
ಬೀದರ್:ಜ.30:ಮಹಿಳೆ ಮತ್ತು ಮಕ್ಕಳ ಅನೈತಿಕ ಸಾಗಣೆ ತಡೆ ಹಾಗೂ 1956ರ ಅನೈತಿಕ ಸಂಚಾರ (ತಡೆಗಟ್ಟುವಿಕೆ) ಕಾಯ್ದೆ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಜಿಲ್ಲಾ ಮಟ್ಟದ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಬೀದರ್ ಜಿಲ್ಲಾ ಸಂಪನ್ಮೂಲ ಕೇಂದ್ರದಲ್ಲಿ ಬುಧವಾರ ಆಯೋಜಿಸಲಾಯಿತು.
ಜಿಲ್ಲಾಡಳಿತ ಬೀದರ್, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಈ ಕಾರ್ಯಕ್ರಮ ನಡೆಯಿತು. ಒನ್ ಸ್ಟಾಪ್ ಸೆಂಟರ್ ಸಿಬ್ಬಂದಿ, ಜಿಲ್ಲಾ ಮಹಿಳಾ ಸಬಲೀಕರಣ ಘಟಕದ ಸಿಬ್ಬಂದಿ ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಸದಸ್ಯರು ತರಬೇತಿಯಲ್ಲಿ ಭಾಗವಹಿಸಿದರು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಶ್ರೀಧರ ಎಂ.ಎಸ್. ಅವರು ಮಾತನಾಡಿ, ಮಹಿಳೆ ಹಾಗೂ ಮಕ್ಕಳ ಅನೈತಿಕ ಸಾಗಣೆ ಗಂಭೀರ ಸಾಮಾಜಿಕ ಸಮಸ್ಯೆಯಾಗಿದ್ದು, ಅಪರಿಚಿತ ವ್ಯಕ್ತಿಗಳ ಮೂಲಕ ಮಕ್ಕಳನ್ನು ಹಾಗೂ ಮಹಿಳೆಯರನ್ನು ಬೇರೆ ಜಿಲ್ಲೆ, ರಾಜ್ಯ ಹಾಗೂ ದೇಶಗಳಿಗೆ ಸಾಗಿಸಿ ಲೈಂಗಿಕ ಶೋಷಣೆ, ವೈಶ್ಯವಾಟಿಕೆ ಮತ್ತು ಭಿಕ್ಷಾಟನೆಗೆ ಒಳಪಡಿಸಲಾಗುತ್ತಿದೆ ಎಂದು ಎಚ್ಚರಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಶ್ರೀ ವಿಲಿಯಂ ಕ್ರಿಸ್ಟೋಫರ್ (ಇಂಟನ್ರ್ಯಾಷನಲ್ ಜಸ್ಟಿಸ್ ಮಿಷನ್, ಬೆಂಗಳೂರು) ಅವರು ಮಾನವ ಕಳ್ಳಸಾಗಾಣಿಕೆ ತಡೆಗೆ ಸಂಬಂಧಿಸಿದ ಕಾನೂನುಗಳ ಬಗ್ಗೆ ವಿವರಿಸಿ, 1956ರ ಅನೈತಿಕ ಸಂಚಾರ ತಡೆ ಕಾಯ್ದೆಯ ಮಹತ್ವವನ್ನು ವಿವರಿಸಿದರು.
ಕಾರ್ಯಕ್ರಮವನ್ನು ಹಿರಿಯ ವಕೀಲ ಬಿ.ಎಸ್. ಪಾಟೀಲ್ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ನಿರೂಪಣಾಧಿಕಾರಿ ಶ್ರೀಕಾಂತ ಮೆಂಗಜಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ರೂಪಾ ಕೋಟೆಗೌಡರ್, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಶಿಮಪ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.
ಕಾರ್ಯಕ್ರಮದ ವಂದನಾರ್ಪಣೆಯನ್ನು ಮಿಷನ್ ಶಕ್ತಿ ಯೋಜನೆಯ ಜಿಲ್ಲಾ ಸಂಯೋಜಕಿ ಶ್ರೀಮತಿ ರೋಮಾ ಅವರು ನೆರವೇರಿಸಿದರು.




























