ಜಿಲ್ಲಾಮಟ್ಟದ ಸ್ವಯಂಸೇವಕರ ತರಬೇತಿ

ಯಾದಗಿರಿ:ಫೆ.೧:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಧರ್ಮಸ್ಥಳದ ಜನಜಾಗೃತಿ ವೇದಿಕೆ ಪ್ರಾದೇಶಿಕ ವಿಭಾಗ ಬೆಳ್ತಂಗಡಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಯಾದಗಿರಿ ಜಿಲ್ಲೆ ಇವರ ಸಹಯೋಗದಲ್ಲಿ ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಕಾರ್ಯಕ್ರಮದ ಜಿಲ್ಲಾಮಟ್ಟದ ಸ್ವಯಂಸೇವಕರ ತರಬೇತಿಯನ್ನು ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮವನ್ನು ಜನಜಾಗೃತಿ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಶ್ರೀಯುತ ವಿವೇಕ್ ವಿನ್ಸೆಂಟ್ ಪಾಯ್ಸ್ ಅವರು ಉದ್ಘಾಟಿಸಿದರು. ಉದ್ಘಾಟನಾ ಭಾಷಣದಲ್ಲಿ ಅವರು, ದೇಶದ ರಕ್ಷಣೆಗೆ ಸೈನಿಕರು ಹೇಗೆ ನಿಸ್ವಾರ್ಥವಾಗಿ ಕರ್ತವ್ಯ ನಿರ್ವಹಿಸುತ್ತಾರೋ, ಅದೇ ರೀತಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ಸ್ವಯಂಸೇವಕರು ಕರ್ನಾಟಕ ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಯಾವುದೇ ವಿಪತ್ತು ಸಂಭವಿಸಿದಾಗ ರಕ್ಷಣಾ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕಲಬುರ್ಗಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ದಿನೇಶ್ ಪೂಜಾರಿ ಅವರು, ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಮಾತೃಶ್ರೀ ಹೇಮಾವತಿ ಅಮ್ಮನವರ ಆಶಯದಂತೆ ಕಲ್ಯಾಣ ಕರ್ನಾಟಕದ ಕಲಬುರ್ಗಿ ಪ್ರಾದೇಶಿಕ ವಿಭಾಗದಲ್ಲಿ ಕಳೆದ ದಶಕದಿಂದ ಅನೇಕ ಸಾಮಾಜಿಕ ಸೇವಾ ಕಾರ್ಯಕ್ರಮಗಳ ಜೊತೆಗೆ ಶೌರ್ಯ ವಿಪತ್ತು ಸ್ವಯಂಸೇವಕರ ಪಡೆಯ ಮೂಲಕ ಅನೇಕ ಆಪತ್ತು ಸಂದರ್ಭಗಳಲ್ಲಿ ಸೇವೆ ಸಲ್ಲಿಸಲಾಗುತ್ತಿದೆ ಎಂದು ತಿಳಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಜನಜಾಗೃತಿ ವಿಭಾಗದ ಯೋಜನಾಧಿಕಾರಿಯಾದ ಜಯವಂತ ಪಟಗಾರ ಅವರು, ರಾಜ್ಯದಾದ್ಯಂತ ಕಾರ್ಯನಿರ್ವಹಿಸುತ್ತಿರುವ ಶೌರ್ಯ ಸ್ವಯಂಸೇವಕರ ಸಂಖ್ಯೆ, ಅವರ ಜವಾಬ್ದಾರಿಗಳು ಹಾಗೂ ಯಾವುದೇ ಫಲಾಪೇಕ್ಷೆ ಇಲ್ಲದೆ ಸೇವೆ ಸಲ್ಲಿಸುವ ಮನೋಭಾವದ ಕುರಿತು ಮಾಹಿತಿ ನೀಡಿ ಸ್ವಯಂಸೇವಕರಿಗೆ ಶುಭ ಹಾರೈಸಿದರು.

ಯಾದಗಿರಿ ಜಿಲ್ಲೆಯ ಜಿಲ್ಲಾ ನಿರ್ದೇಶಕರಾದ ವಸಂತ್ ಗೌಡ ಬಿ.ಅವರು ಸಭೆಗೆ ಆಗಮಿಸಿದ ಎಲ್ಲರನ್ನು ಸ್ವಾಗತಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ತಾಲೂಕು ಯೋಜನಾಧಿಕಾರಿಯಾದ ಮಂಜುನಾಥ್ ಅವರು ನಡೆಸಿದರು. ಯೋಜನಾಧಿಕಾರಿಯಾದ ರಾಜೇಶ್ ಅವರು ವಂದಿಸಿದರು.

ಕಾರ್ಯಕ್ರಮದಲ್ಲಿ ಯಾದಗಿರಿ ಜಿಲ್ಲೆಯ ವ್ಯಾಪ್ತಿಯ ಯೋಜನಾಧಿಕಾರಿಗಳಾದ ಶ್ರೀಕಾಂತ್, ದಿನೇಶ್, ಗುರುರಾಜ್, ಜಿಲ್ಲೆಯ ಮೇಲ್ವಿಚಾರಕ ಶ್ರೇಣಿಯ ಕಾರ್ಯಕರ್ತರು, ಕಚೇರಿ ಸಿಬ್ಬಂದಿ, ಸ್ವಯಂಸೇವಕರು, ಸೇವಾ ಪ್ರತಿನಿಧಿಗಳು ಹಾಗೂ ಕೃಷಿ ಮೇಲ್ವಿಚಾರಕರಾದ ಶರಣು ಅವರು ಉಪಸ್ಥಿತರಿದ್ದರು.