Home ಜಿಲ್ಲೆ ಕಲಬುರಗಿ ಡಾ. ಅಜಯ್ ಸಿಂಗ್ ವಿರುದ್ಧ ದೇವೇಂದ್ರ ದೇಸಾಯಿ ಕಿಡಿ

ಡಾ. ಅಜಯ್ ಸಿಂಗ್ ವಿರುದ್ಧ ದೇವೇಂದ್ರ ದೇಸಾಯಿ ಕಿಡಿ

ಕಲಬುರಗಿ,ಜು.೫: ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ. ಅಜಯ್ ಸಿಂಗ್ ಅವರು ಹೆಸರಿಗೆ ಮಾತ್ರ ಅಧ್ಯಕ್ಷರಾಗಿದ್ದು, ಜಿಲ್ಲೆಯ ಅಭಿವೃದ್ಧಿ ವಿಚಾರದಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಕಲಬುರಗಿ ನಗರ ಬಿಜೆಪಿ ಓಬಿಸಿ ಮೋರ್ಚಾ ಅಧ್ಯಕ್ಷ ದೇವೇಂದ್ರ ದೇಸಾಯಿ ಕಲ್ಕೂರ ತೀವ್ರ ವಾಗ್ದಾಳಿ ನಡೆಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲಬುರಗಿ ನಗರದ ರಸ್ತೆ, ಕುಡಿಯುವ ನೀರು, ಸ್ವಚ್ಛತೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸೇರಿದಂತೆ ಹಲವು ಸಮಸ್ಯೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದರೂ, ಅಭಿವೃದ್ಧಿ ಮಂಡಳಿ ಅಧ್ಯಕ್ಷರು ಜನರ ಸಂಕಷ್ಟಗಳಿಗೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.
ಅಪ್ಪನ ಕೆರೆ ಹಾಗೂ ಬಹಮನಿ ಸುಲ್ತಾನರ ಕೋಟೆ ಸುತ್ತಮುತ್ತ ಕೈಗೊಳ್ಳಬೇಕಿದ್ದ ಸೌಂದರ್ಯೀಕರಣ ಕಾಮಗಾರಿಗಳು ನಿರೀಕ್ಷಿತ ವೇಗದಲ್ಲಿ ನಡೆಯುತ್ತಿಲ್ಲ. ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಬೇಕಿದ್ದ ಯೋಜನೆಗಳು ನೆನೆಗುದಿಗೆ ಬಿದ್ದಿವೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯು ಈ ಕುರಿತು ಯಾವುದೇ ಪರಿಣಾಮಕಾರಿ ಕ್ರಮ ಕೈಗೊಂಡಿಲ್ಲ ಎಂದು ಅವರು ದೂರಿದರು.
೩೭೧(ಜೆ) ಜಾರಿಯಾದ ನಂತರ ಈ ಭಾಗದ ಅಭಿವೃದ್ಧಿಗೆ ಹೊಸ ದಿಕ್ಕು ಸಿಗಲಿದೆ ಎಂಬ ನಿರೀಕ್ಷೆ ಜನರಲ್ಲಿತ್ತು. ಆದರೆ ಕೈಗಾರಿಕೆಗಳು, ಉದ್ಯೋಗ ಸೃಷ್ಟಿ ಹಾಗೂ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ನಿರೀಕ್ಷಿತ ಪ್ರಗತಿ ಕಂಡುಬAದಿಲ್ಲ. ನೂರಾರು ಯುವಕರು ಉದ್ಯೋಗವಿಲ್ಲದೆ ಪರದಾಡುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
“ಡಾ. ಅಜಯ್ ಸಿಂಗ್ ಅವರು ಬೆಂಗಳೂರಿನಲ್ಲೇ ಹೆಚ್ಚು ಕಾಲ ಕಳೆಯುತ್ತಿದ್ದಾರೆ. ಕಲಬುರಗಿಯ ಸಮಸ್ಯೆಗಳ ಬಗ್ಗೆ ಗಮನಹರಿಸುವ ಬದಲು ಸಭೆ-ಸಮಾರಂಭಗಳಿಗೆ ಮಾತ್ರ ಸೀಮಿತರಾಗಿದ್ದಾರೆ. ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸುವಲ್ಲಿಯೂ ವಿಫಲರಾಗಿದ್ದಾರೆ ಎಂದು ದೇವೇಂದ್ರ ದೇಸಾಯಿ ಟೀಕಿಸಿದರು.
ನಗರದ ರಸ್ತೆಗಳ ದುಸ್ಥಿತಿ ದಿನೇದಿನೇ ಹದಗೆಡುತ್ತಿದೆ. ಮಳೆ ಬಂದರೆ ರಸ್ತೆಗಳು ಕೆಸರುಮಯವಾಗುತ್ತಿದ್ದು, ವಾಹನ ಸವಾರರು ಮತ್ತು ಪಾದಚಾರಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ. ರಸ್ತೆ ದುರಸ್ತಿ ಹೆಸರಿನಲ್ಲಿ ಅಲ್ಲಲ್ಲಿ ಜಲ್ಲಿಕಲ್ಲು ಹಾಗೂ ಮಣ್ಣು ಸುರಿದು ತಾತ್ಕಾಲಿಕ ಕಾಮಗಾರಿ ನಡೆಸಲಾಗುತ್ತಿದೆ. ಅಧಿಕಾರಿಗಳನ್ನು ಪ್ರಶ್ನಿಸಿದರೆ “ಬಜೆಟ್ ಇಲ್ಲ” ಎಂಬ ಉತ್ತರ ನೀಡಿ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.
ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ. ಹಿಂದೆ ಎರಡು ದಿನಗಳಿಗೊಮ್ಮೆ ನೀರು ಸರಬರಾಜಾಗುತ್ತಿತ್ತು. ಈಗ ವಾರಕ್ಕೊಮ್ಮೆ ಅಥವಾ ಹತ್ತು ದಿನಗಳಿಗೊಮ್ಮೆ ಮಾತ್ರ ನೀರು ಬರುತ್ತಿದೆ. ಅನೇಕ ಪ್ರದೇಶಗಳಲ್ಲಿ ಅಶುದ್ಧ ನೀರು ಪೂರೈಕೆಯಾಗುತ್ತಿದ್ದು, ಸಾರ್ವಜನಿಕರ ಆರೋಗ್ಯಕ್ಕೂ ಅಪಾಯ ಎದುರಾಗಿದೆ. ಎಲ್ ಅಂಡ್ ಟಿ ಸಂಸ್ಥೆಯ ನಿರಂತರ ಕುಡಿಯುವ ನೀರಿನ ಯೋಜನೆಯೂ ಆಮೆಗತಿಯಲ್ಲಿ ಸಾಗುತ್ತಿದೆ ಎಂದು ಹೇಳಿದರು.
ನಗರದ ವಿವಿಧ ವಾರ್ಡ್ಗಳಲ್ಲಿ ಕಸದ ರಾಶಿಗಳು ಹೆಚ್ಚಾಗಿದ್ದು, ಸಮರ್ಪಕವಾಗಿ ವಿಲೇವಾರಿಯಾಗುತ್ತಿಲ್ಲ. ಚರಂಡಿಗಳ ಸ್ವಚ್ಛತೆ ಇಲ್ಲದ ಕಾರಣ ದುರ್ವಾಸನೆ ಹರಡುತ್ತಿದ್ದು, ಸೊಳ್ಳೆಗಳ ಕಾಟ ಹೆಚ್ಚಾಗಿದೆ. ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ. ಮಹಾನಗರ ಪಾಲಿಕೆಯ ಸ್ವಚ್ಛತಾ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಆರೋಪಿಸಿದರು.ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷರು ತಕ್ಷಣ ಕಲಬುರಗಿಯ ಜನರ ಸಮಸ್ಯೆಗಳ ಬಗ್ಗೆ ಗಮನಹರಿಸಿ, ಬಾಕಿ ಉಳಿದಿರುವ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಬೇಕು.
ರಸ್ತೆ, ಕುಡಿಯುವ ನೀರು, ಸ್ವಚ್ಛತೆ ಸೇರಿದಂತೆ ಮೂಲಭೂತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಸರ್ಕಾರಕ್ಕೆ ದೇವೇಂದ್ರ ದೇಸಾಯಿ ಕಲ್ಕೂರ ಆಗ್ರಹಿಸಿದರು.