Home Lead News ಭಿನ್ನಾಭಿಪ್ರಾಯ ಶಮನ ಸಭೆ

ಭಿನ್ನಾಭಿಪ್ರಾಯ ಶಮನ ಸಭೆ

ನವದೆಹಲಿ,ಜೂ.೮- ಮುಂಬರುವ ಲೋಕಸಭಾ ಚುನಾವಣೆ ಹಾಗೂ ದೇಶದ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಹಿನ್ನೆಲೆಯಲ್ಲಿ, ಪ್ರತಿಪಕ್ಷಗಳ ‘ಇಂಡಿಯಾ’ ಒಕ್ಕೂಟದ ಪ್ರಮುಖ ಕಾರ್ಯತಂತ್ರದ ಸಭೆಯು ಸೋಮವಾರ ಇಲ್ಲಿನ ಕಾನ್‌ಸ್ಟಿಟ್ಯೂಷನ್ ಕ್ಲಬ್‌ನಲ್ಲಿ ನಡೆಯಿತು.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವನ್ನು ಸೋಲಿಸುವ ಕುರಿತು ತಂತ್ರಗಾರಿಕೆ ರೂಪಿಸಲು ಚರ್ಚೆ ನಡೆಸಲಾಯಿತು.

ಪಂಚರಾಜ್ಯಗಳ ಚುನಾವಣೆಯಲ್ಲಿ ಸೋಲು ಮತ್ತು ಮಿತ್ರಪಕ್ಷಗಳ ನಡುವಿನ ಆಂತರಿಕ ಭಿನ್ನಾಭಿಪ್ರಾಯಗಳ ನಡುವೆಯೇ ಒಕ್ಕೂಟದ ಒಗ್ಗಟ್ಟನ್ನು ಪ್ರದರ್ಶಿಸಲು ೨೩ ಪಕ್ಷಗಳ ನಾಯಕರು ಈ ಸಭೆಯಲ್ಲಿ ಭಾಗಿಯಾಗಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಸಂಸದೀಯ ಮಂಡಳಿ ಅಧ್ಯಕ್ಷೆ ಸೋನಿಯಾ ಗಾಂಧಿ, ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್, ಆರ್‌ಜೆಡಿಯ ತೇಜಸ್ವಿ ಯಾದವ್, ಎನ್‌ಸಿಪಿಯ ಸುಪ್ರಿಯಾ ಸುಳೆ, ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಮತ್ತು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಸೇರಿದಂತೆ ಹಲವು ಹಿರಿಯ ನಾಯಕರು ಸಭೆಯಲ್ಲಿ ಉಪಸ್ಥಿತರಿದ್ದಾರೆ. ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ವರ್ಚುವಲ್ ಮೂಲಕ ಸಭೆಗೆ ಸೇರಿಕೊಂಡಿದ್ದಾರೆ.


ತಮಿಳುನಾಡು ವಿಧಾನಸಭಾ ಚುನಾವಣೆಯ ನಂತರ ಕಾಂಗ್ರೆಸ್ ಜೊತೆಗಿನ ಭಿನ್ನಾಭಿಪ್ರಾಯದಿಂದಾಗಿ ಡಿಎಂಕೆ ಈ ಸಭೆಯಿಂದ ದೂರ ಉಳಿದಿದೆ. ಇತ್ತ ಆಮ್ ಆದ್ಮಿ ಪಕ್ಷ ಕೂಡ ಒಕ್ಕೂಟದಿಂದ ಅಂತರ ಕಾಯ್ದುಕೊಂಡಿದೆ. ಸಭೆಯ ಆರಂಭಿಕ ಭಾಷಣದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.ದೇಶದಲ್ಲಿ ಪ್ರಜಾಪ್ರಭುತ್ವ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದ್ದು, ಸಂವಿಧಾನದ ಮೇಲಿನ ದಾಳಿ ಅವಿರತವಾಗಿ ಮುಂದುವರಿದಿದೆ ಎಂದು ಆರೋಪಿಸಿದರು.


ವಿಶೇಷ ತೀವ್ರ ಪರಿಷ್ಕರಣೆ ಎಸ್ ಪ್ರಕ್ರಿಯೆಯ ಮೂಲಕ ಲಕ್ಷಾಂತರ ಜನರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಖರ್ಗೆ ದೂರಿದ್ದಾರೆ. ನಿರಂತರವಾಗಿ ನಡೆಯುತ್ತಿರುವ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಉದ್ಯೋಗ ನೇಮಕಾತಿ ಅಕ್ರಮಗಳಿಂದಾಗಿ ದೇಶದ ಲಕ್ಷಾಂತರ ಯುವಕರ ಭವಿಷ್ಯಕ್ಕೆ ದ್ರೋಹ ಬಗೆಯಲಾಗುತ್ತಿದೆ.

ಸಭೆಯ ಪ್ರಮುಖ ಕಾರ್ಯಸೂಚಿಗಳು


ಮೂಲಗಳ ಪ್ರಕಾರ, ಈ ಸಭೆಯಲ್ಲಿ ಒಕ್ಕೂಟದ ನಾಯಕರು ಮುಖ್ಯವಾಗಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆ ಎದುರಿಸುವುದು,ದೇಶಾದ್ಯಂತ ಸದ್ದು ಮಾಡುತ್ತಿರುವ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ , ತೀವ್ರವಾಗಿ ಕಾಡುತ್ತಿರುವ ನಿರುದ್ಯೋಗ, ಬೆಲೆ ಏರಿಕೆ ಮತ್ತು ಕಷ್ಟದಲ್ಲಿರುವ ವಲಯ,ಎನ್‌ಡಿಎಯೇತರ ರಾಜ್ಯ ಸರ್ಕಾರಗಳ ಮೇಲಿನ ತಾರತಮ್ಯ ಮತ್ತು ತನಿಖಾ ಸಂಸ್ಥೆಗಳ ದುರ್ಬಳಕೆ ಕುರಿತು ಚರ್ಚೆ ನಡೆಸಲಾಯಿತು.


ತಮ್ಮ ಮುಂದಿನ ಹೋರಾಟದ ಹಾದಿ ಹಾಗೂ ೨೦೨೯ರ ಸಾರ್ವತ್ರಿಕ ಚುನಾವಣೆಯ ಜಂಟಿ ತಂತ್ರಗಾರಿಕೆಯನ್ನು ಪ್ರಕಟಿಸಲಿದ್ದಾರೆ ಎಂದು ತಿಳಿದುಬಂದಿದೆ.
ಸಭೆ ಆರಂಭವಾಗುವ ಮುನ್ನವೇ ದೆಹಲಿಯ ಪ್ರಮುಖ ವೃತ್ತಗಳಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಆಕ್ಷೇಪಾರ್ಹ ಪೋಸ್ಟರ್‌ಗಳು ಪ್ರತ್ಯಕ್ಷವಾಗಿದ್ದವು. ಈ ಪೋಸ್ಟರ್‌ಗಳಲ್ಲಿ ಈ ಹಿಂದೆ ಶರದ್ ಪವಾರ್, ಮಮತಾ ಬ್ಯಾನರ್ಜಿ, ಎಂ.ಕೆ. ಸ್ಟಾಲಿನ್ ಮತ್ತು ಅರವಿಂದ್ ಕೇಜ್ರಿವಾಲ್ ಅವರು ಕಾಂಗ್ರೆಸ್ ಹಾಗೂ ರಾಹುಲ್ ಗಾಂಧಿ ವಿರುದ್ಧ ಆಡಿದ್ದ ಹಳೆಯ ಟೀಕೆಗಳನ್ನು ಮುದ್ರಿಸಲಾಗಿತ್ತು. ಒಕ್ಕೂಟದಲ್ಲಿ ಬಿರುಕು ಮೂಡಿಸಲು ವಿರೋಧಿಗಳು ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಿದ ಯೂತ್ ಕಾಂಗ್ರೆಸ್ ಕಾರ್ಯಕರ್ತರು, ಬೆಳ್ಳಂಬೆಳಗ್ಗೆಯೇ ಈ ಎಲ್ಲಾ ಪೋಸ್ಟರ್‌ಗಳನ್ನು ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.