
ಸಂಜೆವಾಣಿ ವಾರ್ತೆ
ವಿಜಯಪುರ, ಜೂ. ೩: ಮಾಜಿ ಸಚಿವರು ಹಾಗೂ ಬಸವನ ಬಾಗೇವಾಡಿ ಕ್ಷೇತ್ರದ ಜನಪ್ರಿಯ ಶಾಸಕ ಶಿವಾನಂದ ಪಾಟೀಲ ಅವರಿಗೆ
ನೂತನ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಿ ವೈದ್ಯಕೀಯ ಶಿಕ್ಷಣ ಖಾತೆಯನ್ನು ನೀಡಬೇಕು ಎಂದು ಕನ್ನಡದ ಕಟ್ಟಾಳು ಗಂಗಾಧರ ಕೋರಳ್ಳಿ ಪ್ರತಿಷ್ಠಾನ ಸಂಚಾಲಕ ಅನಿಲ ಹೊಸಮನಿ ಹಾಗೂ ಕಾರ್ಯದರ್ಶಿ ಲಾಯಪ್ಪ ಇಂಗಳೆ ಆಗ್ರಹಿಸಿದ್ದಾರೆ.
ಈ ಹಿಂದೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿ ರಾಜ್ಯದ ಆರೋಗ್ಯ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ಸಲ್ಲಿಸಿದ್ದಾರೆ.
ವಿಜಯಪುರ ಜಿಲ್ಲಾ ಆಸ್ಪತ್ರೆಯಲ್ಲಿ ತಾಯಿ -ಮಕ್ಕಳ ಆಸ್ಪತ್ರೆ, ಟ್ರಾಮಾ ಸೆಂಟರ್ ಸೆಂಟರ್ ಸೇರಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಜೊತೆಗೆ ಜಿಲ್ಲಾ ಆಸ್ಪತ್ರೆಗೆ ತಾಜಬಾವಡಿಯಿಂದ ನೀರಿನ
ಸಂಪರ್ಕ ಒದಗಿಸಿ ರಾಜ್ಯದಲ್ಲಿ ಮಾದರಿ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಿದ್ದಾರೆ. ಜೊತೆಗೆ ಜಿಲ್ಲೆಯ ತಾಲೂಕು ಆಸ್ಪತ್ರೆಗಳಲ್ಲಿ ವಿವಿಧ ಮೂಲಭೂತ ಸೌಲಭ್ಯ ಒದಗಿಸಿ ಆರೋಗ್ಯ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ.
ಹಿಂದಿನ ಸಿದ್ದರಾಮಯ್ಯ ಅವರ ನೇತೃತ್ವದ ಸರಕಾರದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ, ಕಬ್ಬು ಸಕ್ಕರೆ ಮತ್ತು ಜವಳಿ
ಸಚಿವರಾಗಿ ರಾಜ್ಯ ಮತ್ತು ಜಿಲ್ಲೆಯಲ್ಲಿ ಹಲವು ರೈತಪರ, ಜನಪರ ಕೆಲಸ ಕಾರ್ಯಗಳನ್ನು ಮಾಡಿರುವ ಶಿವಾನಂದ ಪಾಟೀಲರಿಗೆ ನೂತನ ಸಚಿವ ಸಂಪುಟದಲ್ಲಿ ಕಾಂಗ್ರೆಸ್ ಹೈಕಮಾಂಡ್ ಸಚಿವರನ್ನಾಗಿ ಮಾಡಿ ವೈದ್ಯಕೀಯ ಶಿಕ್ಷಣ ಸಚಿವ ಖಾತೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.


























