ರಾಜ್ಯ ಸರ್ಕಾರದಲ್ಲಿ ಅಭಿವೃದ್ಧಿ ಮೂಲೆ ಗುಂಪು: ಚಿಂದಾನಂದಗೌಡ

ಮಧುಗಿರಿ, ನ. ೨೬- ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಭಿವೃದ್ಧಿ ಮೂಲೆ ಗುಂಪಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಮಧುಗಿರಿ ಸಂಘಟನಾತ್ಮಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಚಿದಾನಂದಗೌಡ ತಿಳಿಸಿದರು.


ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ರೈತ ವಿರೋಧಿ ನೀತಿಯನ್ನು ಅನುಸರಿಸುತ್ತಾ, ಕುರ್ಚಿ ಕಿತ್ತಾಟದಲ್ಲಿ ಮಗ್ನವಾಗಿದೆ. ಇದು ರೈತ ವಿರೋಧಿ ಸರ್ಕಾರವಾಗಿದೆ ಎಂದರು.


ಈ ಹಿಂದೆ ಬಿಜೆಪಿ ಸರ್ಕಾರದಲ್ಲಿ ವಿದ್ಯುತ್ ಟ್ರಾನ್ಸ್‌ಫಾರಂಗಳನ್ನು ಉಚಿತವಾಗಿ ನೀಡಲಾಗುತ್ತಿತ್ತು. ಆದರೆ ಇಂದು ಒಂದು ಟ್ರಾನ್ಸ್ ಫಾರ್ಮರ್ ಅಳವಡಿಸಲು ೩ ಲಕ್ಷ ರೂ. ನೀಡಬೇಕಾದ ಪರಿಸ್ಥಿತಿ ಬಂದಿದೆ. ಕಾಂಗ್ರೆಸ್ ಸರ್ಕಾರಕ್ಕೆ ನಿರಂತರವಾಗಿ ಮೂರು ಗಂಟೆ ವಿದ್ಯುತ್ ನೀಡಲು ಸಾಧ್ಯವಾಗುತ್ತಿಲ್ಲ. ಹಾಲಿನ ದರ ಮೂರು ಬಾರಿ ಹೆಚ್ಚಿಸಿ ಆ ದರವನ್ನು ರೈತರಿಗೆ ನೀಡದೆ ವಂಚಿಸುತ್ತಿದೆ. ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಕಿಸಾನ್ ಸನ್ಮಾನ ಯೋಜನೆ ಅಡಿಯಲ್ಲಿ ರಾಜ್ಯದ ೫೧ ಲಕ್ಷ ರೈತರಿಗೆ ೬ ಸಾವಿರ ರೂ.ಗಳನ್ನು ನೀಡುತ್ತಿದೆ. ಕಿಸಾನ್ ಕ್ರೆಡಿಟ್ ಕಾರ್ಡ್ ಮೂರರಿಂದ ಐದು ಲಕ್ಷಕ್ಕೆ ಏರಿಸಲಾಗಿದೆ. ರೈತರ ಆದಾಯ ದ್ವಿಗುಣಗೊಳಿಸಲು ಬಂಜರು ಭೂಮಿಯಲ್ಲಿ ಸೌರ ವಿದ್ಯುತ್ ಘಟಕ ಉತ್ತೇಜನ ನೀಡಲಾಗುತ್ತಿದ್ದು, ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ ಬಿಜೆಪಿ ಮಧುಗಿರಿ ಸಂಘಟನಾತ್ಮಕ ಜಿಲ್ಲೆ ವತಿಯಿಂದ ನವಂಬರ್ ೨೭ ಮತ್ತು ೨೮ರಂದು ಎಲ್ಲಾ ಮಂಡಲಗಳಲ್ಲಿ ಹಾಗೂ ಸಿರಾ ಪಾವಗಡ, ಕೊರಟಗೆರೆ ತಾಲ್ಲೂಕು ಕೇಂದ್ರಗಳಲ್ಲಿ ರೈತ ಮೋರ್ಚಾ ವತಿಯಿಂದ ಉಗ್ರ ಪ್ರತಿಭಟನೆ ನಡೆಸಿ, ಡಿಸೆಂಬರ್ ೩ ರಂದು ಮಧುಗಿರಿಯಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದೆಂದು ತಿಳಿಸಿದರು.


ನಂತರ ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಲಕ್ಷಾಂತರ ರೈತರೊಂದಿಗೆ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.


ಈ ಸಂದರ್ಭದಲ್ಲಿ ತಾಲ್ಲೂಕು ಮಂಡಲ ಅಧ್ಯಕ್ಷ ಹನುಮಂತರೆಡ್ಡಿ, ಜಿಲ್ಲಾ ಉಪಾಧ್ಯಕ್ಷ ಪಾಂಡುರಂಗ ರೆಡ್ಡಿ, ಮಹಿಳಾ ಮೋರ್ಚಾ ಅಧ್ಯಕ್ಷೆ ಉಮಾ ವಿಜಯರಾಜ್, ಮುಖಂಡರುಗಳಾದ ರಮೇಶ್ ಪವನ್ ಎಂಜಲಗೆರೆ ಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.