
ಜಮಖಂಡಿ: ತಾಲೂಕಿನ ಕೊಣ್ಣೂರು ಗ್ರಾಮದ ಮೂಲಸೌಕರ್ಯ, ಶೈಕ್ಷಣಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಹಾಗೂ ಬಾಗಲಕೋಟೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಮಹತ್ವದ ಜಂಟಿ ಸಭೆ ನಡೆಯಿತು.
ಸಭೆಯಲ್ಲಿ ಗ್ರಾಮದ ಪ್ರಮುಖ ಸಮಸ್ಯೆಗಳು, ಅಭಿವೃದ್ಧಿ ಕಾಮಗಾರಿಗಳು ಹಾಗೂ ಸಾರ್ವಜನಿಕರ ಬೇಡಿಕೆಗಳ ಕುರಿತು ಸುದೀರ್ಘವಾಗಿ ಚರ್ಚಿಸಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಲಾಯಿತು.
6 ಪ್ರಮುಖ ರಸ್ತೆಗಳ ಡಾಂಬರೀಕರಣ
ಕೊಣ್ಣೂರು ಗ್ರಾಮದ ಆರು ಪ್ರಮುಖ ರಸ್ತೆಗಳನ್ನು ಡಾಂಬರೀಕರಣಗೊಳಿಸಲು ಅಂದಾಜು ಪತ್ರಿಕೆಯೊಂದಿಗೆ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಪ್ರಸ್ತಾವನೆಗೆ ಶೀಘ್ರ ಅನುಮೋದನೆ ದೊರೆಯುವಂತೆ ಹಾಗೂ ಅನುದಾನ ಬಿಡುಗಡೆಗೆ ಸರ್ಕಾರದ ಮಟ್ಟದಲ್ಲಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಭರವಸೆ ನೀಡಿದರು.
ಪಿಯು ಕಾಲೇಜು ವರ್ಗಾವಣೆ ಕುರಿತು ಚರ್ಚೆ
ಕೊಣ್ಣೂರು ಗ್ರಾಮಕ್ಕೆ ಮಂಜೂರಾಗಿದ್ದ ಪದವಿ ಪೂರ್ವ ಕಾಲೇಜನ್ನು ಬೇರೆಡೆಗೆ ವರ್ಗಾಯಿಸಿರುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಈ ಸಂಬಂಧದ ಪ್ರಸ್ತಾವನೆ ಪ್ರಸ್ತುತ ಸರ್ಕಾರದ ಹಂತದಲ್ಲಿದ್ದು, ಸೂಕ್ತ ಕ್ರಮಕ್ಕಾಗಿ ಪರಿಶೀಲನೆಯಲ್ಲಿದೆ ಎಂದು ತಿಳಿಸಲಾಯಿತು.
ಮಡ್ಡಿ ಪ್ಲಾಟ್ ನಿವಾಸಿಗಳಿಗೆ ಹಕ್ಕುಪತ್ರ
ಕೊಣ್ಣೂರು ಗ್ರಾಮದ ಮಡ್ಡಿ ಪ್ಲಾಟ್‍ನಲ್ಲಿ ವಾಸಿಸುತ್ತಿರುವ ಬಡ ನಿವಾಸಿಗಳಿಗೆ ಶಾಶ್ವತ ಹಕ್ಕುಪತ್ರ ವಿತರಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಈ ಸಂಬಂಧ ಈಗಾಗಲೇ ಗ್ರಾಮಸಭೆ ನಡೆಸಲಾಗಿದ್ದು, ಅರ್ಹ ಫಲಾನುಭವಿಗಳನ್ನು ನಿಖರವಾಗಿ ಗುರುತಿಸಲು ಮತ್ತೊಮ್ಮೆ ಸ್ಥಳ ಪರಿಶೀಲನೆ ನಡೆಸಲು ನಿರ್ಧರಿಸಲಾಯಿತು.
ಮುಂಬರುವ ಗ್ರಾಮಸಭೆಗಳಲ್ಲಿ ಅರ್ಹ ಫಲಾನುಭವಿಗಳ ಅಂತಿಮ ಪಟ್ಟಿಯನ್ನು ಸಿದ್ಧಪಡಿಸಿ, ಶೀಘ್ರದಲ್ಲೇ ಹಕ್ಕುಪತ್ರ ವಿತರಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸಂಗಪ್ಪ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದರು.
ಕೊಣ್ಣೂರು ಗ್ರಾಮದ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಪ್ರಮುಖ ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸಿ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಬದ್ಧವಾಗಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು.
ಜಮಖಂಡಿ ತಾಲೂಕು ಪಂಚಾಯತ ಕಾರ್ಯ ನಿರ್ವಾಹಕ ಅಧಿಕಾರಿ ಮಲ್ಲಿಕಾರ್ಜುನ ಬಡಗೇರ ಸೇರಿದಂತೆ ಇನ್ನಿತರರು ಇದ್ದರು































