
ಮಾಲೂರು ಜು೨೯:ನಗರದಲ್ಲಿರುವ ತಾಲ್ಲೂಕು ಕಚೇರಿಗೆ ವಿವಿಧ ಕೆಲಸ ಕಾರ್ಯಗಳಿಗಾಗಿ ಆಗಮಿಸುವ ಸಾರ್ವಜನಿಕರನ್ನು ಅಲೆಸದೆ ಕೆಲಸ ಕಾರ್ಯಗಳನ್ನು ಕಾನೂನು ಚೌಕಟ್ಟಿನಲ್ಲಿ ತ್ವರಿತಗತಿಯಲ್ಲಿ ಮಾಡಿಕೊಡುವಂತೆ ಶಾಸಕ ಕೆ.ವೈ.ನಂಜೇಗೌಡ ಹೇಳಿದರು.
ನಗರದ ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿ ವಿವಿಧ ರೀತಿಯ ಕೆಲಸ ಕಾರ್ಯಗಳಿಗಾಗಿ ಕಾಯುತ್ತಿದ್ದ ಸಾರ್ವಜನಿಕರಿಂದ ಹಾಗೂ ಅಧಿಕಾರಿಗಳಿಂದ ಮಾಹಿತಿ ಪಡೆದು ಅವರು ಮಾತನಾಡಿದರು.
ತಾಲೂಕಿನಲ್ಲಿ ಭ್ರಷ್ಟಾಚಾರ ರಹಿತ ಆಡಳಿತ ನೀಡುವ ಸಲುವಾಗಿ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ನೌಕರರು ಹಾಗೂ ಅಧಿಕಾರಿಗಳು ಸಾರ್ವಜನಿಕ ಕೆಲಸ ಕಾರ್ಯಗಳಿಗೆ ಆಗಮಿಸುವ ಸಾರ್ವಜನಿಕರಿಂದ ಏನನ್ನು ಅಪೇಕ್ಷಿಸದೆ ಅವರನ್ನು ಅಲೆದಾಡಿಸದೆ ತ್ವರಿತ ಗತಿಯಲ್ಲಿ ಅವರ ಕೆಲಸಗಳನ್ನು ಮಾಡಿಕೊಡಲು ಸೂಚಿಸಲಾಗಿದೆ ಎಂದರು.
ರಾಜ್ಯದಲ್ಲಿ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದು, ಸರ್ಕಾರಿ ಹಾಗೂ ಸಾರ್ವಜನಿಕ ಕೆಲಸ ಕಾರ್ಯಗಳು ತ್ವರಿತಗತಿಯಲ್ಲಿ ನಡೆಸಲು ಆಡಳಿತ ಯಂತ್ರಕ್ಕೆ ಚುರುಕುಗೊಳಿಸಲಾಗಿದೆ.ಇಲಾಖೆಗಳಲ್ಲಿ ಸಾರ್ವಜನಿಕರಿಗೆ ಸಿಗುವ ಸವಲತ್ತುಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸುವುದರ ಮೂಲಕ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರು ಸರ್ಕಾರದ ಯೋಜನೆ ಮತ್ತು ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಲು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದರು.
ತಾಲೂಕಿನಲ್ಲಿ ಸುಮಾರು ೩೨೦೦ ಕೋಟಿ ರೂಗಳ ವೆಚ್ಚದ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿದ್ದು ಹದ ಗೆಟ್ಟ ರಸ್ತೆಗಳ ಅಭಿವೃದ್ಧಿಗೆ ಸರ್ಕಾರವು ಅನುದಾನ ಬಿಡುಗಡೆ ಮಾಡಿದೆ, ಶೀಘ್ರದಲ್ಲಿಯೇ ನಗರ ಸೇರಿದಂತೆ ಗ್ರಾಮೀಣ ಭಾಗದ ಹದಗೆಟ್ಟ ರಸ್ತೆಗಳ ಡಾಂಬರೀಕರಣ ಮಾಡಲಾಗುವುದು ಎಂದು ಹೇಳಿದರು.
ತಾಲೂಕಿನಲ್ಲಿ ಮುಂಗಾರು ಆರಂಭವಾಗಿದ್ದರು ಸಹ ಸಕಾಲಕ್ಕೆ ಮಳೆಯಾಗದೆ ರೈತರು ಬಿತ್ತನೆ ಕಾರ್ಯದಲ್ಲಿ ತೊಡಗಿಸಿಕೊಂಡಿಲ್ಲ.ಮಳೆ ಬಾರದ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿದೆ.ಅಧಿಕಾರಿಗಳು ಸಮೀಕ್ಷೆ ನಡೆಸಿ ಸಮರ್ಪಕವಾದ ಅಂಕಿ ಅಂಶ ನೀಡಬೇಕು.ಜಿಲ್ಲಾ ಉಸ್ತುವಾರಿ ಸಚಿವರು,ಕಂದಾಯ ಇಲಾಖೆ ಸಚಿವರು ಹಾಗೂ ಮುಖ್ಯಮಂತ್ರಿಗಳ ಬಳಿ ಚರ್ಚಿಸಿ ಬರ ತಾಲೂಕು ಘೋಷಣೆ ಮಾಡಿಸಿ ಸರ್ಕಾರದಿಂದ ಬರುವ ಬರ ಪರಿಹಾರವನ್ನು ಒದಗಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ತಹಶಿಲ್ದಾರ್ ಎಂ.ವಿ.ರೂಪಾ, ಕಚೇರಿಯ ಸಿಬ್ಬಂದಿಗಳು ಹಾಜರಿದ್ದರು.


































