಳು ರಾಜ್ಯದಲ್ಲಿ ಇತ್ತೀಚೆಗೆ ನಡೆಯುತ್ತಿವೆ. ಇದರಿಂದಾಗಿ ಅಧಿಕಾರಿಗಳು ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಬದಲಿಗೆ ಸಾರ್ವಜನಿಕರ ಕೆಲಸಗಳು ವಿಳಂಬವಾಗುತ್ತಿವೆ ಎಂದರು.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಜಿ.ವೀರಭದ್ರಸ್ವಾಮಿ ಮಾತನಾಡುತ್ತಾ ರಾಜ್ಯದ ೩೧ ಜಿಲ್ಲೆಗಳಲ್ಲಿ ಇದೇ ಪರಿಸ್ಥಿತಿ ಉಂಟಾಗುತ್ತಿದೆ. ಇದನ್ನು ಗಮನಿಸಿದರೆ ಸಾರ್ವಜನಿಕರ ಸೇವೆಗೆ ಇರುವಂತಹ ಅಧಿಕಾರಿಗಳು ಇನ್ನು ಮುಂದೆ ಕೆಲಸ ಮಾಡಲು ಸಾಧ್ಯವಿಲ್ಲ. ಈ ಕೂಡಲೇ ಸರ್ಕಾರಿ ಅಧಿಕಾರಿಗಳು ನೆಮ್ಮದಿಯಿಂದ ನಿರ್ಭೀತಿ ಯಿಂದ ಕೆಲಸ ಮಾಡಲು ರಾಜಕಾರಣಿಗಳ ಪ್ರಭಾವ ಬೀರದಂತೆ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಬಂಗಾರಪೇಟೆ ತಾಲ್ಲೂಕು ಅಧ್ಯಕ್ಷ ಮುರಳಿ, ರೈತ ಮುಖಂಡರಾದ ಶ್ಯಾಮಸುಂದರ್, ಮುರಳಿ, ಸಂತೋಷ್, ಮುಜೀಬ್ ಪಾಷ ಹಾಜರಿದ್ದರು.



























