Home ಜಿಲ್ಲೆ ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಕಲ್ಪಿಸಲು ಆಗ್ರಹ

ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಕಲ್ಪಿಸಲು ಆಗ್ರಹ

ವಿಜಯಪುರ, ಅ. 9: ವಿಜಯಪುರ ಜಿಲ್ಲೆಯನ್ನು ಸಂವಿಧಾನದ 371(ಜೆ) ವಿಶೇಷ ಮೀಸಲಾತಿ ವ್ಯಾಪ್ತಿಗೆ ಸೇರ್ಪಡೆಗೊಳಿಸಿ, ಜಿಲ್ಲೆಯ ಜನರಿಗೆ ನ್ಯಾಯ ಒದಗಿಸಬೇಕು ಎಂದು ವಿಜಯಪುರ ಜಿಲ್ಲಾ 371(ಜೆ) ಹೋರಾಟ ಸಮಿತಿ ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಅವರಿಗೆ ಮನವಿ ಸಲ್ಲಿಸಿತು.
371(ಜೆ) ಮೀಸಲಾತಿಯಿಂದ ಹೊರಗುಳಿದಿರುವ ವಿಜಯಪುರ ಜಿಲ್ಲೆಯನ್ನು ಕಲ್ಯಾಣ ಕರ್ನಾಟಕ ವ್ಯಾಪ್ತಿಗೆ ಸೇರ್ಪಡೆಗೊಳಿಸಲು ರಾಜ್ಯ ಸರ್ಕಾರದ ಮೂಲಕ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ಗಮನಕ್ಕೂ ತಂದು, ಸಂವಿಧಾನದ 371(ಜೆ)ಗೆ ತಿದ್ದುಪಡಿ ಮಾಡಿ ವಿಜಯಪುರ ಜಿಲ್ಲೆಗೂ ಮೀಸಲಾತಿ ಸೌಲಭ್ಯ ಕಲ್ಪಿಸಬೇಕು ಎಂದು ಸಮಿತಿ ಮುಖಂಡರು ಒತ್ತಾಯಿಸಿದರು.
ಜಿಲ್ಲೆಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸೌಲಭ್ಯ, ಯುವಕರಿಗೆ ಉದ್ಯೋಗ ಮತ್ತು ನೇಮಕಾತಿಯಲ್ಲಿ ಮೀಸಲಾತಿ, ಕಲ್ಯಾಣ ಕರ್ನಾಟಕ ಭಾಗಕ್ಕೆ ದೊರೆಯುವ ವಿಶೇಷ ಅನುದಾನ ಸೇರಿದಂತೆ ವಿವಿಧ ಸೌಲಭ್ಯಗಳು ದೊರೆಯಲು 371(ಜೆ) ವ್ಯಾಪ್ತಿಗೆ ವಿಜಯಪುರ ಜಿಲ್ಲೆಯನ್ನು ಸೇರಿಸುವುದು ಅಗತ್ಯವಾಗಿದೆ. ಸುಮಾರು 25 ಲಕ್ಷ ಜನರ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಮನವಿ ಸ್ವೀಕರಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಅವರು, ಹೋರಾಟ ಸಮಿತಿಯ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದರು. ಈ ವಿಷಯವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಹಾಗೂ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಗಮನಕ್ಕೆ ತಂದು, ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಹೋರಾಟ ಸಮಿತಿ ಮುಖಂಡರಾದ ವಿನೋದ ಖೇಡ, ಲಾಯಪ್ಪ ಇಂಗಳೆ, ಅನಿಲ ಇಕ್ಕಡ, ಸಿದ್ದನಗೌಡ ಪಾಟೀಲ, ಮಹಾದೇವಪ್ಪ ತೇಲಿ, ದಶರಥ ರಜಪೂತ, ಶಿವಶಂಕರ ಮಂಗೊಂಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.