
ಯಾದಗಿರಿ: ನಗರಗಳಿಗೆ ವಲಸೆ ಬಂದು ಕಾಯುವ ಅಗತ್ಯವಿಲ್ಲ. ಕೂಲಿ ಕಾರ್ಮಿಕರು ತಮ್ಮ ಸ್ವಂತ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೇ ವಿಬಿ-ಜಿ ರಾಮ್ ಜಿ ಯೋಜನೆಯಡಿ ಅರ್ಜಿ ಸಲ್ಲಿಸಿ ಉದ್ಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ರಾಹುಲ್ ತುಕಾರಾಮ ಪಾಂಡ್ವೆ ಹೇಳಿದರು.
ಯಾದಗಿರಿ ನಗರದ ಮುಖ್ಯ ರಸ್ತೆಯಲ್ಲಿ ಕೆಲಸಕ್ಕಾಗಿ ಕಾಯುತ್ತಿದ್ದ ಕೂಲಿ ಕಾರ್ಮಿಕರನ್ನು ನೇರವಾಗಿ ಭೇಟಿ ಮಾಡಿದ ಜಿಲ್ಲಾಧಿಕಾರಿ, ಸರ್ಕಾರದ ಉದ್ಯೋಗ ಯೋಜನೆಯ ಸದುಪಯೋಗ ಪಡೆದುಕೊಂಡು ಸ್ವಗ್ರಾಮದಲ್ಲೇ ಕೆಲಸ ಮಾಡುವಂತೆ ಸಲಹೆ ನೀಡಿದರು.
ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಗ್ರಾಮೀಣ ಕಾರ್ಮಿಕರು ಉದ್ಯೋಗ ಅರಸಿ ನಗರಗಳಿಗೆ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ತಿಳಿಸಿದರು.
ಯೋಜನೆಯಡಿ ಒಂದು ಕುಟುಂಬಕ್ಕೆ ವರ್ಷಕ್ಕೆ ೧೨೫ ದಿನಗಳ ಉದ್ಯೋಗ ನೀಡಲಾಗುತ್ತಿದ್ದು, ಪ್ರತಿ ದಿನಕ್ಕೆ ?೩೮೨ ದಿನಗೂಲಿ ನಿಗದಿಪಡಿಸಲಾಗಿದೆ. ಕೆರೆ ಅಭಿವೃದ್ಧಿ, ಜಲ ಸಂರಕ್ಷಣೆ, ಮಣ್ಣಿನ ಸಂರಕ್ಷಣೆ ಹಾಗೂ ಸಸಿ ನೆಡುವಿಕೆ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಇದರೊಂದಿಗೆ ಕೃಷಿ ಹೊಂಡ, ದನದ ಕೊಟ್ಟಿಗೆ ಹಾಗೂ ಕೋಳಿ ಸಾಕಾಣಿಕೆ ಶೆಡ್‌ಗಳ ನಿರ್ಮಾಣದಂತಹ ವೈಯಕ್ತಿಕ ಕಾಮಗಾರಿಗಳಿಗೂ ಅವಕಾಶ ಕಲ್ಪಿಸಲಾಗಿದೆ ಎಂದರು.
ಯೋಜನೆಯ ಕುರಿತು ಗ್ರಾಮೀಣ ಭಾಗದ ಜನರಿಗೆ ವ್ಯಾಪಕವಾಗಿ ಮಾಹಿತಿ ನೀಡಬೇಕು. ಅರ್ಹ ಕೂಲಿ ಕಾರ್ಮಿಕರನ್ನು ಗುರುತಿಸಿ ಅವರ ಪಟ್ಟಿಯನ್ನು ಸಿದ್ಧಪಡಿಸಿ, ಅವರಿಗೆ ತಕ್ಷಣ ಉದ್ಯೋಗ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ಸ್ವಗ್ರಾಮದಲ್ಲೇ ಉದ್ಯೋಗ ದೊರೆತರೆ ಕುಟುಂಬವನ್ನು ತೊರೆದು ನಗರಗಳಿಗೆ ವಲಸೆ ಹೋಗುವ ಪರಿಸ್ಥಿತಿ ತಪ್ಪಲಿದೆ. ಇದರಿಂದ ಕುಟುಂಬ ನಿರ್ವಹಣೆ, ಮಕ್ಕಳ ವಿದ್ಯಾಭ್ಯಾಸ ಹಾಗೂ ಆರ್ಥಿಕ ಭದ್ರತೆಗೆ ಹೆಚ್ಚಿನ ನೆರವು ದೊರೆಯಲಿದೆ ಎಂದು ಜಿಲ್ಲಾಧಿಕಾರಿ ರಾಹುಲ್ ತುಕಾರಾಮ ಪಾಂಡ್ವೆ ಹೇಳಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿ ಹಾಗೂ ಕೂಲಿ ಕಾರ್ಮಿಕರು ಉಪಸ್ಥಿತರಿದ್ದರು.





























