Home ಜಿಲ್ಲೆ ಆರೋಗ್ಯಯುತ ಜೀವನಕ್ಕಾಗಿ ಯೋಗ ಮಾಡಿ :ಜಿಲ್ಲಾಧಿಕಾರಿ ಡಾ. ಆನಂದ್ ಕೆ.

ಆರೋಗ್ಯಯುತ ಜೀವನಕ್ಕಾಗಿ ಯೋಗ ಮಾಡಿ :ಜಿಲ್ಲಾಧಿಕಾರಿ ಡಾ. ಆನಂದ್ ಕೆ.

ವಿಜಯಪುರ, ಜೂ. 21:ಆರೋಗ್ಯಯುತ ಜೀವನ ರೂಪಿಸಿಕೊಳ್ಳಲು ಯೋಗವನ್ನು ಪ್ರತಿಯೊಬ್ಬರೂ ತಮ್ಮ ಬದುಕಿನ ದೈನಂದಿನ ಭಾಗವಾಗಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಅವರು ಕರೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆಯುಷ್ ಇಲಾಖೆ ಇವರ ಸಹಯೋಗದಲ್ಲಿ ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ ಎಂಬ ಘೋಷವಾಕ್ಯದ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಯೋಗವು ಜಗತ್ತಿಗೆ ನಮ್ಮ ದೇಶ ನೀಡಿರುವ ಅತ್ಯಂತ ಹೆಮ್ಮೆಯ ಕೊಡುಗೆಯಾಗಿದ್ದು, ಸಾವಿರಾರು ವರ್ಷಗಳ ಇತಿಹಾಸವನ್ನು ಹೊಂದಿದೆ. ಇಂದಿನ ಆಧುನಿಕ ಜೀವನಶೈಲಿಯಲ್ಲಿ ಎದುರಾಗುತ್ತಿರುವ ಒತ್ತಡ, ಆತಂಕ ಹಾಗೂ ಮಾನಸಿಕ ಸಮಸ್ಯೆಗಳಿಗೆ ಯೋಗ ಸಂಜೀವಿನಿಯಾಗಿದೆ.ಮನಸ್ಸು ಮತ್ತು ದೇಹದ ಸದೃಢತೆಗೆ ಯೋಗವು ಬಹು ಮುಖ್ಯವಾಗಿದ್ದು, ಪ್ರತಿನಿತ್ಯ ನಿಯಮಿತವಾಗಿ ಯೋಗಾಭ್ಯಾಸ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ನಿರೋಗಿ ಹಾಗೂ ಸುಂದರ ಜೀವನ ನಡೆಸಲು ಸಾಧ್ಯ ಎಂದು ಅವರು ಆಶಯ ವ್ಯಕ್ತಪಡಿಸಿದರು.
ಯೋಗವು ಪ್ರಪಂಚದಾದ್ಯಂತ ಅತ್ಯಂತ ಜನಪ್ರಿಯತೆಯನ್ನು ಗಳಿಸಿದ್ದು, ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಅತ್ಯಂತ ಪರಿಣಾಮಕಾರಿ ಸಾಧನವಾಗಿದೆ.
ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನೂರಾರು ಯೋಗಾಸಕ್ತರಿಗೆ ಶ್ರೀಮತಿ ಸುನೀತಾ ಬಿರಾದಾರ, ಜ್ಯೋತಿ, ಸಂಜಯ ಹಾಗೂ ಚಂದ್ರಶೇಖರ ಅವರ ಮಾರ್ಗದರ್ಶನದಲ್ಲಿ ಸುಮಾರು 45 ನಿಮಿಷಗಳ ಕಾಲ ವಿವಿಧ ಯೋಗಾಸನಗಳು ಮತ್ತು ಪ್ರಾಣಾಯಾಮದ ಸಾಮೂಹಿಕ ಯೋಗಾಭ್ಯಾಸ ಪ್ರಾತ್ಯಕ್ಷಿಕೆಯನ್ನು ಯಶಸ್ವಿಯಾಗಿ ನಡೆಸಿಕೊಡಲಾಯಿತು.
ಕಾರ್ಯಕ್ರಮದ ಆರಂಭದಲ್ಲಿ ಗಾಯಕ ವೀರೇಶ ವಾಲಿ ಹಾಗೂ ಕಿರಣ್ ತಂಡದವರಿಂದ ನಾಡಗೀತೆ ಪ್ರಸ್ತುತಪಡಿಸಿದರು.
ಈ ಕಾರ್ಯಕ್ರಮದಲ್ಲಿ ಕ ವಿಜಯಪುರ ಮಹಾನಗರ ಪಾಲಿಕೆ ಮೇಯರ್ ಸಿದ್ರಾಮಪ್ಪ ಕರಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ, ಪೆÇಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ. ಶಿವಾನಂದ ಮಾಸ್ತಿಹೊಳಿ ಹಾಗೂ ಜಿಲ್ಲಾ ಆಯುಷ್ ಇಲಾಖೆಯ ಅಧಿಕಾರಿಗಳಾದ ಡಾ. ವಿದ್ಯಾವತಿ ಅಥಣಿ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ್ ಧೈವಾಡಿ, ವಾರ್ತಾಧಿಕಾರಿ ಅಮರೇಶ ದೊಡಮನಿ, ಆಯುಷ್ ಇಲಾಖೆಯ ಆರ್.ಎಸ್. ಪಾಟೀಲ, ಡಾ. ಮಹೇಶ ನಾವದಗಿ, ಸಂಜು ಕುಲಕರ್ಣಿ, ಪಾಟೀಲ, ದೇಸಾಯಿ ಸೇರಿದಂತೆ ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು,ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ, ಪತಂಜಲಿ ಯೋಗ ಸಂಸ್ಥೆ, ವಿವಿಧ ಆಯುರ್ವೇದ ಮತ್ತು ಯುನಾನಿ ಕಾಲೇಜುಗಳ ಸಿಬ್ಬಂದಿ, ಎನ್‍ಸಿಸಿ ಕೆಡೆಟ್‍ಗಳು ಹಾಗೂ ವಿವಿಧ ಶಾಲಾ-ಕಾಲೇಜುಗಳ ನೂರಾರು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಸಕ್ರಿಯವಾಗಿ ಪಾಲ್ಗೊಂಡು ಯೋಗ ದಿನಾಚರಣೆಯನ್ನು ಯಶಸ್ವಿಗೊಳಿಸಿದರು.