Home ಜಿಲ್ಲೆ ಬೆಂಗಳೂರು ವಿವಿಧ ಇಲಾಖೆಗಳಿಂದ ಅರ್ಹ ಫಲಾನುಭವಿಗಳಿಗೆ ಸವಲತ್ತುಗಳ ವಿತರಣೆ

ವಿವಿಧ ಇಲಾಖೆಗಳಿಂದ ಅರ್ಹ ಫಲಾನುಭವಿಗಳಿಗೆ ಸವಲತ್ತುಗಳ ವಿತರಣೆ

ವಿಜಯಪುರ.ಸೆ.೭- ಸಾರ್ವಜನಿಕರಿಂದ ಸ್ವೀಕರಿಸುವ ಅರ್ಜಿಗಳಲ್ಲಿ ಕಾನೂನು ತೊಡಕುಗಳಿಲ್ಲದ ಪ್ರಕರಣಗಳನ್ನು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ ಮಾಡಿ ಪರಿಹಾರ ಒದಗಿಸಲಾಗುವುದು ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದರು.


ಪಟ್ಟಣದ ಅನ್ನಪೂರ್ಣೇಶ್ವರಿ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ಹಾಗೂ ಪ್ರಜಾಸೇವಾ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ತಾಲ್ಲೂಕು ಮಟ್ಟದ ಪ್ರಜಾಸೇವಾ ಆಂದೋಲನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಶಯದಂತೆ ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಎಂಬ ಧ್ಯೇಯದೊಂದಿಗೆ ಪ್ರಜಾಸೇವಾ ಇಲಾಖೆ ಕಾರ್ಯಾರಂಭ ಮಾಡಿದೆ.ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಒಂದೇ ಸೂರಿನಡಿ ಸ್ಥಳದಲ್ಲೇ ದೂರು-ಮನವಿಗಳನ್ನು ಇತ್ಯರ್ಥಪಡಿಸಲು ಈ ಅಭಿಯಾನ ರೂಪಿಸಲಾಗಿದೆ. ಪ್ರತಿ ಶನಿವಾರವೂ ಈ ಕಾರ್ಯಕ್ರಮ ನಡೆಯಲಿದ್ದು, ಮುಂದಿನ ದಿನಗಳಲ್ಲಿ ಹೋಬಳಿ ಮಟ್ಟದಲ್ಲೂ ಶಾಸಕರ ಅಧ್ಯಕ್ಷತೆಯಲ್ಲಿ ಆಂದೋಲನ ಸಭೆಗಳು ಜರುಗಲಿವೆ ಎಂದು ಸಚಿವರು ಹೇಳಿದರು.


ಪ್ರಜಾಸೇವಾ ಆಂದೋಲನ ಸಭೆಯಲ್ಲಿ ಸಾಮಾಜಿಕ ಭದ್ರತೆ ಹಾಗೂ ವಿಕಲಚೇತನರ ಸಬಲೀಕರಣ ಇಲಾಖೆ: ಪಿಂಚಣಿ ಮಂಜೂರಾತಿ ಪತ್ರ ಹಾಗೂ ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ಟಾಪ್ ವಿತರಣೆ ಮಾಡಲಾಯಿತು.


ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ, ಜಿಲ್ಲಾ ಪಂಚಾಯತ್ ಸಿಇಒ ಡಾ. ವಾಸಂತಿ ಅಮರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ್, ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ರಾಜಣ್ಣ, ಉಪಾಧ್ಯಕ್ಷ ನಾರಾಯಣಸ್ವಾಮಿ, ವಿಜಯಪುರ ಪುರಸಭೆ ಅಧ್ಯಕ್ಷೆ ಭವ್ಯ ಮಹೇಶ್, ಕೆ.ಪಿ.ಸಿ.ಸಿ. ಕಾರ್ಯದರ್ಶಿ ವಿ. ಮಂಜುನಾಥ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.