
ಸಂಜೆವಾಣಿ ವಾರ್ತೆ,
ವಿಜಯಪುರ, ಅ. ೨೮: ವಿಜಯಪುರ ಜಿಲ್ಲೆಯ ಕಬ್ಬು ಬೆಳೆಗಾರರಿಗೆ ಪ್ರತಿ ಟನ್ಗೆ ೫,೫೦೦ ದರ ನಿಗದಿ ಮಾಡಿ ಪಾವತಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವಿಜಯಪುರ ಜಿಲ್ಲಾ ಘಟಕದ ವತಿಯಿಂದ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಅವರಿಗೆ ಮನವಿ ಸಲ್ಲಿಸಲಾಯಿತು.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಚಂದ್ರಗೌಡ ಪಾಟೀಲ ಮಾತನಾಡಿ, ಕಬ್ಬಿನ ಬೆಲೆ ನಿಗದಿಗಾಗಿ ರೈತರು ಹಲವು ದಿನಗಳಿಂದ ಹೋರಾಟ ನಡೆಸುತ್ತಿದ್ದರೂ ಸರ್ಕಾರ ಈವರೆಗೆ ಅಂತಿಮ ನಿರ್ಧಾರ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರೈತರ ಬೇಡಿಕೆಯಂತೆ ಪ್ರತಿ ಟನ್ ಕಬ್ಬಿಗೆ ೫,೫೦೦ ನಿಗದಿ ಮಾಡಬೇಕು. ಈ ಬೇಡಿಕೆ ಈಡೇರುವವರೆಗೆ ವಿಜಯಪುರ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳು ಕಾರ್ಯಾರಂಭ ಮಾಡದಂತೆ ತಡೆಯಲು ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
ಪಕ್ಕದ ಬಾಗಲಕೋಟೆ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಕಬ್ಬಿಗೆ ನಿಗದಿಪಡಿಸುವ ದರವನ್ನು ಪರಿಗಣಿಸಿ, ವಿಜಯಪುರ ಜಿಲ್ಲೆಯ ಕಬ್ಬಿಗೂ ಸೂಕ್ತ ಬೆಲೆ ನಿಗದಿ ಮಾಡುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಈ ಸಂದರ್ಭದಲ್ಲಿ ರಾಜ್ಯ ಗೌರವಾಧ್ಯಕ್ಷ ದಾನಪ್ಪಗೌಡ ಚನ್ನಗೊಂಡ, ಧರ್ಮಣ್ಣ ಕನ್ನೊಳ್ಳಿ, ಮಾಜಿ ತಾಲೂಕು ಅಧ್ಯಕ್ಷ ಜಾಲವಾದಿ ರವಿರಾಜ ದೇವರಮನಿ, ಗೋಲಗೇರಿ ದಸ್ತಗಿರ್ ಇನಾಮದಾರ, ದೇವರಹಿಪ್ಪರಗಿ ತಾಲೂಕು ಅಧ್ಯಕ್ಷ ಭೀಮಣ್ಣ ಮನಗೂಳಿ, ತಾಲೂಕು ಪ್ರಧಾನ ಕಾರ್ಯದರ್ಶಿ ಶಿವು ಹತ್ತಿ, ಗೋಲಗೇರಿ ಬಾಬುಗೌಡ ಬಿರಾದಾರ, ಶ್ರೀಶೈಲ ಜಾಲವಾದಿ, ಕುತ್ಬುದ್ದೀನ್ ಯಡ್ರಾಮಿ, ಎಂ.ಎA. ಹಂಗರಗಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.






















